

ಪುತ್ತೂರು ಗ್ರಾಮಾಂತರ: ಧಾರ್ಮಿಕ ಶ್ರದ್ಧಾ ಕೇಂದ್ರಗಳು ಜಾಗೃತಿಯ ಕೇಂದ್ರಗಳಾಗಿದ್ದು, ನಮ್ಮ ಜೀವನದ ಪಯಣಕ್ಕೊಂದು ದಾರಿ ಬೆಳಕಾಗಿದೆ. ಧಾರ್ಮಿಕ ಶ್ರದ್ಧಾ ಕೇಂದ್ರಗಳು ಬೆಳೆದಾಗ ಭಾರತದ ಸಂಸ್ಕೃತಿ ಉಳಿಯಲು ಸಾಧ್ಯ. ಧರ್ಮಯುತವಾದ ಮತ್ತು ಜ್ಞಾನ ಪೂರ್ಣವಾದ ಕರ್ಮದಿಂದ ಉತ್ತಮ ಫಲ ಪ್ರಾಪ್ತಿಯಾಗಲಿದೆ. ಅಧರ್ಮ ಮೆಟ್ಟಿ ನಿಲ್ಲಲು ಧರ್ಮದ ಅಂಶ ಬೆಳೆಯಬೇಕು. ಸನಾತನ ಹಿಂದು ಧರ್ಮದ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಒಡಿಯೂರು ಕ್ಷೇತ್ರದ ಗುರುದೇವಾನಂದ ಸ್ವಾಮೀಜಿ ಹೇಳಿದರು.
ಆರ್ಯಾಪು ಗ್ರಾಮದ ಮಿನಿಪದವು ಅಯ್ಯಪ್ಪ ಭಜನಾ ಮಂದಿರದಲ್ಲಿ ಬುಧವಾರ ಪ್ರತಿಷ್ಠಾಪನಾ ಮಹೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.
ಕನ್ಯಾನ ಕಣಿಯೂರು ಚಾಮುಂಡೇಶ್ವರಿ ದೇವಿ ಕ್ಷೇತ್ರದ ಮಹಾಬಲ ಸ್ವಾಮೀಜಿ ಮಾತನಾಡಿ, ನಮ್ಮ ನಂಬಿಕೆ ಬಲವಾಗಿರಬೇಕು. ದೇವರನ್ನು ಒಲಿಸಿಕೊಳ್ಳಲು ವ್ರತಾಚರಣೆ, ಶರಣು ಘೋಷಣೆ ಮಾಡಿದಾಗ ಪುಣ್ಯ ಪ್ರಾಪ್ತಿಯಾಗುತ್ತದೆ. ಧರ್ಮ ಉಳಿಸಲು ನಾವೆಲ್ಲಾ ಪ್ರಯತ್ನಿಸಬೇಕು ಎಂದರು.
ಮಾಜಿ ಶಾಸಕರಾದ ಸಂಜೀವ ಮಠಂದೂರು, ಶಕುಂತಳಾ ಟಿ.ಶೆಟ್ಟಿ, ಸಂಪ್ಯ ಅಕ್ಷಯ ಕಾಲೇಜಿನ ಅಧ್ಯಕ್ಷ ಜಯಂತ ನಡುಬೈಲು, ಪುತ್ತೂರಿನ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿ, ಜಿಲ್ಲಾ ಧಾರ್ಮಿಕ ಪರಿಷತ್ನ ಮಾಜಿ ಸದಸ್ಯ ಮುರಳಿಕೃಷ್ಣ ಹಸಂತಡ್ಕ, ಆರ್ಯಾಪು ಗ್ರಾ.ಪಂ ಅಧ್ಯಕ್ಷೆ ಗೀತಾ, ಪ್ರಗತಿಪರ ಕೃಷಿಕ ಸುಭಾಷ್ ರೈ ಕಡಮಜಲು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಶಶಿಧರ ಎಂ., ಉದ್ಯಮಿ ಮೋಹನದಾಸ್ ರೈ ಕುಂಬ್ರ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಭಜನಾ ಮಂದಿರದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸೀತಾರಾಮ ರೈ ಕೈಕಾರ ಅಧ್ಯಕ್ಷತೆ ವಹಿಸಿದ್ದರು. ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ, ಅಯ್ಯಪ್ಪ ಸೇವಾ ಟ್ರಸ್ಟ್ ಅಧ್ಯಕ್ಷ ಶ್ರೀಧರ ನಾಯ್ಕ ಮಿನಿಪದವು ಮತ್ತಿತರರು ಉಪಸ್ಥಿತರಿದ್ದರು.
ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್ ಸ್ವಾಗತಿಸಿದರು. ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ರೈ ತೊಟ್ಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂತೋಷ್ ರೈ ಕೈಕಾರ ನಿರೂಪಿಸಿದರು.