More

    1200 ಜನರಿಗೆ ಉದ್ಯೋಗ

    ಬಾಗಲಕೋಟೆ : ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆ ಸಹಯೋಗದಲ್ಲಿ ವಿದ್ಯಾಗಿರಿಯ ಗೌರಿಶಂಕರ ಕಲ್ಯಾಣ ಮಂಪಟದಲ್ಲಿ ಎರಡು ದಿನ ನಡೆದ ಜಿಲ್ಲಾ ಮಟ್ಟದ ಉದ್ಯೋಗ ಮೇಳದಲ್ಲಿ 1208 ಜನರಿಗೆ ಉದ್ಯೋಗ ದೊರೆತಿದೆ. 853 ಅಭ್ಯರ್ಥಿಗಳನ್ನು ಮುಂದಿನ ಆಯ್ಕೆಗೆ ಕಾಯ್ದಿರಿಸಲಾಗಿದೆ. ಅಂಗವಿಕಲ ಉದ್ಯೋಗ ಆಕಾಂಕ್ಷಿಗಳು ಸಹ ಉದ್ಯೋಗ ಮೇಳದಲ್ಲಿ ಪಾಲ್ಗೊಂಡಿದ್ದು, 57 ಅಭ್ಯರ್ಥಿಗಳ ಪೈಕಿ 18 ಅಭ್ಯರ್ಥಿಗಳಿಗೆ ಕೆಲಸ ಸಿಕ್ಕಿದೆ.

    ಉದ್ಯೋಗ ದೊರೆತ ಅಭ್ಯರ್ಥಿಗಳಿಗೆ ಶುಕ್ರವಾರ ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ನೇಮಕಾತಿ ಆದೇಶ ಪ್ರತಿ ವಿತರಿಸಿ ಮಾತನಾಡಿದ ಡಿಸಿಎಂ ಗೋವಿಂದ ಕಾರಜೋಳ, ಜಿಲ್ಲೆಯಲ್ಲಿರುವ ನೀರು ಮತ್ತು ಭೂಮಿಯ ಸದ್ಬಳಕೆ ಮಾಡಿಕೊಂಡು ಉದ್ಯಮ ಸ್ಥಾಪಿಸಿ ಉದ್ಯೋಗ ಸೃಷ್ಟಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

    ಪ್ರತಿ ಜಿಲ್ಲೆಯಲ್ಲಿ ಉದ್ಯೋಗ ಮೇಳ ಯೋಜನೆಯನ್ನು ರೂಪಿಸುವ ಮೂಲಕ ನಿರುದ್ಯೋಗಿಗಳಿಗೆ ಉದ್ಯೋಗ ಸಿಗುವಂತೆ ಮಾಡಲಾಗುತ್ತಿದೆ. ಈ ಯೋಜನೆ ರಾಜ್ಯದಲ್ಲಿ ಯಶಸ್ವಿಯಾಗಿದೆ. ಇದೊಂದು ವಿಶಿಷ್ಟ ಕಾರ್ಯಕ್ರಮವಾಗಿದ್ದು, ಉದ್ಯೋಗದಾತರಿಗೆ ಅರ್ಹತೆ ಇರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಹಾಗೂ ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಉದ್ಯೋಗ ಪಡೆಯಲು ಅನುಕೂಲವಾಗಿದೆ. ಉದ್ಯೋಗಪತಿಗಳಿಗೆ ಉತ್ತಮ ವ್ಯಕ್ತಿಗಳನ್ನು ಆಯ್ಕೆ ಮಾಡಲು ಸುವರ್ಣಾವಕಾಶ ಒದಗಿಸಿಕೊಟ್ಟಂತಾಗುತ್ತದೆ ಎಂದರು.

