More

    ದೌರ್ಜನ್ಯಕ್ಕೆ ಒಳಗಾದ ಮಕ್ಕಳ ರಕ್ಷಿಸಿ

    ಬಾಗಲಕೋಟೆ: ದೌರ್ಜನ್ಯಕ್ಕೆ ಒಳಗಾದ ಮಕ್ಕಳ ರಕ್ಷಣೆ ಮಾಡುವ ಮೂಲಕ ಅವರನ್ನು ಮುಖ್ಯವಾಹಿನಿಗೆ ತರುವ ಕೆಲಸವಾಗಬೇಕು ಎಂದು ಜಿಲ್ಲಾ ಕಾನೂನು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೇಮಲತಾ ಹುಲ್ಲೂರ ಹೇಳಿದರು.

    ನವನಗರದ ಎಸ್ಪಿ ಕಚೇರಿ ಸಭಾಂಗಣದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪೊಲೀಸ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಹಯೋಗದಲ್ಲಿ ಬಾಲನ್ಯಾಯ, ಪೋಸ್ಕೋ, ಬಾಲ್ಯವಿವಾಹ ನಿಷೇಧ ಹಾಗೂ ಆರ್‌ಟಿಇ ಕಾಯ್ದೆ ಕುರಿತು ಶುಕ್ರವಾರ ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

    ಮಕ್ಕಳ ಪಾಲನೆ ಪೋಷಣೆಗೆ ಸರ್ಕಾರ ಸಮಗ್ರ ಮಕ್ಕಳ ರಕ್ಷಣಾ ಯೋಜನೆ ಜಾರಿಗೆ ತಂದಿದ್ದು, ಸಮರ್ಪಕವಾಗಿ ಅನುಷ್ಠಾನಕ್ಕೆ ತರಬೇಕು ಎಂದರು. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಭಾರತಿ ವಾಳ್ವೇಕರ ಮಾತನಾಡಿ, ಮಕ್ಕಳ ಪೋಷಣೆ ಮತ್ತು ರಕ್ಷಣೆಗೆ ಸಂಬಂಧಿಸಿದ ಕಾಯ್ದೆಗಳ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಬೇಕು. ಮುಖ್ಯವಾಗಿ ಗ್ರಾಮೀಣ ಭಾಗದಲ್ಲಿ ಬಾಲನ್ಯಾಯ, ಪೋಸ್ಕೋ, ಬಾಲ್ಯವಿವಾಹ ನಿಷೇಧ ಕಾಯ್ದೆಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸವಾಗಬೇಕು. ಈ ಕಾಯ್ದೆಯ ಲಾಭ ಪಡೆಯುವಂತೆ ಮಾಡಬೇಕು. ಅಧಿಕಾರಿಗಳು ತಾವು ಮಾಡುವ ಕಾರ್ಯದ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕೆಲಸವಾಗಬೇಕು. ಆರೋಗ್ಯವಂತ ಮಗು ಸಮಾಜಕ್ಕೆ ಅವಶ್ಯವಾಗಿದೆ ಎಂದು ತಿಳಿಸಿದರು.

    ಜಿಲ್ಲಾಧಿಕಾರಿ ಕೆ.ರಾಜೇಂದ್ರ ಮಾತನಾಡಿ, ಸಮಾಜದಲ್ಲಿ ದುರ್ಬಲ ವರ್ಗದವರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿವೆ. ಅವರಿಗೆ ಕಾನೂನಿಯಡಿಯಲ್ಲಿ ರಕ್ಷಣೆ ನೀಡುವ ಅಗತ್ಯವಿದೆ. ಜಿಲ್ಲೆಯಲ್ಲಿ ಅಪೌಷ್ಟಿಕದಿಂದ ಬಳಲುತ್ತಿರುವ ಮಕ್ಕಳಿಗೆ ಪೌಷ್ಟಿಕ ಆಹಾರ ಕಾಲಕಾಲಕ್ಕೆ ಪೂರೈಸಬೇಕು. ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಕಾರ್ಯನಿರ್ವಾಹಕ ಅಧಿಕಾರಿಗಳು ಅಂಗನವಾಡಿಗಳಿಗೆ ಭೇಟಿ ಪರಿಶೀಲನೆ ನಡೆಸಬೇಕು. ಬಾಲನ್ಯಾಯ, ಪೋಸ್ಕೋ, ಬಾಲ್ಯವಿವಾಹ ನಿಷೇಧ ಕಾಯ್ದೆಗಳ ಬಗ್ಗೆ ಸ್ಟೇಕ್ ಹೋಲ್ಡರ್ಸ್‌ಗಳು ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

    ಡಾ.ಅಂತೋನಿಯಪ್ಪ ಸಿ. ಪೋಸ್ಕೋ ಕಾಯ್ದೆ-2012 ಹಾಗೂ ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತು, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಗುಲಾಬ ನದ್ಾ ಅವರು ಬಾಲನ್ಯಾಯ ಕಾಯ್ದೆ-2015 ಕುರಿತು ಉಪನ್ಯಾಸ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎ.ಕೆ. ಬಸಣ್ಣವರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪಿ.ಎನ್. ಪಾಟೀಲ, ಸರ್ಕಾರಿ ಬಾಲಕರ ಬಾಲಮಂದಿರದ ಅಧೀಕ್ಷಕಿ ಜಯಮಾಲಾ ದೊಡಮನಿ ಉಪಸ್ಥಿತರಿದ್ದರು.

    ದುರ್ಬಲ ವರ್ಗದ ಜನರಲ್ಲಿ ಶೇ.42 ರಷ್ಟು ಮಕ್ಕಳಿದ್ದು, ಅವರ ಪಾಲನೆ ಪೋಷಣೆ ಜತೆಗೆ ರಕ್ಷಣೆ ಸಹ ಮಹತ್ವದ್ದಾಗಿದೆ. ಮಕ್ಕಳಿಗೆ ಸಂಬಂಧಿಸಿದ ಕಾಯ್ದೆಗಳು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ಕ್ರಮಕೈಗೊಳ್ಳಬೇಕು. ವಿವಿಧ ಇಲಾಖೆಯವರು ಮಾಹಿತಿಗಳನ್ನು ನಿರಂತರವಾಗಿ ವಿನಿಮಯ ಮಾಡಬೇಕು. ಅಂದಾಗ ಮಾತ್ರ ಕ್ರಮಕೈಗೊಳ್ಳಲು ಸಾಧ್ಯವಾಗುತ್ತದೆ. ಮಕ್ಕಳ ಸ್ನೇಹಿಯಾಗಿ ಕೆಲಸ ಮಾಡಬೇಕು.
    ಲೋಕೇಶ ಜಗಲಾಸರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ



    ದೌರ್ಜನ್ಯಕ್ಕೆ ಒಳಗಾದ ಮಕ್ಕಳ ರಕ್ಷಿಸಿ



    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts