More

    ರಾಜಧಾನಿಯಲ್ಲಿ ಪ್ರವಾಹ ತಡೆಗೆ ಬಿಬಿಎಂಪಿ ಸನ್ನದ್ಧ: ತುಷಾರ್​ ಗಿರಿನಾಥ್​

    ಬೆಂಗಳೂರು: ರಾಜಧಾನಿಯಲ್ಲಿ ಬರುವ ಮಳೆಗಾಲದಲ್ಲಿ ಉಂಟಾಗುವ ಪ್ರವಾಹ ಎದುರಿಸಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚಿಸಿದ್ದಾರೆ.

    ಪಾಲಿಕೆ ಕೇಂದ್ರ ಕಚೇರಿಯಲ್ಲಿ ಬುಧವಾರ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ನಗರದಲ್ಲಿ ಜಲಾವೃತವಾಗುವ ಸೂಕ್ಷ್ಮ ಪ್ರದೇಶಗಳಲ್ಲಿ ಪ್ರವಾಹ ಉಂಟಾಗದಂತೆ ಕೂಡಲೆ ಅಗತ್ಯ ಕ್ರಮ ಕೈಗೊಳ್ಳಬೇಕು. ಬಿಬಿಎಂಪಿ ವ್ಯಾಪ್ತಿಯಲ್ಲಿ 512 ಕಡೆಗಳಲ್ಲಿ ನಡೆಯುತ್ತಿರುವ ರಾಜಕಾಲುವೆ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಕಚ್ಚಾ ಡ್ರೈನ್‌ಗಳಿಗೆ ಮೊದಲ ಆದ್ಯತೆ ಮೇರೆಗೆ ಹೂಳು ತೆಗೆಯಬೇಕು. ಪ್ರಾಥಮಿಕ ಮತ್ತು ದ್ವಿತೀಯ ರಾಜಕಾಲುವೆ, ರಸ್ತೆ ಬದಿಯ ಶೋಲ್ಡರ್ ಡ್ರೈನ್‌ಗಳಲ್ಲಿ ವಾರ್ಷಿಕ ನಿರ್ವಹಣೆಯ ಗುತ್ತಿಗೆದಾರರ ಮೂಲಕ ಹೂಳನ್ನು ತೆರವುಗೊಳಿಸಬೇಕೆಂದು ಹೇಳಿದ್ಧಾರೆ.

    ನೀರು ನಿಲ್ಲುವ ರಸ್ತೆಗಳನ್ನು ಗುರುತಿಸಿ ಸರಾಗವಾಗಿ ನೀರು ಹರಿಯಲು ವ್ಯವಸ್ಥೆ ಮಾಡಬೇಕು. ರಸ್ತೆ ಬದಿಯ ಶೋಲ್ಡರ್ ಡ್ರೈನ್‌ಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು. ರಸ್ತೆ ಮೇಲೆ ಬಿದ್ದಂತಹ ನೀರು ಸರಾಗವಾಗಿ ಕಾಲುವೆಗಳಿಗೆ ಹರಿದುಹೋಗುವಂತೆ ವ್ಯವಸ್ಥೆ ಮಾಡಬೇಕು. ಮಳೆಗಾಲಕ್ಕೆ ಸಂಬಂಧಿಸಿದಂತೆ ಆಯಾ ವಲಯ ವ್ಯಾಪ್ತಿಯಲ್ಲಿ ಇರುವ ನಿಯಂತ್ರಣ ಕೊಠಡಿಗಳು ದಿನದ 24 ಗಂಟೆ ಕಾಲ ಕಾರ್ಯನಿರ್ವಹಿಸಬೇಕು. ಮಳೆಗಾಲದ ವೇಳೆ ಅಗತ್ಯ ಇರುವ ಗ್ಯಾಂಗ್ಸ್‌ಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು. ಪಾಲಿಕೆ, ಜಲಮಂಡಳಿ ಹಾಗೂ ಬೆಸ್ಕಾಂ ಅಧಿಕಾರಿಗಳೂ ಪರಸ್ಪರ ಸಮನ್ವಯತೆ ಮೂಲಕ ಕಾರ್ಯನಿರ್ವಹಿಸಬೇಕು. ಇದರ ಬಗ್ಗೆ ಯೋಜನಾ ವಿಭಾಗದ ವಿಶೇಷ ಆಯುಕ್ತರು ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

