More

    ಚುನಾವಣೆಯಲ್ಲಿ ಲೋಪವಾಗದಂತೆ ಎಚ್ಚರ ವಹಿಸಿ

    ಕೆ.ಆರ್.ನಗರ: ಮುಂಬರುವ ಲೋಕಸಭಾ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಮತ್ತು ಪಾರದರ್ಶಕವಾಗಿ ನಡೆಸಲು ಯಾವುದೇ ಲೋಪವಾಗದಂತೆ ಅಧಿಕಾರಿಗಳು ತಮಗೆ ವಹಿಸಿದ ಕೆಲಸಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಎಂದು ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹಾಗೂ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

    ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಸಂಬಂಧ ಪೂರ್ವ ಸಿದ್ಧತಾ ಸಭೆಯಲ್ಲಿ ಉಭಯ ಜಿಲ್ಲಾಧಿಕಾರಿಗಳು ಮಾತನಾಡಿದರು.

    ಎಲ್ಲ ಮತಗಟ್ಟೆಗಳಿಗೆ ಭೇಟಿ ನೀಡಿ ಮೂಲಸೌಕರ್ಯಗಳನ್ನು ಪರಿಶೀಲಿಸಿ ನ್ಯೂನತೆಗಳಿದ್ದಲ್ಲಿ ಸರಿಪಡಿಸುವಂತೆ ಎಲ್ಲ ಸೆಕ್ಟರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರಲ್ಲದೆ, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆಗಳಿಗೆ ಭೇಟಿ ನೀಡಿ ಅದಕ್ಕೆ ಸಂಬಂಧಿಸಿದ ನಮೂನೆಗಳಾದ ವಿಎಂ1, ವಿಎಂ2, ವಿಎಂ3 ಭರ್ತಿ ಮಾಡುವ ಬಗ್ಗೆ ಆರಕ್ಷಕ ಇಲಾಖೆಯೊಂದಿಗೆ, ಬಿಎಲ್‌ಒಗಳೊಂದಿಗೆ ಸಮನ್ವಯ ಸಾಧಿಸಿಕೊಂಡು ಭರ್ತಿ ಮಾಡಿ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದರು.

    ಅಂತರ ಜಿಲ್ಲಾ ಗಡಿಗಳಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾದ ತಕ್ಷಣ ಅದರ ನಿಯಮಗಳಂತೆ ಚೆಕ್‌ಪೋಸ್ಟ್ ನಿರ್ಮಿಸಿ ಅಲ್ಲಿನ ಸಿಬ್ಬಂದಿಗೆ ಮೂಲ ಸೌಕರ್ಯ ಕಲ್ಪಿಸಿಕೊಟ್ಟು ನಿಯಮಿತವಾಗಿ ವಾಹನ ತಪಾಸಣೆ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು.

    ವಿವಿಧ ಇಲಾಖೆಗಳ ಸಮನ್ವಯತೆ ಸೆಕ್ಟರ್ ಆಫೀಸರ್‌ಗಳ ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ಅತಿ ಮುಖ್ಯವಾಗಿ ನಿರ್ವಹಿಸಬೇಕು. ಅಧಿಕಾರಿಗಳು ಸೆಕ್ಟರ್ ಅಧಿಕಾರಿಗಳ ಕೈಪಿಡಿ, ಇವಿಎಂ ಅಧಿಕಾರಿಗಳ ಕೈಪಿಡಿ ಹಾಗೂ ಚುನಾವಣಾ ಆಯೋಗದಿಂದ ಬರುವ ಎಲ್ಲ ಕೈಪಿಡಿ ಮತ್ತು ಸುತ್ತೋಲೆಗಳಂತೆ ಕರ್ತವ್ಯ ನಿರ್ವಹಿಸಬೇಕು ಎಂದರು.

    ಪೋಸ್ಟರ್ ಮತ್ತು ಬ್ಯಾನರ್‌ಗಳನ್ನು ಸಾರ್ವಜನಿಕ ಪ್ರದೇಶಗಳಿಂದ ನಿಗದಿತ ಅವಧಿಯಲ್ಲಿ ತೆರವುಗೊಳಿಸುವಂತೆ ಹಾಗೂ ಕಾಮಗಾರಿಗಳು ಯಾವ ಹಂತದಲ್ಲಿವೆ ಎಂಬ ಪಟ್ಟಿಯನ್ನು ತಯಾರಿಸಿ ವರದಿ ಪರಿಶೀಲಿಸಲು ಅಧಿಕಾರಿಗಳಿಗೆ ತಿಳಿಸಿದರು.
    ಸಭೆಯಲ್ಲಿ ಎಆರ್‌ಒ ಸುಪ್ರಿಯಾ ಬಣಗಾರ್, ಕೆ.ಆರ್.ನಗರ ತಹಸೀಲ್ದಾರ್ ಸಿ.ಎಸ್.ಪೂರ್ಣಿಮಾ ಮತ್ತು ಸಾಲಿಗ್ರಾಮದ ತಹಸೀಲ್ದಾರ್ ಎಚ್.ಎನ್.ನರಗುಂದ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಜಿ.ಕೆ.ಹರೀಶ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts