More

    ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ

    ಬಾಗಲಕೋಟೆ: ಜಿಲ್ಲಾದ್ಯಂತ ನಾಲ್ಕು ದಿನ ಹಮ್ಮಿಕೊಂಡಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬಾಯಕ್ಕ ಮೇಟಿ ಭಾನುವಾರ ಚಾಲನೆ ನೀಡಿದರು.

    ನವನಗರದ ಸೆಕ್ಟರ್ ನಂ.47 ರಲ್ಲಿರುವ ನಗರ ಆರೋಗ್ಯ ಪ್ರಾಥಮಿಕ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಜರುಗಿದ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಎರಡು ಹನಿ ಪೋಲಿಯೋ ಲಸಿಕೆ ಹಾಕಿಸಬೇಕು. ಪಾಲಕರು ಹಾಗೂ ಪೋಷಕರು ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸುವ ಮೂಲಕ ಇತರರಿಗೆ ಪ್ರೇರೇಪಿಸಬೇಕು. ಈ ಅಭಿಯಾನ ಯಶಸ್ವಿಗೆ ಸಹಕರಿಸಬೇಕು ಎಂದು ಕೋರಿದರು.

    ಶಾಸಕ ವೀರಣ್ಣ ಚರಂತಿಮಠ ಮಾತನಾಡಿ, ಜಿಲ್ಲಾದ್ಯಂತ ನಾಲ್ಕು ದಿನ ನಡೆಯುವ ಪಲ್ಸ್ ಪೋಲಿಯೋ ಅಭಿಯಾನದಲ್ಲಿ 5 ವರ್ಷದೊಳಗಿನ ಒಟ್ಟು 2,32,414 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸುವ ಗುರಿ ಹೊಂದಲಾಗಿದೆ. ಬಾಗಲಕೋಟೆ ತಾಲೂಕಿನಲ್ಲಿ 34,061, ಬಾದಾಮಿ 36,660, ಹುನಗುಂದ 38,448, ಬೀಳಗಿ 20,456, ಮುಧೋಳ 40,591 ಹಾಗೂ ಜಮಖಂಡಿ ತಾಲೂಕಿನಲ್ಲಿ 62,198 ಮಕ್ಕಳಿಗೆ ಲಸಿಕೆ ಹಾಕಲಾಗುತ್ತಿದೆ. ಈ ಅಭಿಯಾದಲ್ಲಿ ಯಾವುದೇ ಮಗು ಈ ಪೋಲಿಯೋ ಲಸಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

    ಲಸಿಕಾ ಕಾರ್ಯಕ್ಕೆ 1,373 ಬೂತ್‌ಗಳನ್ನು ತೆರೆಯಲಾಗಿದ್ದು, 2,826 ಸಿಬ್ಬಂದಿ ಹಾಗೂ 260 ಮೇಲ್ವಿಚಾರಕರು ಕಾರ್ಯನಿರ್ವಹಿಸಲಿದ್ದಾರೆ. ಮೊದಲನೇ ದಿನ ಬೂತ್ ಮಟ್ಟದಲ್ಲಿ, ಮೂರು ದಿನ ಮನೆ ಮನೆಗೆ ಭೇಟಿ ನೀಡಿ ಪೋಲಿಯೋ ಲಸಿಕೆಯನ್ನು ಹಾಕಲಾಗುತ್ತದೆ. ಪಾಲಕರು ಮತ್ತು ಪೋಷಕರು ತಮ್ಮ ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಬೇಕು ಎಂದು ಮನವಿ ಮಾಡಿದರು.

    ಪಲ್ಸ್ ಪೋಲಿಯೋ ಜಾಗೃತಿ ಗೀತೆಗಳನ್ನು ನರೇನೂರಿನ ಸಂಗನಬಸಯ್ಯ ಹಿರೇಮಠ ಕಲಾತಂಡದವರು ಪ್ರಸ್ತುತ ಪಡಿಸಿದರು. ತಾಪಂ ಅಧ್ಯಕ್ಷ ಚನ್ನನಗೌಡ ಪರನಗೌಡರ, ನಗರಸಭೆ ಸದಸ್ಯ ಅಂಬಾಜಿ ಜ್ಯೋತಿ, ಜಿಪಂ ಸಿಇಒ ಗಂಗೂಬಾಯಿ ಮಾನಕರ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರುಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್. ದೇಸಾಯಿ, ಜಿಲ್ಲಾ ಲಸಿಕಾ ಅಧಿಕಾರಿ ಡಾ.ಬಿ.ಜಿ. ಹುಬ್ಬಳ್ಳಿ, ಕುಟುಂಬ ಕಲ್ಯಾಣಾಧಿಕಾರಿ ಬಿ.ಡಿ. ಪಟ್ಟಣಶೆಟ್ಟಿ ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts