More

    ಹಕ್ಕುಗಳ ರಕ್ಷಣೆಗೆ ಕಂಕಣಬದ್ಧರಾಗಿ

    ಬಾಗಲಕೋಟೆ: ಜಿಲ್ಲೆಯಲ್ಲಿ ಬಾಲ್ಯವಿವಾಹ ಬಹಳ ಗಟ್ಟಿಯಾಗಿ ಬೇರು ಬಿಟ್ಟಿದ್ದು, ಅದನ್ನು ಬುಡಸಮೇತ ಕಿತ್ತು ಹಾಕಲು ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಭಾರತಿ ವಾಳ್ವೇಕರ ಹೇಳಿದರು.

    ನವನಗರದ ಕೋರ್ ವಿಜ್ಞಾನ ಕೇಂದ್ರದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಶಿಶು ಅಭಿವೃದ್ಧಿ ಯೋಜನೆ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಬಾಲ್ಯವಿವಾಹ ನಿಷೇಧ ಕಾಯ್ದೆ, ಮಕ್ಕಳ ಹಕ್ಕುಗಳು ಮತ್ತು ಪೋಸ್ಕೋ ಕಾಯ್ದೆ ಕುರಿತು ಅರಿವು ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

    ಮಕ್ಕಳ ರಕ್ಷಣೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಬಲಿಷ್ಠವಾದ ಕಾಯ್ದೆಗಳನ್ನು ಜಾರಿಗೆ ತಂದಿದ್ದರು. ಅವುಗಳು ಸಮರ್ಪಕವಾಗಿ ಕಾರ್ಯರೂಪಕ್ಕೆ ಬರುತ್ತಿಲ್ಲ. ಈ ನಿಟ್ಟಿನಲ್ಲಿ ಮಕ್ಕಳ ರಕ್ಷಣಾಧಿಕಾರಿಗಳು ಹಕ್ಕುಗಳ ರಕ್ಷಣೆಗೆ ಕಂಕಣಬದ್ಧರಾಗಬೇಕಿದೆ. ಮಕ್ಕಳ ರಕ್ಷಣೆ ಒದಗಿಸುವ ಕೆಲಸವಾಗಬೇಕು. ಬಾಲ್ಯವಿವಾಹಕ್ಕೆ ಒಳಗಾಗುತ್ತಿರುವುದು ಕಂಡು ಬಂದಲ್ಲಿ ಸಾರ್ವಜನಿಕರು ಆಯಾ ವ್ಯಾಪ್ತಿಯಲ್ಲಿ ಬರುವ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದರು.

    ತಹಸೀಲ್ದಾರ್ ಗುರುಸಿದ್ದಯ್ಯ ಹಿರೇಮಠ ಮಾತನಾಡಿ, ಮಾನವನಿಗೆ ಇರುವ ಹಕ್ಕುಗಳನ್ನು ದುರುಪಯೋಗವಾದಾಗ ಮಾತ್ರ ಶೋಷಣೆಯ ಪ್ರಕರಣಗಳು ಕಂಡುಬರುತ್ತವೆ. ಮಕ್ಕಳ ಹಕ್ಕುಗಳ ರಕ್ಷಿಸುವುದು ಅಗತ್ಯವಾಗಿದೆ. ಬಾಲ್ಯವಿವಾಹ ತಡೆಯಲು ಸಹಕಾರ ದೊರೆಯುತ್ತಿದ್ದು, ಗ್ರಾಮ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಶ್ರಮಿಸುತ್ತಿದ್ದಾರೆ ಎಂದರು.

    ಸಂಪನ್ಮೂಲ ವ್ಯಕ್ತಿ ರಾಘವೇಂದ್ರ ಭಟ್, ಬಾಲ್ಯವಿವಾಹ ನಿಷೇಧ ಕಾಯ್ದೆ, ಮಕ್ಕಳ ಹಕ್ಕುಗಳ ಮತ್ತು ಪೊಸ್ಕೋ ಕಾಯ್ದೆ ಕುರಿತು ವಿವರವಾಗಿ ತಿಳಿಸಿಕೊಟ್ಟರು.

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಎ.ಕೆ.ಬಸಣ್ಣವರ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಗುಲಾಬ ನದಾಫ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪಿ.ಎನ್.ಪಾಟೀಲ, ತಾಪಂ ಕಾರ್ಯನಿವಾಹಕ ಅಧಿಕಾರಿ ಎನ್.ವೈ.ಬಸರಿಗಿಡದ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯ ಸದಾಶಿವ ಬೆಳಗಲಿ, ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಬಿ.ಹಿರೇಮಠ, ಸಿಡಿಪಿಒ ಶಿಲ್ಪಾ ಹಿರೇಮಠ ಇತರರು ಉಪಸ್ಥಿತರಿದ್ದರು.

    ಗ್ರಾಮ, ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಮಕ್ಕಳ ರಕ್ಷಣಾ ಅಧಿಕಾರಿಗಳು ಇದ್ದು, ಬಾಲ್ಯವಿವಾಹ ನಡೆದಲ್ಲಿ ಪ್ರಕರಣ ದಾಖಲಿಸಬೇಕು. ಶೋಷಣೆಗೆ ಒಳಗಾಗದ ಮಗುವನ್ನು ಮಕ್ಕಳ ಕಲ್ಯಾಣ ಸಮಿತಿಗೆ ನೀಡಿದಲ್ಲಿ ಆ ಮಗುವಿನ ಹಿತರಕ್ಷಣೆಗೆ ಸಮಿತಿ ಮುಂದಾಗಲಿದೆ. ಶೋಷಣೆ ನಡೆಯುತ್ತಿರುವ ಸಂದರ್ಭದಲ್ಲಿ ಸುಮ್ಮನೆ ಕುಳಿತುಕೊಳ್ಳಬಾರದು. ಸಂಬಂಧಪಟ್ಟವರ ಗಮನಕ್ಕೆ ತರುವ ಕೆಲಸವಾದಾಗ ಮಾತ್ರ ಕ್ರಮಕೈಗೊಳ್ಳಲು ಸಾಧ್ಯವಾಗುತ್ತದೆ.
    ಭಾರತಿ ವಾಳ್ವೇಕರ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ



    ಹಕ್ಕುಗಳ ರಕ್ಷಣೆಗೆ ಕಂಕಣಬದ್ಧರಾಗಿ



    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts