

ಢಾಕಾ: ಮಹಿಳಾ ಆವೃತ್ತಿಯ ಟಿ20 ವಿಶ್ವಕಪ್ ಆರಂಭವಾಗುವುದಕ್ಕೆ ಕೆಲವೇ ತಿಂಗಳುಗಳು ಬಾಕಿ ಉಳಿದಿದ್ದು, ಅಕ್ಟೋಬರ್ 03ರಂದು ಆರಂಭವಾಗಲಿರುವ ಈ ಟೂರ್ನಿಗೆ ಬಾಂಗ್ಲಾದೇಶ ಆತಿಥ್ಯ ವಹಿಸುತ್ತಿದೆ. ಆದರೆ, ಬಾಂಗ್ಲಾದೇಶದಲ್ಲಿನ ಸದ್ಯದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಚುಟುಕು ವಿಶ್ವ ಸಮರದ ಪಂದ್ಯಾವಳಿಯನ್ನು ಬಾಂಗ್ಲಾದೇಶದಿಂದ ಬೇರೆಡೆಗೆ ಸ್ಥಳಾಂತರಿಸಲು ಐಸಿಸಿ ಮುಂದಾಗಿದ್ದು, ಬಾಂಗ್ಲಾದೇಶದಲ್ಲಿ ಮಹಿಳಾ ಟಿ20 ವಿಶ್ವಕಪ್ ನಡೆಯುವುದು ಬಹುತೇಕ ಡೌಟ್ ಎಂದು ಹೇಳಲಾಗಿದೆ.
ಸರ್ಕಾರಿ ಹುದ್ದೆಯಲ್ಲಿನ ಮೀಸಲಾತಿಗೆ ಸಂಬಂಧಿಸಿದಂತೆ ಬಾಂಗ್ಲಾದೇಶದಲ್ಲಿ ಹಿಂಸಾಚಾರ ಭುಗಿಲೆದಿದ್ದೆ. ದಿನ ಕಳೆದಂತೆ ಹೋರಾಟದ ಸ್ವರೂಪ ಬದಲಾಗುತ್ತಿದ್ದು, ಈಗಾಗಲೇ 300ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದಲ್ಲದೆ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ದೇಶವನ್ನು ತೊರೆದು ಭಾರತದಲ್ಲಿ ಆಶ್ರಯ ಪಡೆದಿದ್ದು, ಇಂತಹ ಸಮಯದಲ್ಲಿ ಟಿ20 ವಿಶ್ವಕಪ್ ನಡೆಸುವುದು ಸೂಕ್ತವಲ್ಲ ಎಂಬ ನಿರ್ಧಾರಕ್ಕೆ ಐಸಿಸಿ ಬಂದಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಐಸಿಸಿ, ಬಾಂಗ್ಲಾದೇಶದಲ್ಲಿನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ಆಯ್ಕೆಗಳನ್ನು ಮುಕ್ತವಾಗಿ ಇರಿಸಲಾಗಿದೆ. ಐಸಿಸಿಯು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ [ಬಿಸಿಬಿ], ಅವರ ಭದ್ರತಾ ಏಜೆನ್ಸಿಗಳು ಮತ್ತು ನಮ್ಮ ಸ್ವಂತ ಸ್ವತಂತ್ರ ಭದ್ರತಾ ಸಲಹೆಗಾರರೊಂದಿಗೆ ಸಂಪರ್ಕದಲ್ಲಿದ್ದು, ಎಲ್ಲಾ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಇದಲ್ಲದೆ ಐಸಿಸಿ ವಿಶ್ವಕಪ್ಅನ್ನು ಬಾಂಗ್ಲಾದೇಶದಿಂದ ಭಾರತ, ಯುಎಇ, ಶ್ರೀಲಂಕಾಗೆ ಸ್ಥಳಾಂತರಿಸುವ ಬಗ್ಗೆ ಚಿಂತನೆ ನಡೆಸುತ್ತಿದ್ದು, ಈಗಾಗಲೇ ಅಲ್ಲಿನ ದೇಶಗಳಲ ಕ್ರಿಕೆಟ್ ಮಂಡಳಿ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದೆ. ಈ ಮೂರು ದೇಶಗಳು ಐಸಿಸಿಯ ಬ್ಯಾಕ್ಅಪ್ ಪಟ್ಟಿಯಲ್ಲಿದ್ದು, ಶೀಘ್ರದಲ್ಲೇ ಈ ಬಗ್ಗೆ ಐಸಿಸಿ ತನ್ನ ನಿರ್ಧಾರವನ್ನು ಪ್ರಕಟಿಸುವುದಾಗಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಹಿಳಾ ಟಿ20 ವಿಶ್ವಕಪ್ನಲ್ಲಿ 10 ತಂಡಗಳು ಭಾಗವಹಿಸಲಿವೆ. 17 ದಿನಗಳ ಈ ಟೂರ್ನಿಯಲ್ಲಿ ಒಟ್ಟು 23 ಪಂದ್ಯಗಳು ನಡೆಯಲಿದ್ದು, ಅಕ್ಟೋಬರ್ 3 ರಿಂದ ಅಕ್ಟೋಬರ್ 14 ರವರೆಗೆ ಲೀಗ್ ಪಂದ್ಯಗಳು ನಡೆಯಲಿವೆ. ಪ್ರತಿ ಗುಂಪಿನಿಂದ ಅಗ್ರ ಎರಡು ತಂಡಗಳು ನಂತರ ಸೆಮಿಫೈನಲ್‌ಗೆ ಮುನ್ನಡೆಯುತ್ತವೆ. ಸೆಮಿಫೈನಲ್ ಪಂದ್ಯಗಳು ಅಕ್ಟೋಬರ್ 17 ಮತ್ತು 18 ರಂದು ನಡೆಯಲಿದೆ. ಈ ಟೂರ್ನಿಯ ಫೈನಲ್ ಪಂದ್ಯ ಅಕ್ಟೋಬರ್ 20 ರಂದು ನಡೆಯಲಿದೆ. ಎ ಗುಂಪಿನಲ್ಲಿ ಆಸ್ಟ್ರೇಲಿಯಾ, ಭಾರತ, ನ್ಯೂಜಿಲೆಂಡ್, ಪಾಕಿಸ್ತಾನ ಮತ್ತು ಶ್ರೀಲಂಕಾ ತಂಡಗಳಿವೆ. ಬಿ ಗುಂಪಿನಲ್ಲಿ ಬಾಂಗ್ಲಾದೇಶ, ಇಂಗ್ಲೆಂಡ್, ಸ್ಕಾಟ್ಲೆಂಡ್, ದಕ್ಷಿಣ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ತಂಡಗಳಿವೆ.