ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆ ಪತ್ರ ಸಲ್ಲಿಸಿದ ಬಿ.ನಾಗೇಂದ್ರ

nagendra
Published on

ಬೆಂಗಳೂರು: ಕರ್ನಾಟಕ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಮಗದಲ್ಲಿ ನಡೆದಿದೆ ಎನ್ನಲಾಗಿರುವ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡೆಗೂ ಸಚಿವ ಬಿ. ನಾಗೇಂದ್ರ ಅವರ ಪದಚ್ಯುತಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ, ನೈತಿಕ ಹೊಣೆ ಹೊತ್ತು ಅವರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರುವಾರ ರಾತ್ರಿ ಭೇಟಿಯಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದರು. ಇದರಿಂದ ಸಿದ್ದರಾಮಯ್ಯ ಸರ್ಕಾರದಲ್ಲಿ ಮೊದಲ ವಿಕೆಟ್‌ ಪತನವಾದಂತಾಗಿದೆ.

ಮುಖ್ಯಮಂತ್ರಿಗಳ ಕಾವೇರಿ ನಿವಾಸದಲ್ಲಿ ಉಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮತ್ತು ಸಚಿವ ಜಮೀರ್ ಅಹಮದ್ ಖಾನ್ ಉಪಸ್ಥಿತಿಯಲ್ಲಿ ಸಿದ್ದರಾಮಯ್ಯ ಅವರಿಗೆ ನಾಗೇಂದ್ರ ರಾಜೀನಾಮೆ ಪತ್ರ ಸಲ್ಲಿಸಿದರು. ರಾಜೀನಾಮೆ ಪತ್ರದಲ್ಲಿ ಒಂದೇ ಸಾಲು ಬರೆದಿರುವುದು ಕಂಡುಬಂದಿದ್ದು, ನನ್ನ ಸ್ವ ಇಚ್ಛೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಬರೆದಿದ್ದಾರೆ.

ಸಚಿವರ ರಾಜೀನಾಮೆಯಿಂದ ಕಳೆದ 15 - 20 ದಿನಗಳಿಂದ ರಾಜಕೀಯ ವಾಕ್ಸಮರ, ಆರೋಪ ಪ್ರತ್ಯಾರೋಪಗಳಿಗೆ ಈಗ ತೆರೆ ಬಿದ್ದಿದೆ. ನಿಗಮದ ಅಧಿಕಾರಿಯಾಗಿದ್ದ ಚಂದ್ರಶೇಖರನ್ ಅವರು, ಮೇ 26ರಂದು ಆತ್ಮಹತ್ಯೆ ಮಾಡಿಕೊಂಡಿದ್ದರ ಬೆನ್ನಲ್ಲೇ ಈ ಪ್ರಕರಣ ಬೆಳಕಿಗೆ ಬಂದಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net