    ಮೇಳದಲ್ಲಿ ಉದ್ಯೋಗ ಪಡೆದ ಅಭ್ಯರ್ಥಿಗಳು ಶ್ರಮವಹಿಸಿ ಕೆಲಸ ಮಾಡಿ ವೃತ್ತಿಯಲ್ಲಿ ಯಶಸ್ಸು ಸಾಧಿಸಬೇಕು. ಮುಂದಿನ ದಿನಗಳಲ್ಲಿ ನಾಲ್ಕಾರು ಜನರಿಗೆ ಉದ್ಯೋಗ ನೀಡುವ ಮಟ್ಟಕ್ಕೆ ಬೆಳೆಯಬೇಕು ಎಂದು ಸಲಹೆ ಮಾಡಿದರು.

    ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ ಮಾತನಾಡಿ, ಯುವಕರು ಸ್ವಂತ ಉದ್ಯೋಗ ಮಾಡಲು ಪ್ರಧಾನಿ ಮೋದಿ ಮುದ್ರಾ ಯೋಜನೆ ಜಾರಿಗೆ ತಂದಿದ್ದಾರೆ. ಯುವಕರು ಇದನ್ನು ಸದ್ಬಳಕೆ ಮಾಡಿಕೊಂಡು ಸ್ವಂತ ಉದ್ಯಮ ಸ್ಥಾಪಿಸಿ ಅನೇಕರಿಗೆ ಉದ್ಯೋಗ ನೀಡುವಂತಾಗಬೇಕು ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ವೀರಣ್ಣ ಚರಂತಿಮಠ ಮಾತನಾಡಿ, ದೇಶದಲ್ಲಿ ನಿರುದ್ಯೋಗ ಸಮಸ್ಯೆ ಕಾಡುತ್ತಿದೆ ಎಂದು ಕೆಲವರು ರಾಜಕಾರಣ ಮಾಡಲು ಬೊಬ್ಬೆ ಹಾಕುತ್ತಿದ್ದಾರೆ. ಆದರೆ, ವಾಸ್ತವದಲ್ಲಿ ಕೇಂದ್ರ ಸರ್ಕಾರ ಚತುಷ್ಪಥ ರಸ್ತೆ, ರೈಲ್ವೆ ಹಳಿಯ ಡಬ್ಲಿಂಗ್, ಉಡಾನ್ ಯೋಜನೆ ಮೂಲಕ ವಿಮಾನ ನಿಲ್ದಾಣ ಅಭಿವೃದ್ಧಿ ಹಾಗೂ ಸಮುದ್ರ ಮಾರ್ಗ ಸಂಚಾರ ಮೂಲಕ ಲಕ್ಷಾಂತರ ಉದ್ಯೋಗಗಳನ್ನು ಸೃಷ್ಟಿಸಿದೆ. ರಾಜ್ಯ ಸರ್ಕಾರ ಕೂಡ ಇದಕ್ಕೆ ಬದ್ಧವಾಗಿದ್ದು, ಪ್ರತಿ ಜಿಲ್ಲೆಯಲ್ಲಿ ಉದ್ಯೋಗ ಮೇಳ ಆಯೋಜಿಸುವ ಮೂಲಕ ನಿರುದ್ಯೋಗಿಗಳಿಗೆ ಉದ್ಯೋಗ ಪಡೆಯಲು ಅವಕಾಶ ಮಾಡಿಕೊಡುತ್ತಿದೆ ಎಂದು ತಿಳಿಸಿದರು.

    ತಾ.ಪಂ. ಅಧ್ಯಕ್ಷ ಚನ್ನನಗೌಡರ ಪರನಗೌಡರ, ಜಿಲ್ಲಾಧಿಕಾರಿ ಡಾ.ಕೆ.ರಾಜೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್, ಜಿಲ್ಲಾ ಪಂಚಾಯಿತಿ ಸಿಇಒ ಗಂಗೂಬಾಯಿ ಮಾನಕರ, ಪ್ರೊಬೇಷನರಿ ಐಎಎಸ್ ಅಧಿಕಾರಿ ಗರಿಮಾ ಪವ್ವಾರ, ಜಿಲ್ಲಾ ಕೌಶಲ ಕೇಂದ್ರದ ಪ್ರಾಂಶುಪಾಲ ವಿ.ಎಸ್.ಹಿರೇಮಠ ಸೇರಿ ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts