

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕ್ಷಣದಿಂದ ಅಸಹನೆ ಬೇಗುದಿ ಹೆಚ್ಚಿದೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಹನೆಯ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ್ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.
ನಗರದಲ್ಲಿ ಈ ಬಗ್ಗೆ ಮಾತನಾಡಿದ ಸಂಸದ ಬಸವರಾಜ್ ಬೊಮ್ಮಾಯಿ (Basavaraj Bommai), ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಅಭದ್ರತೆ. ಒಳಬೇಗುದಿ ಆರಂಭದಿಂದಲೂ ಇದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಹನೆಯ ಕಟ್ಟೆ ಯಾವಾಗ ಒಡೆಯುತ್ತದೆ ಎನ್ನುವ ಪ್ರಶ್ನೆ ನಿರ್ಮಾಣವಾಗಿದ್ದು, ಕಾಲ ಸನ್ನಿಹಿತವಾಗಿದೆ. ಇದು ನಿರೀಕ್ಷಿತ ಬೆಳವಣಿಗೆಯಾಗಿದ್ದು, ಡಿಕೆ ಶಿವಕುಮಾರ್ ಸಹನೆ, ಅವರು ತಮ್ಮ ವ್ಯಕ್ತಿತ್ವಕ್ಕೆ ವಿರುದ್ಧವಾಗಿ ಬಹಳ ಸಹನೆ ಪ್ರದರ್ಶನ ಮಾಡುತ್ತಿದ್ದಾರೆ. ಡಿಕೆ ಶಿವಕುಮಾರ್ ಅವರ ಸಹನೆಯ ಕಟ್ಟೆ ಯಾವಾಗ ಒಡೆಯುತ್ತದೆ ಎಂಬುದು ಬಹಳ ಮುಖ್ಯವಾಗುತ್ತದೆ. ಅದರ ಪ್ರಕ್ರಿಯೆ ಆರಂಭವಾಗಿದ್ದು, ಕಾಲ ಯಾವಾಗ ಬರುತ್ತದೆ ಎಂದು ನೋಡಬೇಕಾಗಿದೆ.
60% ಕಮಿಷನ್ ಆರೋಪಕ್ಕೆ ಪ್ರತಿಕ್ರಿಯಿಸಿ, ಈ ಸರ್ಕಾರ ಬಂದ ಮೇಲೆ ಎಲ್ಲದರಲ್ಲಿ ಕಮಿಷನ್ ಹಾಗೂ ಭ್ರಷ್ಟಾಚಾರ ನಡೆಸುತ್ತಿದೆ. ಭ್ರಷ್ಟಾಚಾರ ತುಂಬಿ ಹೋಗಿದೆ. ಇದರಿಂದ ಜನ ಹೈರಾಣಾಗಿದ್ದಾರೆ. ಅಬಕಾರಿ ಸೇರಿದಂತೆ ಎಲ್ಲಾ ಇಲಾಖೆಯ ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾರ್ವಜನಿಕರು ಹೈರಾಣಾಗಿದ್ದಾರೆ. ಭ್ರಷ್ಟಾಚಾರ ಪದೇ ಪದೇ ಮುನ್ನೆಲೆಗೆ ಬರುತ್ತಿದೆ. ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಒಂದು ಸೈಟ್ ತೆಗೆದುಕೊಳ್ಳಲಾಗದ ವಾತಾವರಣವನ್ನು ಸರ್ಕಾರ ನಿರ್ಮಾಣ ಮಾಡಿದೆ.
ಎಸ್‌ಸಿ, ಎಸ್ಟಿ ಬೋರ್‌ವೆಲ್‌ಗಳಿಗೂ ಕಮಿಷನ್ ಪಡೆಯುತ್ತಿದ್ದಾರೆ. ಭ್ರಷ್ಟಾಚಾರ ಪದೇ ಪದೇ ಮುನ್ನೆಲೆಗೆ ಬರುತ್ತಿದೆ. ಇದನ್ನು ಸಿಎಂ ನಿರಾಕರಿಸಿರಬಹುದು, ಅವರಿಗೆ ಹಿಡಿತ ಕೈತಪ್ಪಿರಬಹುದು, ಅವರೇ ಭಾಗಿಯಾಗಿರಬಹುದು ಅಥವಾ ಅದರ ಬಗ್ಗೆ ಮಾತನಾಡಿದರೆ ಅಧಿಕಾರಕ್ಕೆ ಧಕ್ಕೆ ಬರುತ್ತದೆ ಎನ್ನುವ ಭಾವನೆ ಮೂಡಿದೆ. ಸರ್ಕಾರದಲ್ಲಿ ಒಂದೊಂದು ಇಲಾಖೆಯಲ್ಲಿ ಒಂದೊಂದು ರೀತಿಯ ಪರ್ಸೆಂಟ್ ಕಮಿಷನ್ ಇದೆ. ಇಷ್ಟೇ ಇದೆ ಅಂತ ಹೇಳಲು ಆಗುವುದಿಲ್ಲ ಎಂದು ಕಿಡಿಕಾರಿದ್ದಾರೆ.
ಕಾಂಗ್ರೆಸ್ ಡಿನ್ನರ್ ಮೀಟಿಂಗ್ ವಿಚಾರವಾಗಿ ಪ್ರತಿಕ್ರಿಯಿಸಿ, ಇದು ಅವರ ಆಂತರಿಕ ವಿಚಾರ. ಈ ಬಗ್ಗೆ ಹೆಚ್ಚು ವಿಶ್ಲೇಷಣೆ ಮಾಡುವುದಿಲ್ಲ. ಆದರೆ, ಆಡಳಿತ ಯಂತ್ರ ಕುಸಿದಿದೆ. ಇದರಿಂದ ಸಾಮಾನ್ಯ ಜನರು ತೊಂದರೆ ಅನುಭವಿಸುವಂತಾಗಿದೆ. ತಾಯಂದಿರು ಸಾಯುತ್ತಿದ್ದಾರೆ. ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಸರಿಯಾಗಿ ದೊರೆಯುತ್ತಿಲ್ಲ. ಅಂಗನವಾಡಿ ಕಾರ್ಯಕರ್ತರು ಸರಿಯಾಗಿ ಗೌರವಧನ ಪಡೆಯುತ್ತಿಲ್ಲ. ನಾವು ಪ್ರತಿಪಕ್ಷವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತೇವೆ.
ರಾಜ್ಯ ಬಿಜೆಪಿಯಲ್ಲಿನ ಗೊಂದಲಗಳ ಬಗ್ಗೆ ಪಕ್ಷದ ಹೈಕಮಾಂಡ್ ಗಮನ ಹರಿಸಿದೆ. ಈ ತಿಂಗಳಲ್ಲಿ ಎಲ್ಲವೂ ಸರಿ ಹೋಗಲಿದೆ. ಒಳ್ಳೆಯ ರೀತಿಯಲ್ಲಿ ಎಲ್ಲವೂ ಬಗೆಹರಿಯುವ ವಾತಾವರಣವನ್ನು ಹೈಕಮಾಂಡ್ ನಿರ್ಮಾಣ ಮಾಡಲಿದೆ ಎಂದು ಸಂಸದ ಬಸವರಾಜ್ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.