    ರಾಜಧಾನಿಯಲ್ಲಿ ಪ್ರವಾಹ ತಡೆಗೆ ಬಿಬಿಎಂಪಿ ಸನ್ನದ್ಧ: ತುಷಾರ್​ ಗಿರಿನಾಥ್​

    ಇದನ್ನೂ ಓದಿ: ಚುನಾವಣಾ ಅಕ್ರಮದ ಬಗ್ಗೆ ದೂರು ದಾಖಲಿಸಲು ಸಹಾಯವಾಣಿ ಆರಂಭ; ಇಲ್ಲಿದೆ ಸಂಪೂರ್ಣ ಮಾಹಿತಿ

    ಸೂಕ್ಷ್ಮ ಪ್ರದೇಶಗಳ ಮೇಲೆ ನಿಗಾ

    ಮಳೆಗಾಲದ ಸಂದರ್ಭದಲ್ಲಿ ಜಲಾವೃತವಾಗುವ ಸೂಕ್ಷ್ಮ ಪ್ರದೇಶಗಳ ಮೇಲೆ ಹೆಚ್ಚು ಗಮನ ನೀಡಲಾಗುತ್ತಿದೆ. ಈ ಸಂಬಂಧ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಜತೆಗೆ ಸೂಕ್ಷ್ಮ ಪ್ರದೇಶಗಳ ಮೇಲೆ ಗಮನ ಹರಿಸುವ ವಿಚಾರ ಬಗ್ಗೆ ಒಡಂಬಡಿಕೆ ಮಾಡಿಕೊಳ್ಳಲಾಗುತ್ತಿದೆ. ಸಿಲಿಕಾನ್ ಸಿಟಿಯಲ್ಲಿ 200 ಸೂಕ್ಷ್ಮ ಪ್ರದೇಶಗಳ ಪಟ್ಟಿಯನ್ನು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರಕ್ಕೆ ನೀಡಲಾಗಿದೆ. ಈ ಪ್ರದೇಶಗಳಲ್ಲಿ ಮಳೆ ಪ್ರಮಾಣ ಎಷ್ಟಿದೆ ಎಂಬುದರ ಮಾಹಿತಿ ಮುಂಚಿತವಾಗಿ ಲಭ್ಯವಾಗಲಿದೆ. ಈ ಪೈಕಿ ಸೂಕ್ಷ್ಮ ಪ್ರದೇಶಗಳಿಗೆ ಸಂಬಂಧ ಅಧಿಕಾರಿಗಳ ಜತೆ ಪರಿಶೀಲನಾ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಆಯುಕ್ತರು ವಿವರಿಸಿದರು. ರಸ್ತೆ ಬದಿ, ಪಾದಚಾರಿ ಮಾರ್ಗಗಳಲ್ಲಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಆಯಾ ವಾರ್ಡ್‌ಗಳಿಗೆ ಶಿಲ್ಟ್ ಆ್ಯಂಡ್ ಟ್ರ್ಯಾಕ್ಟರ್‌ಗಳನ್ನು ನಿಯೋಜನೆ ಮಾಡಲಾಗಿತ್ತು.ಈಗ ಟ್ರ್ಯಾಕ್ಟರ್ ಬದಲು ಟ್ರಕ್ ಬಳಸಿಕೊಳ್ಳಲು ಕ್ರಮ ವಹಿಸಲಾಗಿದೆ. ವಿಧಾನಸಭೆ ಚುನಾವಾಣಾ ನೀತಿ ಸಂಹಿತೆ ಮುಗಿದ ಬಳಿಕ ಹೊಸ ಟೆಂಡರ್ ಕರೆದು ಎಲ್ಲ ವಾರ್ಡ್‌ಗಳಿಗೂ ಶಿಲ್ಟ್ ಆ್ಯಂಡ್ ಟ್ರಕ್‌ಗಳ ನಿಯೋಜಿಸುವುದಾಗಿ ತಿಳಿಸಿದ್ದಾರೆ.

    ಸಭೆಯಲ್ಲಿ ಕಂದಾಯ ಇಲಾಖೆಯ ವಿಪತ್ತು ನಿರ್ವಹಣಾ ಕೋಶದ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಡಾ.ಮನೋಜ್ ರಾಜನ್, ಪಾಲಿಕೆಯ ವಿಶೇಷ ಆಯುಕ್ತ ಪಿ.ಎನ್.ರವೀಂದ್ರ, ಪ್ರಧಾನ ಅಭಿಯಂತರ ಪ್ರಹ್ಲಾದ್, ಮುಖ್ಯ ಅಭಿಯಂತ ಬಸವರಾಜ್ ಕಬಾಡೆ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts