ಶುದ್ಧ ಕುಡಿವ ನೀರಿನ ಘಟಕಗಳ ತನಿಖೆ -ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿಕೆ

ಜಿಪಂ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ

ಬಳ್ಳಾರಿ: ಶುದ್ಧ ಕುಡಿಯುವ ನೀರಿನ ಘಟಕಗಳ ಕಾರ್ಯನಿರ್ವಹಣೆ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ 15 ದಿನಗಳಲ್ಲಿ ಸಮಗ್ರ ತನಿಖೆ ನಡೆಸಿ ಘಟಕಗಳ ಕಾರ್ಯನಿರ್ವಹಣೆ ಬಗ್ಗೆ ಸುಳ್ಳು ಮಾಹಿತಿ ನೀಡುವ ಅಧಿಕಾರಿಗಳು ಹಾಗೂ ಏಜೆನ್ಸಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ನಗರದ ಜಿಪಂ ಸಭಾಂಗಣದಲ್ಲಿ ಬುಧವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಶುದ್ಧ ಕುಡಿವ ನೀರಿನ ಘಟಕಗಳು ದಾಖಲೆಗಳಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆ. ವಾಸ್ತವದಲ್ಲಿ ಜನರಿಗೆ ನೀರು ತಲುಪುತಿಲ್ಲ. ಶುದ್ಧ ಕುಡಿವ ನೀರಿನ ಘಟಕಗಳ ಕಾರ್ಯನಿರ್ವಹಣೆ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ವಾಸ್ತವ ಮಾಹಿತಿ ನೀಡಬೇಕು. ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಘಟಕಗಳ ಪರಿಶೀಲನೆ ನಡೆಸಿ ಫೋಟೋ ಸಹಿತ ವರದಿ ನೀಡಬೇಕು. ಬಳಿಕ ಪ್ರತ್ಯೇಕ ತಂಡದಿಂದ ತನಿಖೆ ನಡೆಸಲಾಗುವುದು. ತನಿಖೆ ವೇಳೆ ಸುಳ್ಳು ವರದಿ ನೀಡಿದ್ದು ಪತ್ತೆಯಾದರೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಜಿಪಂ ಸಿಇಒ ಕೆ.ನಿತೀಶ್ ಮಾತನಾಡಿ, ಉದ್ಯೋಗ ಖಾತ್ರಿ ಯೋಜನೆಯಡಿ ಜಿಲ್ಲೆ ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದೆ. ಪ್ರಸಕ್ತ ವರ್ಷ 82 ಲಕ್ಷ ಮಾನವ ದಿನಗಳನ್ನು ಸೃಷ್ಟಿಸುವ ಗುರಿ ಹೊಂದಲಾಗಿದ್ದು, ಈಗಾಗಲೇ 62 ಲಕ್ಷ ಮಾನವ ದಿನಗಳನ್ನು ಸೃಷ್ಟಿ ಮಾಡಲಾಗಿದೆ. ಬಹುತೇಕ ಕೂಲಿ ಕಾರ್ಮಿಕರು 100 ದಿನಗಳ ಕೂಲಿ ಕೆಲಸ ಮುಗಿಸಿದ್ದಾರೆ. 11 ಕೋಟಿ ರೂ. ಕೂಲಿ ಹಾಗೂ 27 ಕೋಟಿ ಭೌತಿಕ ಮೊತ್ತ ಪಾವತಿ ಬಾಕಿ ಇದೆ ಎಂದರು.

ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಇಇ ಮುರಳೀಧರ್ ಕೆರೆಗಳ ಭರ್ತಿಗೆ ಡಿಸ್ಟ್ರಿಬ್ಯೂಟರ್ ಜತೆಗೆ ಮುಖ್ಯ ಕಾಲುವೆ ನೀರು ಪಡೆಯಲು ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದರು.
ಸಂಸದ ವೈ.ದೇವೇಂದ್ರಪ್ಪ, ಜಿಪಂ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್, ಇಲಾಖೆಯ ವಿಶೇಷ ಅಧಿಕಾರಿ ಜಯರಾಮ್ ಹಾಜರಿದ್ದರು.

ಬೆಳಗಾವಿಯಲ್ಲಿ ಸಭೆ
ಬೆಳಗಾವಿಯ ಸುವರ್ಣ ಸೌಧದಲ್ಲಿ ಸೆ.8 ಹಾಗೂ 9ರಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯಿಂದ ಸಭೆ ನಡೆಸಲಾಗುವುದು. ಸೆ.8ರಂದು ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಜಿಪಂ ಸಿಇಒಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸೆ 9ರಂದು ಜಿಪಂ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸ್ಥಾಯಿ ಸಮಿತಿಗಳ ಅಧ್ಯಕ್ಷರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವ ಈಶ್ವರಪ್ಪ ತಿಳಿಸಿದರು.

ಡಿಕೆಶಿ ಬಗ್ಗೆ ಮಾತಿಲ್ಲ
ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಲು ಸಚಿವ ಕೆ.ಎಸ್.ಈಶ್ವರಪ್ಪ ನಿರಾಕರಿಸಿದರು. ಬೆಳಗ್ಗೆ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರು ಭೇಟಿಯಾದಾಗ ತುಂಬಾ ಪ್ರಮುಖವಾದ ಸಭೆ ಇದೆ. ಸಭೆ ಬಳಿಕ ಮಾತನಾಡುವುದಾಗಿ ತಿಳಿಸಿದರು. ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಬಳಿಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವನಾಗಿ ರಾಜ್ಯ ಪ್ರವಾಸ ಕೈಗೊಳ್ಳುತ್ತಿರುವ ಹಿನ್ನೆಲೆ ನಮ್ಮ ಮನೆ ದೇವರ ದರ್ಶನಕ್ಕಾಗಿ ಬಳ್ಳಾರಿಗೆ ಆಗಮಿಸಿದ್ದೆ. ಈ ಹಿನ್ನೆಲೆಯಲ್ಲಿ ನಾನು ರಾಜಕೀಯ ಮಾತನಾಡುವುದಿಲ್ಲ. ಸಹಕಾರ ನೀಡಬೇಕೆಂದು ಕೋರಿದರು.