More

    ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಅರಿವು ಅಗತ್ಯ

    ಚಿಕ್ಕಮಗಳೂರು: ಸಂವಿಧಾನದಲ್ಲಿರುವ ಅಂಶಗಳನ್ನು ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಬಗೆಗಿನ ಅರಿವನ್ನು ಪ್ರತಿಯೊಬ್ಬ ಪ್ರಜೆಯೂ ಹೊಂದಿರಬೇಕು ಎಂದು ಜಿಲ್ಲಾಧಿಕಾರಿ ಮೀನಾನಾಗರಾಜ್ ತಿಳಿಸಿದರು.

    ನಗರದ ಜಿಪಂ ಮಿನಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಪಂ, ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಸಂವಿಧಾನ ಜಾಗೃತಿ ಜಾಥಾ ಅಭಿಯಾನ ಕಾರ್ಯಕ್ರಮದ ಅಂಗವಾಗಿ ಪತ್ರಕರ್ತರಿಗಾಗಿ ಆಯೋಜಿಸಿದ್ದ ಅಭಿವ್ಯಕ್ತಿ ಸ್ವಾತಂತ್ರ್ಯದ ಕುರಿತ ವಿಚಾರ ಸಂಕಿರಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
    ದೇಶದ ಪ್ರತಿಯೊಬ್ಬ ಪ್ರಜೆಯೂ ಸಂವಿಧಾನದ ೧೯(೧)(ಎ) ವಿಧಿಯ ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ತಿಳಿದುಕೊಳ್ಳಬೇಕು. ಸಂವಿಧಾನವನ್ನು ಕೇವಲ ಪತ್ರಕರ್ತರು, ವಿದ್ಯಾರ್ಥಿಗಳು ಆಡಳಿತ ವರ್ಗದವರು ಮಾತ್ರವಲ್ಲದೇ ದೇಶದ ಪ್ರತಿಯೊಬ್ಬ ಪ್ರಜೆಯು ತಿಳಿದುಕೊಳ್ಳಬೇಕೆಂಬ ಉದ್ದೇಶದಿಂದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
    ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಮಾಹಿತಿ ಕಲೆಹಾಕಿ ಇಲಾಖೆ ಗಮನಕ್ಕೆ ತರುವ ಕಾರ್ಯವನ್ನು ಪತ್ರಕರ್ತರು ಮಾಡುವುದರಿಂದ ಇನ್ನಷ್ಟು ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.
    ಜಿಪಂ ಸಿಇಒ ಡಾ. ಗೋಪಾಲಕೃಷ್ಣ ಮಾತನಾಡಿ, ಭಾರತಕ್ಕೆ ಸ್ವಾತಂತ್ರ್ಯ ಬರುವಲ್ಲಿ ಪತ್ರಿಕೆಗಳ ಮಹತ್ವ ಅಪಾರವಾದದ್ದು. ಅಭಿವ್ಯಕ್ತಿ ಸ್ವಾತಂತ್ರ್ಯ ಭಾರತದ ಪ್ರತಿಯೊಬ್ಬ ಪ್ರಜೆಗಿದ್ದರೂ ಅದನ್ನು ಬಳಸಿಕೊಳ್ಳುವವರ ಸಂಖ್ಯೆ ತೀರಾ ಕಡಿಮೆಯಿದೆ. ತಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಪ್ರತಿಯೊಬ್ಬರೂ ಬಳಸಿಕೊಳ್ಳುವಂತಾಗಬೇಕು. ಈ ಹಿನ್ನೆಲೆಯಲ್ಲಿ ಮಾಧ್ಯವದವರು ಧ್ವನಿಯಿಲ್ಲದವರ ಧ್ವನಿಯಾಗಬೇಕು ಎಂದು ಹೇಳಿದರು.
    ಸಮಾಜದಲ್ಲಿನ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಮಾಧ್ಯಮಗಳ ಪಾತ್ರ ಪ್ರಮುಖವಾಗಿದೆ. ಯಾವುದೇ ಕ್ಷೇತ್ರದಲ್ಲಿನ ಸಮಸ್ಯೆಗಳನ್ನು ಮಾಧ್ಯಮಗಳು ಎತ್ತಿತೋರಿಸಿದಾಗ ಆ ಸಮಸ್ಯೆಗಳನ್ನು ಪರಿಹರಿಸಲು ಆಡಳಿತ ವ್ಯವಸ್ಥೆ ಕ್ರಮ ಕೈಗೊಳ್ಳುತ್ತದೆ ಎಂದು ತಿಳಿಸಿದರು.
    ಹಿರಿಯ ಪತ್ರಕರ್ತ ತಿಪ್ಪೇರುಪ್ಪ ಮಾತನಾಡಿ, ಭಾರತದ ಪ್ರತಿಯೊಬ್ಬ ಪ್ರಜೆಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ಸಂವಿಧಾನ ನೀಡಿದೆ. ಈ ಸ್ವಾತಂತ್ರ್ಯವನ್ನು ಪತ್ರಿಕೆಗಳು ಉತ್ತಮವಾಗಿ ಬಳಸಿಕೊಂಡು ಸಮಾಜದಲ್ಲಿ ನಡೆಯುವ ಶೋಷಣೆ, ಅನ್ಯಾಯಗಳ ವಿರುದ್ಧ ಧ್ವನಿ ಎತ್ತುವ ಕೆಲಸ ಮಾಡಬೇಕು ಎಂದು ಕರೆ ನೀಡಿದರು.
    ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಯೋಗೀಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts