More

    ಅತ್ತಿಬೆಲೆ ಪಟಾಕಿ ದುರಂತ; ತಹಶೀಲ್ದಾರ್, ಇನ್‌ಸ್ಪೆಕ್ಟರ್ ಅಮಾನತು

    ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ ಸಂಬಂಧ ಸ್ಥಳೀಯ ತಹಶೀಲ್ದಾರ್, ಪೊಲೀಸ್​ ಇನ್‌ಸ್ಪೆಕ್ಟರ್ ಮತ್ತು ರೀಜನಲ್ ಫೈರ್ ಆಫೀಸರ್ ಅಮಾನತಿಗೆ ಮುಖ್ಯಮಂತ್ರಿ ನಿರ್ದೇಶನ ನೀಡಿದ್ದಾರೆ.
    ಹಾಗೆಯೇ ಸಂಬಂಧಪಟ್ಟ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿಯವರಿಗೆ ನೋಟಿಸ್ ಕೂಡ ಜಾರಿ ಮಾಡಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
    ಅನೇಕಲ್​ ತಾಲೂಕಿನ ಅತ್ತಿಬೆಲೆಯಲ್ಲಿ ಶನಿವಾರ ನಡೆದ ಪಟಾಕಿ ಗೋದಾಮು ದುರಂತದಲ್ಲಿ 14 ಮಂದಿ ಅಸುನೀಗಿದ್ದರು. ಸರ್ಕಾರ ಪ್ರಕರಣವನ್ನು ಸಿಐಡಿಗೆ ಒಪ್ಪಿಸಿತ್ತು.
    ಈ ಪ್ರಕರಣದ ಬೆನ್ನಲ್ಲೇ ಮಂಗಳವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.
    ಅತ್ತಿಬೆಲೆ ಪಟಾಕಿ ದುರಂತವಾದ ಮಳಿಗೆಗೆ ಸಂಬಂಧಿಸಿದಂತೆ ಸರ್ಕಲ್ ಇನ್ಸ್‌ಪೆಕ್ಟರ್ ವರದಿ, ಛಾಯಾಚಿತ್ರಗಳೊಂದಿಗೆ ಚಕ್ಕುಬಂದಿ ನಿಗದಿ ಮಾಡಿ ವರದಿ ಸಲ್ಲಿಸಿದ್ದಾರೆ. ಪೊಲೀಸ್ ಅಧೀಕ್ಷಕರು ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಿದ್ದಾರೆ. ಅದರ ಆಧಾರದಲ್ಲಿ ಜಿಲ್ಲಾಧಿಕಾರಿ ಪರವಾನಗಿ ನೀಡಿದ್ದಾರೆ. ಜಿಲ್ಲಾಧಿಕಾರಿಗಳು ತಹಸೀಲ್ದಾರರಿಂದಲೂ ವರದಿ ಪಡೆದಿದ್ದಾರೆ ಎಂದು ಅಧಿಕಾರಿಗಳು ಸಭೆಗೆ ವಿವರಿಸಿದರು.
    ಈ ಪ್ರಕರಣದಲ್ಲಿ ಗೋಡೌನ್‌ಗೆ ಅನುಮತಿ ನೀಡಿರಲಿಲ್ಲ. ಮಾರಾಟಕ್ಕೆ ಮಾತ್ರ ಅನುಮತಿ ನೀಡಲಾಗಿತ್ತು ಎಂದು ಸಭೆಯ ಗಮನಕ್ಕೆ ತರಲಾಯಿತು.

    ಸಿಎಂ ಎಚ್ಚರಿಕೆ

    ಕಾಯ್ದೆಯಲ್ಲಿ ಲೈಸೆನ್ಸ್ ಕೊಡುವಾಗ ನೀವು ಎಚ್ಚರಿಕೆ ವಹಿಸಬೇಕು. ಹದಿನಾಲ್ಕು ಜನರ ಜೀವಕ್ಕೆ ಯಾರು ಹೊಣೆಗಾರರು. ಕಾಯ್ದೆ ಓದಿದ್ದೀರಾ? ಅವರು ಅದರಲ್ಲಿರುವ ಎಲ್ಲ ಮಾನದಂಡಗಳನ್ನು ಪೂರೈಸಿದ್ದಾರೆಯೇ ಎಂದು ನೋಡಬೇಕು. ತಳಹಂತದ ಅಧಿಕಾರಿಗಳು ಸಲ್ಲಿಸಿದ ವರದಿ ಸರಿಯಿದೆಯೇ ಎಂದು ಜಿಲ್ಲಾಧಿಕಾರಿಗಳು ಪರಿಶೀಲಿಸಬೇಕು ಎಂದು ಸಿಎಂ ತಾಕೀತು ಮಾಡಿದರು.
    ಬೆಂಗಳೂರು ನಗರದಲ್ಲಿ ಎರಡು ರೀತಿಯ ಪರವಾನಗಿಗಳಿವೆ. ಶಾಶ್ವತ ಮಳಿಗೆಗಳು ಹಾಗೂ ತಾತ್ಕಾಲಿಕ ಮಳಿಗೆಗಳಿಗೆ ಪರವಾನಗಿ ನೀಡಲಾಗುತ್ತಿದೆ. ಬಿಬಿಎಂಪಿ, ವಿದ್ಯುತ್, ಅಗ್ನಿಶಾಮಕ, ಟ್ರಾಫಿಕ್ ಮತ್ತು ಕಾನೂನು-ಸುವ್ಯವಸ್ಥೇ ವಿಭಾಗದ ನಿರಾಕ್ಷೇಪಣಾ ಪತ್ರ ಪಡೆದು ಲೈಸನ್ಸ್ ನೀಡಲಾಗುತ್ತದೆ. ಇದು ಐದು ವರ್ಷಕ್ಕೊಮ್ಮೆ ನೀಡಲಾಗುತ್ತಿದೆ. ನವೀಕರಣಕ್ಕೆ ನಿರಾಕ್ಷೇಪಣಾ ಪತ್ರದ ಅಗತ್ಯವಿರುವುದಿಲ್ಲ. ಸ್ಫೋಟಕಗಳ ನಿಯಂತ್ರಕರು ನವೀಕರಿಸುತ್ತಾರೆ. ಈ ಕುರಿತು ನಿಯಮಾವಳಿಗಳ ತಿದ್ದುಪಡಿ ಅಗತ್ಯವಿದೆ. ಈ ಕುರಿತು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಅಧಿಕಾರಿಗಳಿಗೆ ಸೂಚಿಸಿದರು. ರಾಜ್ಯಕ್ಕೆ ಅನ್ವಯಿಸುವ ನಿಯಮ ಬದಲಿಸಲು ಸಹ ಸಿಎಂ ಸೂಚಿಸಿದರು.
    ನ್ಯಾಯಾಲಯಗಳ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲು ಸೂಚಿಸಿದರಲ್ಲದೇ ಹಸಿರು ಪಟಾಕಿಗಳ ಮಾರಾಟ ಖಾತರಿಪಡಿಸಿಕೊಳ್ಳಲು ಎಂದರು.

    ಮಾರಾಟಕ್ಕೆ ಲೈಸೆನ್ಸ್

    ಅತ್ತಿಬೆಲೆ ಪಟಾಕಿ ಅಂಗಡಿ ಅವಘಡ ಪ್ರಕರಣ ಕುರಿತು ಮಾಧ್ಯಮಗಳಿಗೆ ವಿವರಣೆ ನೀಡಿದ ಸಿಎಂ, ಅಲ್ಲಿ ರಾಮಸ್ವಾಮಿ ರೆಡ್ಡಿ ಎಂಬವನು ಪಟಾಕಿ ಮಾರಾಟ ಮಾಡಲು ಲೈಸೆನ್ಸ್ ತೆಗೆದುಕೊಂಡಿದ್ದಾನೆ, ಉಗ್ರಾಣಕ್ಕೆ ಲೈಸೆನ್ಸ್ ತೆಗೆದುಕೊಂಡಿರಲಿಲ್ಲ. ತಮಿಳುನಾಡಿನಿಂದ ಪಟಾಕಿ ಸಾಮಾಗ್ರಿ ತಗೊಂಡಿದ್ದಾನೆ ಎಂದು ಹೇಳಿದರು.
    ಸಭೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಜಿಪಿ ಅಲೋಕ್ ಮೋಹನ್, ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್, ಬೆಂಗಳೂರು ನಗರ ಜಿಲ್ಲಾಧೀಕಾರಿ ಕೆ.ಎ. ದಯಾನಂದ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ್ ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts