ಹಂತಹಂತವಾಗಿ ಪ್ರವಾಸಿ ತಾಣಗಳ ಅಭಿವೃದ್ಧಿ

ಬಾಗಲಕೋಟೆ: ಜಿಲ್ಲೆಯ ಐಹೊಳೆ, ಪಟ್ಟದಕಲ್ಲು ಹಾಗೂ ಬಾದಾಮಿ ಐತಿಹಾಸಿಕ ತಾಣಗಳಿಗೆ ಪ್ರವಾಸೋದ್ಯಮ ಇಲಾಖೆ ನಿರ್ದೇಶಕಿ ಪ್ರಿಯಾಂಕಾ ಮೇರಿ ್ರಾನ್ಸಿಸ್ ಈಚೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರವಾಸಿ ತಾಣಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಹಾಗೂ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕಾಮಗಾರಿ, ಮೂಲ ಸೌಕರ್ಯ ಹಾಗೂ ಇತರ ಚಟುವಟಿಕೆ ಕೈಗೊಳ್ಳುವ ಸಲುವಾಗಿ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಕರಡು ಯೋಜನೆ ತಯಾರಿಸಲು ಕರ್ನಾಟಕ ಗೃಹ ಮಂಡಳಿಗೆ ವಹಿಸಲಾಗಿದೆ ಎಂದು ತಿಳಿಸಿದರು.

ಬಾದಾಮಿ ಅಗಸ್ತ್ಯ ತೀರ್ಥ ಹೊಂಡದ ಸುತ್ತಮುತ್ತಲಿರುವ ಮನೆಗಳನ್ನು ಸ್ಥಳಾಂತರಿಸುವುದು, ಪಾರ್ಕಿಂಗ್ ಪ್ಲಾಜಾ, ಅಗಸ್ತ್ಯ ತೀರ್ಥ ಹೊಂಡದ ಹೂಳೆತ್ತುವುದು, ಪಾದಚಾರಿ ಮಾರ್ಗಗಳ ಅಭಿವೃದ್ಧಿ ಕಾಮಗಾರಿಗಳನ್ನು ಪ್ರಥಮ ಹಂತದಲ್ಲಿ ಕೈಗೆತ್ತಿಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ನಂತರ ಅಧಿಕಾರಿ ಪ್ರಿಯಾಂಕಾ ಅವರು, ಪಟ್ಟದಕಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಟ್ಟದಕಲ್ಲಿನಲ್ಲಿ ಪ್ರವಾಸೋದ್ಯಮ ಇಲಾಖೆಯ 24 ಎಕರೆ ಭೂ ಪ್ರದೇಶದಲ್ಲಿ ಕೈಗೊಳ್ಳಬೇಕಾದ ಕಾಮಗಾರಿ ಬಗ್ಗೆ, ದೇಶ, ವಿದೇಶ ಪ್ರವಾಸಿಗರಿಗೆ ಎಲ್ಲ ರೀತಿಯ ಮೂಲ ಸೌಕರ್ಯ ಕಲ್ಪಿಸುವುದಕ್ಕಾಗಿ ಕ್ರಿಯಾಯೋಜನೆ ತಯಾರಿಸಲು ಅಗತ್ಯ ಇರುವ ಮಾಹಿತಿ ಪಡೆದುಕೊಂಡರು.

ಐಹೊಳೆಗೆ ಭೇಟಿ ನೀಡಿ ಐಹೊಳೆ ಗ್ರಾಮಸ್ಥರಿಗೆ ಸಂಪೂರ್ಣವಾಗಿ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತಾದ ಮಾಹಿತಿಯನ್ನು ಜಿಲ್ಲಾಧಿಕಾರಿಯಿಂದ ಪಡೆದುಕೊಂಡರು. ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳನ್ನು ಒಂದೇ ಬಾರಿಗೆ ಅಭಿವೃದ್ಧಿ ಪಡಿಸಲು ಸಾಧ್ಯವಾಗುವುದಿಲ್ಲ. ಹಂತ ಹಂತವಾಗಿ ಆದ್ಯತೆ ಮೇರೆಗೆ ಕಾಮಗಾರಿ ಕೈಗೊಳ್ಳಲಾಗುವುದು. ಐಹೊಳೆ, ಪಟ್ಟದಕಲ್ಲು ಹಾಗೂ ಬಾದಾಮಿ ತಾಣಗಳ ಅಭಿವೃದ್ಧಿಗೆ ಕ್ರಿಯಾಯೋಜನೆ ತಯಾರಿಸಲು ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

ಜಿಲ್ಲಾಧಿಕಾರಿ ಆರ್.ರಾಮಚಂದ್ರನ್, ಪುರಾತತ್ವ ಇಲಾಖೆ ಅಧಿಕಾರಿಗಳು, ಯೋಜನಾ ನಿರ್ದೇಶಕರು, ಸ್ಥಳೀಯ ಸಂಸ್ಥೆಗಳ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.