More

    ಗಣೇಶ ಚತುರ್ಥಿ 2023; ಏಕಗವಾಕ್ಷಿ ಪದ್ದತಿಯಲ್ಲಿ ಅನುಮತಿಗೆ ಅವಕಾಶ: ತುಷಾರ್​ ಗಿರಿನಾಥ್​

    ಬೆಂಗಳೂರು: ನಗರದಲ್ಲಿ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗೆ ಅನುವಾಗುವಂತೆ ಪಾಲಿಕೆಯ 63 ಉಪ ವಿಭಾಗ ಕಛೇರಿಗಳಲ್ಲಿ ಬಿಬಿಎಂಪಿ, ಪೊಲೀಸ್, ಬೆಸ್ಕಾಂ ಮತ್ತು ಅಗ್ನಿಶಾಮಕ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಿ ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿನಾಥ್​ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ಪ್ರತಿ ವರ್ಷದಂತೆ ಪಾಲಿಕೆ ವತಿಯಿಂದ ಗಣೇಶ ವಿಸರ್ಜನೆಗೆ ನಗರದ ಕೇಂದ್ರ ಭಾಗದಲ್ಲಿರುವ ಸ್ಯಾಂಕಿ ಕೆರೆ, ಹಲಸೂರು ಕೆರೆ, ಯಡಿಯೂರು ಕೆರೆ, ಹೆಬ್ಬಾಳ ಕೆರೆ ಹಾಗೂ ಇತರೆ ಪ್ರಮುಖ ಕೆರೆ/ಕಲ್ಯಾಣಿಗಳಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ಮುಂಜಾಗ್ರತಾ ಕ್ರಮ

    ಕೆಲ ಪ್ರದೇಶಗಳಲ್ಲಿ ಕೆರೆಗಳು ವಸತಿ ಪ್ರದೇಶದಿಂದ ದೂರವಿರುವುದರಿಂದ ಸಾರ್ವಜನಿಕರು ಚಿಕ್ಕ-ಚಿಕ್ಕ ಮೂರ್ತಿಗಳನ್ನು ವಿಸರ್ಜನೆ ಮಾಡುವ ಸಲುವಾಗಿ ಪ್ರತಿ ವಲಯಗಳ ಪ್ರಮುಖ ಸ್ಥಳ ಮತ್ತು ಅವಶ್ಯಕತೆ ಇರುವ ಕಡೆ ವಾರ್ಡ್​​ವಾರು ತಾತ್ಕಾಲಿಕವಾಗಿ ಸಂಚಾರಿ ವಿಸರ್ಜನಾ ಘಟಕ(ಮೊಬೈಲ್ ಟ್ಯಾಂಕ್)ಗಳನ್ನು ಪ್ರತಿ ವರ್ಷದಂತೆ ವ್ಯವಸ್ಥೆ ಮಾಡಬೇಕು.

    ಗಣೇಶ ಮೂರ್ತಿಗಳ ವಿಸರ್ಜನೆಗೆ ಗುರುತಿಸಿರುವ ಕೆರೆಗಳ ಸುತ್ತಮುತ್ತ ಹಾಗೂ ಕಲ್ಯಾಣಿಗಳ ಆವರಣದಲ್ಲಿ ವ್ಯವಸ್ಥಿತವಾಗಿ ಬ್ಯಾರಿಕೇಡಿಂಗ್‌ ಅಳವಡಿಸಬೇಕು. ಎಲ್ಲಾ ವಿಸರ್ಜನಾ ಕೇಂದ್ರಗಳಲ್ಲೂ ಪಾಳಿಯನುಸಾರ ನುರಿತ ಈಜುಗಾರರನ್ನು ಮತ್ತು ಅಗತ್ಯ ಸಿಬ್ಬಂದಿಯನ್ನು ನೇಮಿಸಲು ಕ್ರಮ ಕೈಗೊಳ್ಳಬೇಕು. ಜೊತೆಗೆ ಆಯಾ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮ ವಹಿಸುವ ಸಲುವಾಗಿ ಸಿಸಿಟಿವಿ, ವಿದ್ಯುತ್ ದ್ವೀಪಗಳ ಸೌಲಭ್ಯಗಳನ್ನು ತಪ್ಪದೇ ಅಳವಡಿಸಬೇಕು.

