ಕ್ರೀಡೆಯಿಂದ ದೈಹಿಕ, ಮಾನಸಿಕ ಶಕ್ತಿ ವೃದ್ಧಿ

ಬಾಗಲಕೋಟೆ: ಕ್ರೀಡೆಗಳಲ್ಲಿ ಹೆಚ್ಚಾಗಿ ಭಾಗವಹಿಸುವುದರಿಂದ ದೈಹಿಕ ಮತ್ತು ಮಾನಸಿಕವಾಗಿ ಶಕ್ತಿ ವೃದ್ಧಿಸಿಕೊಳ್ಳಬಹುದಾಗಿದೆ ಎಂದು ಶಾಸಕ ವೀರಣ್ಣ ಚರಂತಿಮಠ ಹೇಳಿದರು.

ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿ, ಶಿಕ್ಷಕರು, ಪಾಲಕರು ಸ್ಪರ್ಧಿಗಳಲ್ಲಿ ಚೈತನ್ಯ ತುಂಬಬೇಕು. ಇದರಿಂದ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಹೆಸರು, ಖ್ಯಾತಿ ಪಡೆಯಲು ಸಾಧ್ಯವಾಗುತ್ತದೆ ಎಂದರು.
ಇಂದಿನ ದಿನಗಳಲ್ಲಿ ಕ್ರೀಡೆಗೆ ಹೆಚ್ಚು ಮಹತ್ವ ಬಂದಿದ್ದು, ಜಿಲ್ಲೆಯ ಕ್ರೀಡಾಪಟುಗಳು ರಾಜ್ಯ, ರಾಷ್ಟ್ರಮಟ್ಟದ ಪ್ರಶಸ್ತಿ ಪಡೆಯುವ ಜತೆಗೆ ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆಯಲ್ಲೂ ಪದಕ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಸೋಲು ಗೆಲುವಿಗೆ ಮಹತ್ವ ನೀಡದೆ ಕ್ರೀಡಾ ಮನೋಭಾವನೆಯಿಂದ ಪಾಲ್ಗೊಳ್ಳಬೇಕು ಎಂದು ಸಲಹೆ ನೀಡಿದರು.

ವಿ.ಪ. ಸದಸ್ಯ ಎಸ್.ಆರ್. ಪಾಟೀಲ ಮಾತನಾಡಿ, ಕಲಿಕೆಯ ಜತೆಗೆ ಕ್ರೀಡಾ ಚಟುವಟಿಯಲ್ಲಿ ಪಾಲ್ಗೊಳ್ಳಬೇಕು. ಯುವ ಪೀಳಿಗೆಯ ಆರೋಗ್ಯವೇ ದೇಶದ ನಿಜವಾದ ಸಂಪತ್ತು. ಕ್ರೀಡೆ ಕೇವಲ ಮನರಂಜನೆ, ಪ್ರತಿಸ್ಪರ್ಧೆ, ಪೈಪೋಟಿ ಅಲ್ಲ. ಭಾವೈಕ್ಯತೆಯ ಸಂಗಮ. ಮಕ್ಕಳಲ್ಲಿ ಕ್ರೀಡೆಯ ಬಗ್ಗೆ ಉತ್ಸಾಹ ತುಂಬಬೇಕು ಎಂದರು.
ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ, ತಾಪಂ ಅಧ್ಯಕ್ಷ ಚನ್ನನಗೌಡ ಪರನಗೌಡರ, ಜಿಪಂ ಸದಸ್ಯರಾದ ಹೂವಪ್ಪ ರಾಠೋಡ, ಹನುಮವ್ವ ಕರಿಹೊಳೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕ ಎಂ.ಎನ್. ಮೇಲಿನಮನಿ ಇತರರು ಉಪಸ್ಥಿತರಿದ್ದರು.

ಪ್ರತಿಜ್ಞಾವಿಧಿ ಸ್ವೀಕಾರ
ಕ್ರೀಡಾ ಧ್ವಜಾರೋಹಣ ನಂತರ ಕ್ರೀಡಾಜ್ಯೋತಿ ಸ್ವೀಕರಿಸಲಾಯಿತು. ಅಂತಾರಾಷ್ಟ್ರೀಯ ಕ್ರೀಡಾಪಟು ಐಶ್ವರ್ಯ ಸಂಶಿ ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮಕ್ಕೂ ಪೂರ್ವ ಜಿಲ್ಲಾ ಕ್ರೀಡಾಂಗಣ ಆವರಣದಲ್ಲಿ ತೆರೆಯಲಾದ ಒಳಾಂಗಣ ಗರಡಿ ಮನೆಯನ್ನು ಶಾಸಕ ವೀರಣ್ಣ ಚರಂತಿಮಠ ಉದ್ಘಾಟಿಸಿದರು. ಕುಸ್ತಿ ಪಂದ್ಯಕ್ಕೆ ಚಾಲನೆ ನೀಡುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.

Leave a Reply

Your email address will not be published. Required fields are marked *