More

  30 ರಿಂದ ಕುಷ್ಠರೋಗ ಜಾಗೃತಿ ಅಭಿಯಾನ

  ಬಾಗಲಕೋಟೆ: 30 ರಿಂದ ಕುಷ್ಠರೋಗ ಜಾಗೃತಿ ಅಭಿಯಾನ ಜಿಲ್ಲೆಯಾದ್ಯಂತ ಜ.30 ರಿಂದ ೆಬ್ರವರಿ 13 ವರೆಗೆ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಂಗೂಬಾಯಿ ಮಾನಕರ ಹೇಳಿದರು.

  ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಸೋಮವಾರ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕುಷ್ಠರೋಗವನ್ನು ಸೊನ್ನೆಗೆ ತರುವ ನಿಟ್ಟಿನಲ್ಲಿ ಈ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಕುಷ್ಠರೋಗ ಸ್ಪರ್ಶದಿಂದ ಬರುವಂತ ರೋಗವಲ್ಲ ಎಂಬುದನ್ನು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವಾಗಬೇಕು. ಜಿಲ್ಲೆಯಲ್ಲಿ ಈಗಾಗಲೇ 35 ಕುಷ್ಠರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು, ಅದರಲ್ಲಿ 16 ಹೊಸ ರೋಗಿಗಳನ್ನು ಇದ್ದಾರೆ ಎಂದರು.

  ಕುಷ್ಠರೋಗದ ಕಾಲೋನಿಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜಾಗೃತಿ ಮೂಡಿಸಲಾಗುತ್ತದೆ. ಆಶಾ ಕಾರ್ಯಕರ್ತೆಯರು ಮನೆ ಮನೆಗಳಿಗೆ ಬೇಟಿ ನೀಡಿ ಕುಷ್ಠರೋಗದ ಲಕ್ಷಣಗಳು ಕಂಡುಬಂದಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆಗಳಲ್ಲಿ ಪರೀಕ್ಷೆಗೆ ಒಳಪಡಿಸಬೇಕು. ಜಿಲ್ಲೆಯ ಎಲ್ಲ ಶಾಲೆಗಳಲ್ಲಿ ಪ್ರಾರ್ಥನಾ ಅವಧಿಯಲ್ಲಿ ಕುಷ್ಠರೋಗದ ಲಕ್ಷಣಗಳ ಬಗ್ಗೆ ಅರಿವು ಮೂಡಿಸಬೇಕು. ರೋಗದ ಲಕ್ಷಣಗಳು ಮಕ್ಕಳಲ್ಲಿ ಕಂಡುಬಂದಲ್ಲಿ ತಕ್ಷಣ ಶಾಲಾ ಶಿಕ್ಷಕರಿಗೆ ಮಾಹಿತಿ ನೀಡುವಂತೆ ಎಲ್ಲ ಶಾಲಾ ಮುಖ್ಯೋಪಾಧ್ಯಯರಿಗೆ ನಿರ್ದೇಶನ ನೀಡಬೇಕು ಎಂದು ಡಿಡಿಪಿಐಗೆ ಸೂಚನೆ ನೀಡಿದರು.

  ಆರಂಭದ ಹಂತದಲ್ಲಿಯೇ ಚಿಕಿತ್ಸೆಯನ್ನು ಪಡೆದರೆ ಕುಷ್ಠರೋಗದಿಂದ ಗುಣಮುಖವಾಗುತ್ತದೆ. ಆಯಾ ತಾಲೂಕಾ ಅಧಿಕಾರಿಗಳು ಕುಷ್ಠರೋಗ ಕಾಲೋನಿಗಳಲ್ಲಿ ಜಾಗೃತಿ ಕಾರ್ಯಕ್ರಮ, ಗೋಡೆ ಬರಹ, ಪಾಂಪ್ಲೇಂಟ್ಸ್ ಹಂಚುವ ಮೂಲಕ ಜಾಗೃತಿ ಮೂಡಿಸಬೇಕು. ಕುಷ್ಠರೋಗಿಗಳು ಭೀಕ್ಷೆ ಬೇಡುತ್ತಿರುವುದು ಕಂಡು ಬರುತ್ತಿದ್ದು, ಅವರಿಗೆ ಪಡಿತರ ಒದಗಿಸುವ ಕೆಲಸವಾಗಬೇಕು. ಉದ್ಯೋಗ ಖಾತ್ರಿ ಯೋಜನೆ ಮೂಲಕ ಕುಷ್ಠರೋಗಿಗಳಿಗೆ ಕೂಲಿ ಸಹ ನೀಡಲಾಗುವುದೆಂದು ತಿಳಿಸಿದರು. ಅಭಿಯಾನದಲ್ಲಿ ಎನ್‌ಜಿಓಗಳನ್ನು ತೊಡಗಿಸಿಕೊಳ್ಳಬೇಕು ಎಂದರು.