    BBMP Meeting

    ವಿಸರ್ಜನಾ ಕೇಂದ್ರಗಳಲ್ಲಿ ಸಂಗ್ರಹವಾಗುವ ತ್ಯಾಜ್ಯಗಳನ್ನು(ಪೂಜಾ ಸಾಮಗ್ರಿಗಳಾದ ಹೂವು, ಬಾಳೆಯ ಕಂದು, ತಳಿರು ತೋರಣ, ಮತ್ತಿತರ ತ್ಯಾಜ್ಯ ವಸ್ತುಗಳನ್ನು) ಸಂಗ್ರಹಿಸಿ ನಿಗದಿತ ಕಂಟೈನರ್‌ಗಳ ಮೂಲಕ ಅಗಿದ್ದಾಂಗೆ ತೆರವುಗೊಳಿಸಲು ಅಗತ್ಯ ಸ್ವಚ್ಛತಾ ಸಿಬ್ಬಂದಿ ಹಾಗೂ ಸಾಗಣೆ ವಾಹನಗಳನ್ನು ಸಜ್ಜುಗೊಳಿಸಬೇಕು. ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಅಗತ್ಯವಿದ್ದಲ್ಲಿ ದೋಣಿಗಳ ವ್ಯವಸ್ಥೆ, ನೀರೆತ್ತುವ ಪಂಪ್‌ಗಳ ವ್ಯವಸ್ಥೆ, ಕ್ರೇನ್‌ಗಳ ವ್ಯವಸ್ಥೆಗಳನ್ನು ಕೂಡ ಸಿದ್ದಪಡಿಸಿರಬೇಕು. ಜೊತೆಗೆ ಪೋಲಿಸ್ ಬಂದೋಬಸ್ತ್ ಮೂಲಕ ಸೂಕ್ತ ಏರ್ಪಾಡುಗಳನ್ನು ಮಾಡಿಕೊಳ್ಳಬೇಕು‌‌. ವಿಸರ್ಜನಾ ಮೆರವಣಿಗೆಯ ವೇಳೆ ಪಟಾಕಿ ಸಿಡಿಸುವುದು ಹಾಗೂ ನಾಗರಿಕರಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ಇದನ್ನೂ ಓದಿ: ಬಹುಮಹಡಿ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ; 73 ಮಂದಿ ಮೃತ್ಯು

    ಸೂಕ್ತ ಕ್ರಮಕ್ಕೆ ಸೂಚನೆ

    ಪಾಲಿಕೆ ವ್ಯಾಪ್ತಿಯಲ್ಲಿ ರಾಸಾಯನಿಕ ಬಣ್ಣಗಳು, ಥರ್ಮಕೊಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ಗಣೇಶ ಮೂರ್ತಿ ತಯಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಿಲಾಗಿದ್ದು, ಸದರಿ ವಸ್ತುಗಳನ್ನು ಬಳಸಿ ತಯಾರಿಸುವ, ಮಾರಾಟ ಮಾಡುವ ಪ್ರದೇಶಗಳನ್ನು ರಾಸಾಯನಿಕ ಬಣ್ಣಗಳು, ಥರ್ಮಕೊಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ವಸ್ತುಗಳನ್ನು ಬಳಸಿ ಗಣೇಶ ಮೂರ್ತಿ ತಯಾರಿಕೆಯನ್ನು ಮಾಡುತ್ತಿರುವವರಿಗೆ ದಂಡ ವಿಧಿಸುವ ಜೊತೆಗೆ ಸೂಕ್ತ ಕ್ರಮವಹಿಸಲು ಸೂಚಿಸಲಾಗಿದೆ.

    ಗಣೇಶ ಮೂರ್ತಿಯ ಪ್ರತಿಷ್ಠಾಪನೆ, ವಿಸರ್ಜನೆ, ಸ್ವಚ್ಛತೆ ಕಾಪಾಡುವ ಹಾಗೂ ಇನ್ನಿತರೆ ಸೂಚನೆಗಳನ್ನು ಕಡ್ಡಾಯವಾಗಿ ಅನುಮತಿಯ ಆದೇಶ ಪತ್ರದಲ್ಲಿ ವಿವರಣೆ ಸಮೇತ ಆದೇಶ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಫೆಕ್ಸ್/ಬ್ಯಾನರ್ ಅಳವಡಿಸುವುದು ಹಾಗೂ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದ್ದು ಸಾರ್ವಜನಿಕರು ಸಹ ಸಹಕರಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್​ ಗಿರಿನಾಥ್​ ಕೋರಿದ್ದಾರೆ.

    ಪರಿಸರ ಸ್ನೇಹಿ ಮೂರ್ತಿಗಳನ್ನಿಟ್ಟು ಪೂಜಿಸಿ

    ಪಾಲಿಕೆ ವ್ಯಾಪ್ತಿಯಲ್ಲಿರುವ ಕೆರೆಗಳು ಕಲುಷಿತಗೊಳ್ಳದಂತೆ ತಡೆಗಟ್ಟಲು ಗಣೇಶ ವಿಸರ್ಜನೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಆದ್ದರಿಂದ ಸಾರ್ವಜನಿಕರಿಗೆ ನಿಗದಿಪಡಿಸಿದ ಸ್ಥಳಗಳಲ್ಲೇ ಗಣೇಶ ಮೂರ್ತಿಗಳನ್ನು ವಿಸರ್ಜಿಸಬೇಕೆಂದು ಹಾಗೂ ಬಣ್ಣದ/ಪಿಒಪಿ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸುವುದನ್ನು ನಿಲ್ಲಿಸಿ ಪರಿಸರ ಸ್ನೇಹಿ ಮೂರ್ತಿಗಳನ್ನಿಟ್ಟು ಪೂಜಿಸಬೇಕೆಂದು ಸಾರ್ವಜನಿಕರಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್​ ಗಿರಿನಾಥ್​​ ಮನವಿ ಮಾಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts