ತಹಸೀಲ್ದಾರ್ ಕಚೇರಿ ಎದುರು ಬಿಜೆಪಿ ಪ್ರತಿಭಟನೆ

ಬಾಗಲಕೋಟೆ: ಹಾಸನದ ಬಿಜೆಪಿ ಶಾಸಕ ಪ್ರೀತಮ್ ಗೌಡ ಅವರ ಮನೆ ಮೇಲೆ ಕಲ್ಲು ಎಸೆದ ಘಟನೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ಮೆರವಣಿಗೆ ಮೂಲಕ ನವನಗರದ ತಹಸೀಲ್ದಾರ್ ಕಚೇರಿಗೆ ಆಗಮಿಸಿದ ಬಿಜೆಪಿ ಕಾರ್ಯಕರ್ತರು, ಮುಖಂಡರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ನಂತರ ತಹಸೀಲ್ದಾರ್ ನಾಗಠಾಣ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಮಾಜಿ ಶಾಸಕ ಪಿ.ಎಚ್. ಪೂಜಾರ ಮಾತನಾಡಿ, ದಿನದಿಂದ ದಿನಕ್ಕೆ ಕರ್ನಾಟಕ ಗೂಂಡಾ ರಾಜ್ಯವಾಗಿ ಪರಿವರ್ತನೆಯಾಗುತ್ತಿದೆ. ಸಿಎಂ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಅಶಾಂತಿಯ ವಾತಾವರಣ ಸೃಷ್ಟಿಸುತ್ತಿದೆ. ಜೆಡಿಎಸ್ ಪಕ್ಷದ ಭದ್ರಕೋಟೆ ಎನಿಸಿದ್ದ ಹಾಸನದಲ್ಲಿ ಬಿಜೆಪಿ ಗೆಲವು ಸಾಧಿಸಿರುವುದು ಸಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಶಾಸಕ ಪ್ರೀತಮ್ ಗೌಡ ಮನೆ ಮೇಲೆ ಕಲ್ಲು ತೂರಾಟ ಮಾಡಿ ಜೆಡಿಎಸ್ ಕಾರ್ಯಕರ್ತರು ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ ಎಂದು ದೂರಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ರೇವಣಕರ ಮಾತನಾಡಿ, ಹಾಸನದಲ್ಲಿ ಬಿಜೆಪಿ ಬೆಳವಣಿಗೆ ಸಹಿಸದ ಸಿಎಂ ಕುಮಾರಸ್ವಾಮಿ, ಸಚಿವ ಎಚ್.ಡಿ. ರೇವಣ್ಣ ಗಲಾಟೆ ಪ್ರಕರಣಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇಂತಹ ಬೆದರಿಕೆ ಪ್ರಯತ್ನಗಳಿಗೆ ಬಿಜೆಪಿ ಹೆದರುವುದಿಲ್ಲ. ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಇಲ್ಲವಾದಲ್ಲಿ ರಾಜ್ಯವ್ಯಾಪಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಬಿಜೆಪಿ ನಗರ ಘಟಕದ ಅಧ್ಯಕ್ಷ ರಾಜು ನಾಯ್ಕರ, ಗ್ರಾಮೀಣ ಘಟಕದ ಅಧ್ಯಕ್ಷ ರಾಜು ಮುದೆನೂರ, ಜಿಲ್ಲಾ ವಕ್ತಾರ ಜಯಂತ ಕುರಂದವಾಡ, ಮುಖಂಡರಾದ ಬಸವರಾಜ ಸಿದ್ಲಿಂಗಪ್ಪನವರ, ಬಸವರಾಜ ಅವರಾದಿ, ಬಸವರಾಜ ಹೊನ್ನಾಳಿ, ಚನ್ನಪ್ಪ ಮಾಚಕನೂರ, ಸುರೇಶ ಕೊಣ್ಣೂರ, ಸಂಗಮೇಶ ಹಿತ್ತಲಮನಿ, ಶಿವಾನಂದ ಟವಳಿ, ಈರಣ್ಣ ಯಳ್ಳಿಗುತ್ತಿ, ಸವಿತಾ ಲೆಂಕೆನ್ನವರ, ಅನಿತಾ ಸರೋಧೆ, ಶಶಿಕಲಾ ಮಜ್ಜಗಿ ಇತರರು ಇದ್ದರು.