More

    ಜನ ಸೇವಕ ಸಮಾವೇಶ

    ಬಾಗಲಕೋಟೆ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಅಭೂತ ಪೂರ್ವ ಸಾಧನೆ ಮಾಡಿದೆ. ಬಾಗಲಕೋಟೆ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಯ ಪಂಚಾಯಿತಿಗಳಲ್ಲಿ ಬಹುಮತ ಹೊಂದಿದೆ. ಈ ಯಶಸ್ಸು ಗಮನಿಸಿ ಜನ ಸೇವಕ ಸಮಾವೇಶ ಹಮ್ಮಿಕೊಳ್ಳಲಾಗುತ್ತಿದೆ ಎಂದು ಶಾಸಕ ವೀರಣ್ಣ ಚರಂತಿಮಠ ಹೇಳಿದರು.

    ಜ.12 ರಂದು ಬೆಳಗ್ಗೆ 11 ಗಂಟೆಗೆ ಬಾಗಲಕೋಟೆ ನಗರದ ಶಿವಾನುಭವ ಮಂಟಪ ಚರಂತಿಮಠದಲ್ಲಿ ಜಿಲ್ಲಾಮಟ್ಟದ ಸಮಾವೇಶ ಏರ್ಪಡಿಸಲಾಗಿದೆ. ಡಿಸಿಎಂ ಗೋವಿಂದ ಕಾರಜೋಳ, ಸಚಿವರಾದ ವಿ.ಸೋಮಣ್ಣ, ರಮೇಶ ಜಾರಕಿಹೊಳಿ, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ, ರಾಜ್ಯ ಕಾರ್ಯದರ್ಶಿ ತುಳಸಿ ಮುನಿರಾಜುಗೌಡ, ಎಸ್.ಟಿ.ಮೋರ್ಚಾ ರಾಜ್ಯಾಧ್ಯಕ್ಷ ತಿಪ್ಪರಾಜ ಹವಾಲ್ದಾರ, ಲೋಕಸಭಾ ಸದಸ್ಯ ಪಿ.ಸಿ.ಗದ್ದಿಗೌಡರ, ಶಾಸಕರಾದ ದೊಡ್ಡನಗೌಡ ಪಾಟೀಲ, ಸಿದ್ದು ಸವದಿ, ಮುರಗೇಶ ನಿರಾಣಿ ಸೇರಿದಂತೆ ಜಿಲ್ಲೆಯ ಶಾಸಕರು, ಮಾಜಿ ಶಾಸಕರು ಸೇರಿದಂತೆ ಪಕ್ಷದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಯಾದ ಬಿಜೆಪಿ ಬೆಂಬಲಿತ ಗ್ರಾ.ಪಂ ಸದಸ್ಯರು ಹಾಗೂ ನಗರಸಭೆ,ಪುರಸಭೆ, ಪಟ್ಟಣ ಪಂಚಾಯಿತಿ, ಎಪಿಎಂಸಿ, ಟಿಎಪಿಸಿಎಂಎಸ್, ಪಿಎಲ್‌ಡಿ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್(ಡಿಸಿಸಿ), ಆಯ್ಕೆಯಾದ ಸದಸ್ಯರು ಪಾಲ್ಗೊಳ್ಳಲಿದ್ದಾರೆ ಎಂದರು.

    ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಮಾತನಾಡಿ, ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನವಣೆಯಲ್ಲಿ ಬಿಜೆಪಿ ಅದ್ವಿತೀಯ ಸಾಧನೆ ಮಾಡಿದೆ. 86173 ಗ್ರಾ.ಪಂ ಸ್ಥಾನ ಪೈಕಿ 45266 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದಾರೆ. 5670 ಪಂಚಾಯಿತಿಗಳ ಪೈಕಿ 3142 ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಹೊಂದಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ನಡೆದ 191 ಗ್ರಾಮ ಪಂಚಾಯಿತಿಗಳ ಚುನಾವಣೆಯಲ್ಲಿ 117 ಪಂಚಾಯಿತಿಗಳಲ್ಲಿ ಬಿಜೆಪಿ ಬಹುಮತ ಹೊಂದಿದೆ. ಜನ ಸೇವಕ ಸಮಾವೇಶದಲ್ಲಿ 2500 ಕ್ಕೂ ಹೆಚ್ಚು ಸದಸ್ಯರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

    ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಯ್ಯ ಮೂಗನೂರಮಠ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಟಿ.ಉಪಾಧ್ಯಾಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ, ಮಾಧ್ಯಮ ವಕ್ತಾರ ಜಯಂತ ಕುರಂದವಾಡ ಸೇರಿದಂತೆ ಇತರರು ಸುದ್ದಿಗೋಷ್ಠಿಯಲ್ಲಿ ಇದ್ದರು.

    ಭಿನ್ನರಿಗೆ ನೋಟಿಸ್ ಜಾರಿ..
    ಬಾಗಲಕೋಟೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿ ಅಧಿಕಾರ ತಪ್ಪುವಂತೆ ಭಿನ್ನ ನಡೆ ಅನುಸರಿಸಿದ ಬಿಜೆಪಿ ಪಕ್ಷದ ನಿರ್ದೇಶಕರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿತ್ತು. ಅವರು ಅದಕ್ಕೆ ಪ್ರತಿಕ್ರಿಯೆ ನೀಡಿ ಲಿಖಿತ ಉತ್ತರ ನೀಡಿದ್ದು, ರಾಜ್ಯ ಘಟಕಕ್ಕೆ ಕಳುಹಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಎಂದ ಅವರು, ನೋಟಿಸ್ ನೀಡಿದ ಇಬ್ಬರು ಹೆಸರು ಬಹಿರಂಗಗೊಳಿಸಲು ನಿರಾಕರಿಸಿದರು.

    ಸಚಿವ ಸಂಪುಟ ವಿಸ್ತರಣೆಯಲ್ಲಿ ನಾನು ಸಚಿವ ಸ್ಥಾನದ ಆಕಾಂಕ್ಷಿಯೂ ಅಲ್ಲ. ಅದರ ಅಪೇಕ್ಷೆಯೂ ಇಲ್ಲ. ಈಗಿರುವ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವುದು ನನ್ನ ಉದ್ದೇಶವಾಗಿದೆ. ಸಂಪುಟ ವಿಸ್ತರಣೆಯಲ್ಲಿ ಜಿಲ್ಲೆಯ ಬೇರೆ ಯಾರಿಗಾದರು ಸಚಿವ ಸ್ಥಾನ ದೊರೆಯುತ್ತದೆ ಎನ್ನುವ ವಿಷಯವು ಗೊತ್ತಿಲ್ಲ.
    – ವೀರಣ್ಣ ಚರಂತಿಮಠ ಶಾಸಕ

    ಜನ ಸೇವಕ ಸಮಾವೇಶ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts