ಬೆಂಗಳೂರು: ಅನುದಾನ ಪಟ್ಟಿಯಿಂದ ಜಯನಗರ ವಿಧಾನಸಭಾ ಕ್ಷೇತ್ರವನ್ನು ಹೊರಗಿಟ್ಟ ವಿಚಾರವನ್ನು ಸಂಸದ ತೇಜಸ್ವಿ ಸೂರ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರೊಂದಿಗೆ ಪ್ರಸ್ತಾಪಿಸಿದ್ದರು. ಈ ವೇಳೆ ಅನುದಾನ ಬೇಕಾದರೆ ತಗ್ಗಿ-ಬಗ್ಗಿ ನಡೆದುಕೊಳ್ಳಬೇಕು. ಬೇರೆಯವರೊಂದಿಗೆ ಇರುವ ರೀತಿ ನಮ್ಮ ಬಳಿ ಇರುವಂತಿಲ್ಲ ಎಂದು ಡಿಕೆಶಿ ಹೇಳಿದ್ದರು. ಈ ಮಾತಿಗೆ ಸಿಟ್ಟಾದ ವಿಪಕ್ಷ ನಾಯಕ ಆರ್. ಅಶೋಕ (R Ashok) ಉಪಮುಖ್ಯಮಂತ್ರಿಗಳ ವಿರುದ್ಧ ಕಿಡಿಕಾರಿದ್ದಾರೆ.
ಇದನ್ನೂ ಓದಿ: ಶೋಷಿತ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ದುಪ್ಪಟ್ಟು
“ಡಿ.ಕೆ. ಶಿವಕುಮಾರ್ ಅವರೇ, ನಿಮ್ಮ ಬಳಿ ತಗ್ಗಿ-ಬಗ್ಗಿ ಇರಬೇಕು ಅನ್ನುವುದಕ್ಕೆ ಬೆಂಗಳೂರು ನಗರವನ್ನು ನಿಮ್ಮ ಜಹಗೀರು ಅಂದುಕೊಡಿದ್ದೀರಾ? ಅಧಿಕಾರ ಎನ್ನುವುದು ಮತದಾರರು ಕೊಟ್ಟಿರುವ ಭಿಕ್ಷೆ, ಸಂವಿಧಾನ ಕೊಟ್ಟಿರುವ ಜವಾಬ್ದಾರಿಯೇ ಹೊರತು ಪಾಳೆಗಾರಿಕೆ ಅಲ್ಲ. ಪ್ರಜಾಪ್ರಭುತ್ವದಲ್ಲಿ ನಾವು ತಗ್ಗಿ-ಬಗ್ಗಿ ನಡೆಯಬೇಕಿರುವುದು ಮತಭಿಕ್ಷೆ ನೀಡಿರುವ ಮತದಾರ ಪ್ರಭುಗಳಿಗೆ, ಪ್ರಜಾಪ್ರಭುತ್ವ ವ್ಯವಸ್ಥೆ ನೀಡಿರುವ ಸಂವಿಧಾನಕ್ಕೆ ಹೊರತು ಯಾವ ದೊಣ್ಣೆ ನಾಯಕನಿಗೂ ಅಲ್ಲ” ಎಂದಿದ್ದಾರೆ.
“ಈ ನಿಮ್ಮ ಒಣ ಪ್ರತಿಷ್ಠೆ, ಧಿಮಾಕು, ದರ್ಬಾರು ಎಲ್ಲ ಬಿಟ್ಟು ಜನರ ಸೇವೆ ಮಾಡುವ ಮನೋಭಾವನೆ ಬೆಳೆಸಿಕೊಳ್ಳಿ. ಯಾವುದೇ ಕ್ಷೇತ್ರದ ಬಗ್ಗೆ ತಾರತಮ್ಯ ಮಾಡದೆ ಸಚಿವರಾಗಿ ನಿಮ್ಮ ಕರ್ತವ್ಯ ನಿರ್ವಹಿಸಿ” ಎಂದು ಖಡಕ್ ಖಾರವಾಗಿ ನುಡಿದಿದ್ದಾರೆ.