  ಕುಷ್ಠರೋಗಕ್ಕೆ ಅಂಟಿಕೊಂಡಿರುವ ಕಳಂಕ ಹಾಗೂ ತಾರತಮ್ಯವನ್ನು ಹೋಗಲಾಡಿಸಿ, ಕುಷ್ಠರೋಗಿಗಳಿಗೆ ಸಮಾಜದ ಮುಖ್ಯ ವಾಹಿನಿಯಲ್ಲಿ ಗೌರವಯುತವಾಗಿ ಬದುಕಲು ಅವಕಾಶ ಕಲ್ಪಿಸಬೇಕು. ಈ ರೋಗಕ್ಕೆ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಮತ್ತು ಚಿಕಿತ್ಸೆ ಉಚಿವಾಗಿರುವ ನೀಡುತ್ತಿರುವ ಬಗ್ಗೆ ಅರಿವು ಮೂಡಿಸಬೇಕು. ಕುಷ್ಠರೋಗ ನಿರ್ಮೂಲ ದಿನವಾದ ಜ.30 ರಂದು ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಪ್ರತಿಜ್ಞಾವಿಧಿ ಕಾರ್ಯಕ್ರಮ ಕೈಗೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್.ದೇಸಾಯಿ ಮಾತನಾಡಿ, ಕುಷ್ಠರೋಗ ನಿರ್ಮೂಲನೆಗೆ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಕುಷ್ಠರೋಗ ಕಾಲೋನಿಗಳಲ್ಲಿ ಕ್ಯಾಂಪ್‌ಗಳನ್ನು ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ 10 ಸಾವಿರ ಜನಸಂಖ್ಯೆಗೆ ಒಂದು ಪ್ರಕರಣಗಳು ಕಂಡು ಬಂದಿದ್ದು, ಸದ್ಯ ಜಿಲ್ಲೆಯಲ್ಲಿ 35 ಕುಷ್ಠರೋಗಿಗಳು ಇದ್ದಾರೆ. ಅವರಿಗೆ ಉಚಿತವಾಗಿ ಪರೀಕ್ಷೆ ಹಾಗೂ ಚಿಕಿತ್ಸೆಗಳನ್ನು ನೀಡಲಾಗುತ್ತಿದೆ ಎಂದರು.

  ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಕುಸುಮಾ ಮಾಗಿ, ಚರ್ಮರೋಗ ತಜ್ಞ ಡಾ.ಪ್ರಭಾಕಾರ ಮೇಟಿ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಬಿ.ಜಿ.ಹುಬ್ಬಳ್ಳಿ, ಕುಟುಂಬ ಕಲ್ಯಾಣಾಧಿಕಾರಿ ಡಾ.ಡಿ.ಬಿ.ಪಟ್ಟಣಶೆಟ್ಟಿ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವಿಜಯ ಕಂಠಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಆಯಾ ತಾಲೂಕಿನ ಆರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು.

  ಕುಷ್ಠರೋಗ ಸಂಪೂರ್ಣ ಗುಣಮುಖ ಹೊಂದುವ ರೋಗವಾಗಿದೆ. ಪ್ರಾರಂಭ ಹಂತದಲ್ಲಿಯೇ ಚಿಕಿತ್ಸೆ ಪಡೆಯುವ ಮೂಲಕ ಅಂಗವಿಕಲತೆಗೆ ಒಳಪಡುವದನ್ನು ತಪ್ಪಿಸಿ ಕುಷ್ಠರೋಗದಿಂದ ಗುಣಮುಖ ಹೊಂದಬಹುದಾಗಿದೆ. ಆದ್ದರಿಂದ ದೇಹದ ಯಾವುದೇ ಭಾಗದಲ್ಲಿ ತಿಳಿ ಬಿಳಿ ಅಥವಾ ತಾಮ್ರ ವರ್ಣದ ಸ್ಪರ್ಶ ಜ್ಞಾನವಿಲ್ಲದ ಮಚ್ಚೆಗಳು ಕಂಡುಬಂದಲ್ಲಿ ಸಮೀಪದ ಸರ್ಕಾರಿ ಆಸ್ಪತ್ರೆಗಳಲ್ಲಿ ಪರೀಕ್ಷಿಸಿಕೊಳ್ಳಬೇಕು.
  -ಗಂಗೂಬಾಯಿ ಮಾನಕರ ಜಿಪಂ ಸಿಇಓ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts