More

    ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ

    ವಿಜಯಪುರ: ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಇರುವುದರಿಂದ ಮುಂದಿನ ಆರು ತಿಂಗಳ ಅವಧಿಗೆ ಕುಡಿಯುವ ನೀರಿಗಾಗಿ ಯಾವುದೇ ಸಮಸ್ಯೆ ಬಾರದಂತೆ ಮುಂಜಾಗ್ರತೆ ಕ್ರಮವಾಗಿ ಯೋಜನೆ ಸಿದ್ಧಪಡಿಸಿಟ್ಟುಕೊಳ್ಳುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ ನೀಡಿದರು.

    ಜಿಲ್ಲಾಧಿಕಾರಿಗಳ ಕಚೇರಿಯ ಕೇಸ್ವಾನ ಸಭಾಂಗಣದಲ್ಲಿ ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲೆಯ ವಿವಿಧ ತಹಶೀಲ್ದಾರಗಳು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆ ಅಭಿಯಂತರನ್ನೊಳಗೊಂಡ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಹಾಗೂ ಕುಡಿಯುವ ನೀರಿನ ನಿರ್ವಹಣೆ ಕುರಿತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ಅಧ್ಯಕ್ಷತೆ ವಹಿಸಿ ಅವರು ಸೂಚನೆ ನೀಡಿದರು.

    ಬಹುಹಳ್ಳಿ ಕುಡಿಯುವ ನೀರಿನ ಯೋಜನೆಯ ಕೆರೆಗಳಲ್ಲಿ ಶೇಖರಿಸಿಟ್ಟಿರುವ ನೀರಿನ್ನು ಕುಡಿಯುವ ನೀರಿಗಾಗಿ ಬಳಕೆ ಮಾಡಿಕೊಳ್ಳಲು ಹಗಲು, ರಾತ್ರಿ ಸಿಬ್ಬಂದಿಗಳನ್ನು ನಿಯೋಜಿಸಿ ನಿಗಾ ವಹಿಸಬೇಕು. ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಕೆರೆಗಳಿಗೆ ಸಿಬ್ಬಂದಿಗಳನ್ನು ನಿಯೋಜಿಸಿ ತೀವ್ರ ನಿಗಾ ವಹಿಸಬೇಕು. ಕಾಲಕಾಲಕ್ಕೆ ಕೆರೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿ, ನೀರು ಪೋಲಾಗದಂತೆ ತೀವ್ರ ನಿಗಾ ವಹಿಸುವಂತೆ ಅವರು ಹೇಳಿದರು.

    ಗ್ರಾಮೀಣ ಭಾಗದಲ್ಲಿ ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಸಹ ಸ್ಥಳೀಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿ, ರಾತ್ರಿ ಸಹ ತಂಡ ರಚಿಸಿಕೊಂಡು ಜಿಪಿಎಸ್ ಮೂಲಕ ಮಾಹಿತಿ ಪಡೆದುಕೊಳ್ಳಬೇಕು. ಕಾಲಕಾಲಕ್ಕೆ ಪರಿಶೀಲನೆ ನಡೆಸುವುದರ ಮೂಲಕ ನೀರು ಪೋಲಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

    ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ವಹಿಸಬೇಕು. ಕುಡಿಯುವ ನೀರು ತುಂಬ ಸೂಕ್ಷ್ಮ ವಿಚಾರವಾಗಿರುವುದರಿಂದ ಸಮರ್ಪಕವಾಗಿ ನಿರ್ವಹಣೆ ಮಾಡುವ ಮೂಲಕ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ತೀವ್ರತರ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಲ್ಲಿ ಖಾಸಗಿ ಕೊಳವೆ ಬಾವಿಗಳನ್ನು ಗುರುತಿಸಿಟ್ಟುಕೊಂಡು ಕುಡಿಯುವ ನೀರಿನ ಪೂರೈಕೆ ಕ್ರಮ ವಹಿಸಬೇಕು. ಮುಂಬರುವ ಬೇಸಿಗೆ ದಿನಗಳಲ್ಲಿ ನೀರಿನ ಬವಣೆಯಾಗದ ರೀತಿಯಲ್ಲಿ ಈಗಿನಿಂದಲೇ ಹೆಚ್ಚು ಇಳುವರಿ ಇರುವ ಬೋರ್‌ವೆಲ್ಗಳನ್ನು ಗುರುತಿಸಬೇಕು. ಬಹುಹಳ್ಳಿ ಕುಡಿಯುವ ನೀರಿನ ಯೋಜನೆಯಲ್ಲಿ ಸರಬರಾಜು ಮಾಡುವ ಮೋಟರ್‌ಗಳು ಸುಸ್ಥಿತಿಯಲ್ಲಿರುವ ಕುರಿತು ಖಚಿತಪಡಿಸಿಕೊಳ್ಳಬೇಕು ಹೆಚ್ಚುವರಿ ಮೋಟರ್‌ಗಳನ್ನು ಕಾಯ್ದಿಟ್ಟುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.

    ಜಿಲ್ಲೆಯ ಪುರಸಭೆ ಮತ್ತು ಪಟ್ಟಣ ಪಂಚಾಯತಿ ಅಧಿಕಾರಿಗಳೊಂದಿಗೆ ಸಮನ್ವಯತೆ ಸಾಧಿಸಿಕೊಂಡು ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಲು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಿಗೆ ಸೂಚಿಸಿದ ಅವರು, ಈಗಾಗಲೇ ಅವಶ್ಯಕತೆ ಇರುವ ಕಡೆಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಲು ಟೆಂಡರ್ ಕರೆಯಲಾಗಿದ್ದು, ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ನೀರಿನ ಸಮಸ್ಯೆ ಉದ್ಭವಿಸಬಹುದಾದ ಪ್ರದೇಶದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಲು ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅವರು ಸೂಚನೆ ನೀಡಿದರು. ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಅಗತ್ಯ ದಾಸ್ತಾನು ಮಾಡಿಟ್ಟುಕೊಳ್ಳುವಂತೆ ಪಶು ಸಂಗೋಪನಾ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ ಸೋನಾವಣೆ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪವಿಭಾಗಾಧಿಕಾರಿ ಬಸವಣ್ಣೆಪ್ಪ ಕಲ್ಲಶೆಟ್ಟಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವಿಜಯಕುಮಾರ ಮೆಕ್ಕಳಕಿ, ಜಿಲ್ಲಾಮಟ್ಟದ, ತಾಲೂಕಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts