ಮತದಾರರಿಗೆ ನರೇಂದ್ರ ಮೋದಿ ಸಾಧನೆ ತಲುಪಿಸಿ

ಪಕ್ಷದ ಕಾರ್ಯಕರ್ತರಿಗೆ ಶಾಸಕ ಅರವಿಂದ ಲಿಂಬಾವಳಿ ಸೂಚನೆ ಬಿಜೆಪಿಯಿಂದ ಶಕ್ತಿ ಕೇಂದ್ರ ಪ್ರಮುಖರ ಸಭೆ

ಬಳ್ಳಾರಿ: ಪ್ರಧಾನಿ ನರೇಂದ್ರ ಮೋದಿ ಸಾಧನೆಗಳು ನಮ್ಮ ಕಣ್ಣ ಮುಂದೆ ಇವೆ. ರಾಜ್ಯದಲ್ಲಿ ವಿಫಲ ಸರ್ಕಾರ ಅಧಿಕಾರದಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಸಾಧನೆಗಳು ಹಾಗೂ ರಾಜ್ಯ ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಲುಪಿಸಬೇಕಿದೆ ಎಂದು ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಪಕ್ಷದ ಕಾರ್ಯಕರ್ತರಿಗೆ ಹೇಳಿದರು.

ನಗರದ ಬಸವ ಭವನದಲ್ಲಿ ಹಮ್ಮಿಕೊಂಡಿದ್ದ ಬಳ್ಳಾರಿ, ಕೊಪ್ಪಳ, ರಾಯಚೂರು, ಚಿತ್ರದುರ್ಗ ಹಾಗೂ ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರ ಸಭೆ ಉದ್ಘಾಟಿಸಿ ಭಾನುವಾರ ಮಾತನಾಡಿದರು. ಮುಂದಿನ 10 ವರ್ಷಗಳಲ್ಲಿ ಆಯುಷ್ಮಾನ್ ಭಾರತ ಯೋಜನೆ ದೇಶದ 50 ಕೋಟಿ ಜನರನ್ನು ತಲುಪಲಿದೆ. ಕೇಂದ್ರ ಸರ್ಕಾರದ ಯೋಜನೆಗಳನ್ನು ತೆಗೆದುಕೊಂಡು ಪಕ್ಷದ ಕಾರ್ಯಕರ್ತರು ಮತದಾರರ ಮನೆಗೆ ಹೋಗಬೇಕು.

ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರ ಉತ್ತಮ ಆಡಳಿತ ನೀಡಿದರೂ ಯೋಜನೆಗಳ ಮಾಹಿತಿ ಮತದಾರರ ಮನೆಗಳಿಗೆ ತಲುಪಲಿಲ್ಲ. ವಿರೋಧ ಪಕ್ಷಗಳ ಅಪಪ್ರಚಾರದಿಂದ ಆಗ ಬಿಜೆಪಿ ಸೋಲಬೇಕಾಯಿತು. ಪ್ರಸ್ತುತ ನಾವೆಲ್ಲ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದೇವೆ. ಆದರೆ, ವೇಗವಾಗಿ ಹಾಗೂ ಯಶಸ್ವಿಯಾಗಿ ನಮ್ಮ ಜವಾಬ್ದಾರಿ ನಿಭಾಯಿಸಬೇಕಿದೆ. ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದರ ಬಗ್ಗೆ ಯಾರೂ ಚಿಂತೆ ಮಾಡುವ ಅಗತ್ಯವಿಲ್ಲ ಎಂದು ಶಾಸಕ ಅರವಿಂದ ಲಿಂಬಾವಳಿ ತಿಳಿಸಿದರು.

ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್, ಶಾಸಕರಾದ ಜಿ.ಸೋಮಶೇಖರರೆಡ್ಡಿ, ಹಾಲಪ್ಪಾಚಾರ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಚನ್ನಬಸವನಗೌಡ ಪಾಟೀಲ್, ಶರಣಪ್ಪಗೌಡ ಜಾಡಲದಿನ್ನಿ ಇತರರಿದ್ದರು.

ಆಯುಷ್ಮಾನ್ ಭಾರತ್, ಉಜ್ವಲ, ಮುದ್ರಾ ಸೇರಿ ಕೇಂದ್ರ ಸರ್ಕಾರ ನೂರಾರು ಯೋಜನೆಗಳನ್ನು ಜಾರಿಗೆ ತಂದಿದೆ. ಕಿಸಾನ್ ಸಮ್ಮಾನ್ ಯೋಜನೆ ಜಾರಿ ದಿನವೇ ದೇಶದ ಒಂದು ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ ತಲಾ ಎರಡು ಸಾವಿರ ರೂ. ಪಾವತಿಯಾಗಿದೆ. ಭ್ರಷ್ಟಾಚಾರಕ್ಕೆ ಅವಕಾಶ ಇಲ್ಲದಂತೆ ಪ್ರಧಾನಿ ಮೋದಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಕಾರ್ಯಕರ್ತರು ಮೋದಿ ಅವರ ಜನಪ್ರಿಯ ಯೋಜನೆಗಳನ್ನು ಮತದಾರರಿಗೆ ತಿಳಿಸಬೇಕು.
| ಅರವಿಂದ ಲಿಂಬಾವಳಿ, ಬಿಜೆಪಿ ಶಾಸಕ