

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ ಕೆರಳಿಸಿದ್ದ ಹೊಸ ಮುಖ್ಯಮಂತ್ರಿ ವಿಚಾರಕ್ಕೆ ಇದೀಗ ತೆರೆ ಬಿದ್ದಿದೆ. ಕೌತುಕಮಯ ಬೆಳವಣಿಗೆಯಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಆಯ್ಕೆ ಆಗಿದ್ದಾರೆ. ಇವರು ರಾಜ್ಯದ 20ನೇ ಮುಖ್ಯಮಂತ್ರಿ ಆಗಿ ಪದಗ್ರಹಣ ಮಾಡಲಿದ್ದಾರೆ.
ನಿನ್ನೆಯಷ್ಟೇ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ನೂತನ ಮುಖ್ಯಮಂತ್ರಿ ವಿಚಾರವಾಗಿ ಹಲವರು ಹೆಸರುಗಳು ಕೇಳಿಬಂದಿದ್ದವು. ಅಲ್ಲದೆ ಕ್ಷಣಕ್ಷಣಕ್ಕೂಕುತೂಹಲ ಮೂಡಿಸುವಂಥ ಬೆಳವಣಿಗೆಗಳು ನಡೆದಿದ್ದು, ಕರ್ನಾಟಕದ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬುದು ದೊಡ್ಡ ಕೌತುಕ ಮೂಡಿಸಿತ್ತು.
ಕುಮಾರಕೃಪಾ ಗೆಸ್ಟ್ಹೌಸ್ನಲ್ಲಿ ಬಿಜೆಪಿ ರಾಜ್ಯ ಪ್ರಭಾರಿ ಅರುಣ್ ಕುಮಾರ್, ವೀಕ್ಷಕರ ಧರ್ಮೇಂದ್ರ ಪ್ರಧಾನ್, ಕಿಶನ್ ರೆಡ್ಡಿ ಆಗಮನದ ಬಳಿಕ ಮತ್ತಷ್ಟು ಕುತೂಹಲಕಾರಿ ಬೆಳವಣಿಗೆಗಳು ನಡೆದವು. ಅಂತಿಮವಾಗಿ ರಾಜಧಾನಿ ಬೆಂಗಳೂರಿನ ಖಾಸಗಿ ಹೋಟೆಲೊಂದರಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಅವರು ನೂತನ ಮುಖ್ಯಮಂತ್ರಿ ಆಗಿ ಆಯ್ಕೆಯಾದರು.