More

    ಮೈಸೂರು : ಬಿಜೆಪಿಯ ಪಟ್ಟಿಯ ಮೇಲೆ ಎಲ್ಲರ ಚಿತ್ತ

    ಸದೇಶ್ ಕಾರ್ಮಾಡ್
    ಮೈಸೂರು ಜಿಲ್ಲೆಯಲ್ಲಿ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ಮಾಡುತ್ತಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ಈಗಾಗಲೇ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿ ಎರಡನೇ ಪಟ್ಟಿ ಬಿಡುಗಡೆಯ ಸಿದ್ಧತೆಯಲ್ಲಿ ಇದೆ. ಈ ಬಾರಿ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಸಂಕಲ್ಪ ತೊಟ್ಟಿರುವ ಬಿಜೆಪಿ ಇನ್ನೂ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿಲ್ಲ. ಹೀಗಾಗಿ ಎಲ್ಲರ ಚಿತ್ತ ಬಿಜೆಪಿಯ ಪಟ್ಟಿಯ ಕಡೆಗೆ ನೆಟ್ಟಿದ್ದು, ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಂಡರೆ ಜಿಲ್ಲೆಯ ರಾಜಕೀಯ ಕಣದ ಸ್ಪಷ್ಟ ಚಿತ್ರಣ ವ್ಯಕ್ತವಾಗಲಿದೆ.

    ರಾಜ್ಯದಲ್ಲಿ ಇದುವರೆಗೆ ಬಿಜೆಪಿಗೆ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೇರುವ ಅವಕಾಶ ದೊರೆತ್ತೇ ಇಲ್ಲ. ಇದಕ್ಕೆ ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಪಕ್ಷ ಸಂಘಟನೆಯಲ್ಲಿ ಹಿಂದುಳಿದಿರುವುದೇ ಪ್ರಮುಖ ಕಾರಣ. ಆದರೆ, ಈ ಬಾರಿ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡುವ ಜತೆಗೆ ಮೈಸೂರು ಭಾಗದಲ್ಲಿ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಅಧಿಕಾರದ ಗದ್ದುಗೆ ಏರಬೇಕು ಎಂಬುದು ಬಿಜೆಪಿಯ ಲೆಕ್ಕಾರವಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳ ಪೈಕಿ ಅತಿ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಪಣವನ್ನು ತೊಟ್ಟಿದೆ.

    ಹಳೇ ಮೈಸೂರು ಭಾಗದಲ್ಲಿ ಹಿನ್ನಡೆ

    ಬಿಜೆಪಿ ಹಳೇ ಮೈಸೂರು ಭಾಗವನ್ನು ಹೊರತು ಪಡಿಸಿ ಉಳಿದೆಲ್ಲ ಭಾಗಗಳಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸುತ್ತಾ ಬಂದಿದೆ. ಆದರೆ, ಹಳೇ ಮೈಸೂರು ಭಾಗದಲ್ಲಿ ಬಿಜೆಪಿಯ ಸಾಧನೆ ತೃಪ್ತಿಕರವಾಗಿಲ್ಲ. ಒಂದುವೇಳೆ ಈ ಬಾರಿ ಬಿಜೆಪಿ ಮೈಸೂರು ಭಾಗದಲ್ಲಿ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ ರಾಜ್ಯವನ್ನೇ ಗೆದ್ದಂತೆ. ಹಾಗಾಗಿ ಬಿಜೆಪಿ ಮೈಸೂರು ಜಿಲ್ಲೆಯ ಮೇಲೆ ಈ ಬಾರಿ ಹೆಚ್ಚಿನ ನಿರೀಕ್ಷೆಯನ್ನು ಹೊಂದಿದ್ದು, ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ತಯಾರಿಯಲ್ಲಿದೆ. ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಏ.8 ರಂದು ಬಿಡುಗಡೆಯಾಗುವ ಸಾಧ್ಯತೆ ಇದ್ದು, ಈ ಬಾರಿ ಯಾರಿಗೆಲ್ಲ ಟಿಕೆಟ್ ದೊರೆಯುತ್ತದೆ? ಯಾರಿಗೆ ಟಿಕೆಟ್ ಕೈ ತಪ್ಪುತ್ತದೆ ಎಂಬ ಕುತೂಹಲ ಕೆರಳಿದೆ.

    ಆಕಾಂಕ್ಷಿಗಳಿವರು

    ಜಿಲ್ಲೆಯಲ್ಲಿ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಗುರಿ ಹೊಂದಿರುವ ಬಿಜೆಪಿ ವರುಣದಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ. ಆದರೆ, ಇದಕ್ಕೆ ಬಿ.ಎಸ್. ಯಡಿಯೂರಪ್ಪ ಆಸಕ್ತಿ ತೋರುತ್ತಿಲ್ಲ. ‘ಈ ಬಾರಿ ವರುಣದಿಂದ ವಿಜಯೇಂದ್ರ ಸ್ಪರ್ಧಿಸುವುದಿಲ್ಲ’ ಎಂದು ಸ್ವತಃ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಆದರೆ, ಅಂತಿಮ ಕ್ಷಣದಲ್ಲಿ ಪಕ್ಷದ ಹೈಕಮಾಂಡ್ ಯಡಿಯೂರಪ್ಪ ಅವರ ಮನವೊಲಿಸಿ ವಿಜಯೇಂದ್ರ ಅವರನ್ನು ವರುಣದಿಂದ ಕಣಕ್ಕಿಳಿಸಲಿದೆಯೇ ಎಂಬ ಕುತೂಹಲ ಇದೆ. ಒಂದುವೇಳೆ ವಿಜಯೇಂದ್ರ ವರುಣದಿಂದ ಸ್ಪರ್ಧಿಸಿದರೆ ಅದರ ಲಾಭ ಇತರೆ ಕ್ಷೇತ್ರಗಳಿಗೂ ದೊರೆಯುತ್ತದೆ ಎಂಬು ದು ಬಿಜೆಪಿಯ ಲೆಕ್ಕಾಚಾರವಾಗಿದೆ. ಕಳೆದ ಬಾರಿಯಂತೆ ಈ ಬಾರಿಯೂ ಬಿಜೆಪಿ ವರುಣ ಅಭ್ಯರ್ಥಿ ವಿಚಾರ ಸಾಕಷ್ಟು ಕುತೂಹಲ ಕೆರಳುವಂತೆ ಮಾಡಿದೆ. ವರುಣ ಕ್ಷೇತ್ರದಲ್ಲಿ ಬಿಜೆಪಿ ಜಿಲ್ಲಾ ಸಾಮಾಜಿಕ ಜಾಲತಾಣದ ಸಂಚಾಲಕ ಷರತ್ ಪುಟ್ಟಬುದ್ದಿ, 2013ರಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಿದ್ದ ಕಾ.ಪು. ಸಿದ್ದಲಿಂಗಸ್ವಾಮಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವನೂರು ಪ್ರತಾಪ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸದಾನಂದ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ.

    ನಂಜನಗೂಡು ಹಾಗೂ ಚಾಮರಾಜ ಕ್ಷೇತ್ರದಲ್ಲಿ ಹಾಲಿ ಶಾಸಕರಾದ ಹರ್ಷವರ್ಧನ್ ಹಾಗೂ ಎಲ್. ನಾಗೇಂದ್ರ ಅವರಿಗೆ ಟಿಕೆಟ್ ಅಂತಿಮಗೊಳ್ಳುವ ಸಾಧ್ಯತೆಗಳು ಇವೆ. ತಿ.ನರಸೀಪುರ ಕ್ಷೇತ್ರದಲ್ಲಿ ಮಾಜಿ ಶಾಸಕ ಡಾ.ಭಾರತೀ ಶಂಕರ್, ವಿಧಾನ ಪರಿಷತ್ ಮಾಜಿ ಸದಸ್ಯ ಸಿ. ರಮೇಶ್, ವೈದ್ಯರಾದ ಡಾ. ರೇವಣ್ಣ ಟಿಕೆಟ್ ನಿರೀಕ್ಷೆಯಲ್ಲಿ ಇದ್ದಾರೆ. ಕೃಷ್ಣರಾಜ ವಿಧಾನಸಭಾ ಕ್ಷೇತ್ರ ಬಿಜೆಪಿಯ ಗೆಲುವಿನ ನಿರೀಕ್ಷೆ ಹೆಚ್ಚು ಇರುವ ಕ್ಷೇತ್ರವಾಗಿದ್ದು, ಹೀಗಾಗಿ ಇಲ್ಲಿ ಈ ಬಾರಿಯೂ ಟಿಕೆಟ್‌ಗೆ ಪ್ರಬಲ ಪೈಪೋಟಿ ಎದುರಾಗಿದ್ದು, ಹಾಲಿ ಶಾಸಕ ಎಸ್.ಎ. ರಾಮದಾಸ್, ಮುಡಾ ಮಾಜಿ ಅಧ್ಯಕ್ಷ ಎಚ್.ವಿ. ರಾಜೀವ್ ಹಾಗೂ ಬಿಜೆಪಿ ನಗರಾಧ್ಯಕ್ಷ ಟಿ.ಎಸ್. ಶ್ರೀವತ್ಸ ಪ್ರಬಲ ಆಕಾಂಕ್ಷಿಯಾಗಿದ್ದಾರೆ.

    ಎಚ್.ಡಿ. ಕೋಟೆ ಕ್ಷೇತ್ರದಲ್ಲಿ ಕಳೆದ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಜು, ಅರಣ್ಯ ವಸತಿ ಹಾಗೂ ವಿಹಾರ ಧಾಮಗಳ ನಿಗಮ ಅಧ್ಯಕ್ಷ ಅಪ್ಪಣ್ಣ, ಪಕ್ಷದ ಮುಖಂಡ ಕೃಷ್ಣಸ್ವಾಮಿ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಂಸದ ಸಿ.ಎಚ್. ವಿಜಯಶಂಕರ್, ಬಿಜೆಪಿ ಜಿಲ್ಲಾ ಸಹ ವಕ್ತಾರ ವಸಂತ್, ಪಕ್ಷದ ಮುಖಂಡ ಸೋಮಶೇಖರ್ ಆಕಾಂಕ್ಷಿಗಳಾಗಿದ್ದಾರೆ. ಹುಣಸೂರು ಕ್ಷೇತ್ರದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯೋಗಾನಂದ್, ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿರುವ ಸೋಮಶೇಖರ್, ಪಕ್ಷದ ಮುಖಂಡ ರಮೇಶ್ ಕುಮಾರ್ ಆಕಾಂಕ್ಷಿಗಳಾಗಿದ್ದಾರೆ.

    ಕೆ.ಆರ್. ನಗರ ಕ್ಷೇತ್ರದಲ್ಲಿ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ಅಧ್ಯಕ್ಷ ಮಿರ್ಲೆ ಶ್ರೀನಿವಾಸ ಗೌಡ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹೊಸಹಳ್ಳಿ ವೆಂಕಟೇಶ್, ಮಾಧ್ಯಮ ಪ್ರಮುಖ್ ಎಚ್.ಪಿ. ಗೋಪಾಲ್ ಆಕಾಂಕ್ಷಿಗಳಾಗಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪಕ್ಷದ ಮುಖಂಡರಾದ ಅರುಣ್ ಕುಮಾರ್ ಗೌಡ, ಮಹೇಂದ್ರ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ಅಧ್ಯಕ್ಷ ಹೇಮಂತ್ ಕುಮಾರ್ ಗೌಡ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ನರಸಿಂಹರಾಜ ಕ್ಷೇತ್ರದಲ್ಲಿ ಕಳೆದ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಮೇಯರ್ ಸಂದೇಶ್ ಸ್ವಾಮಿ, ನಗರ ಪಾಲಿಕೆ ಸದಸ್ಯ ಸತೀಶ್, ಪಕ್ಷದ ಮುಖಂಡರಾದ ಎಚ್.ಜಿ.ಗಿರಿಧರ್, ಪಿ. ಗಿರಿಧರ್ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts