ಬೆಳಗಾವಿ: ಸರ್ಕಾರಿ ಶಾಲೆಗಳ ಪುನಶ್ಚೇತನಕ್ಕೆ ಆಗ್ರಹಿಸಿ ಕರವೇ ಪ್ರತಿಭಟನೆ

ಬೆಳಗಾವಿ: 2019-20ನೇ ಸಾಲಿನ ವಾರ್ಷಿಕ ಬಜೆಟ್‌ನಲ್ಲಿ ಸರ್ಕಾರಿ ಶಾಲೆಗಳ ಪುನಶ್ಚೇತನಕ್ಕೆ ಹೆಚ್ಚಿನ ಅನುದಾನ ಮೀಸಲಿಡಬೇಕು ಎಂದು ಆಗ್ರಹಿಸಿ ಬುಧವಾರ ನಗರದ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ಸರ್ಕಾರಿ ಶಾಲೆಗಳ ಕಟ್ಟಡಗಳು ಶಿಥಿಲಗೊಂಡಿರುವ ಪರಿಣಾಮ ಮಕ್ಕಳು ಶಾಲೆಯ ಹೊರ ಆವರಣದಲ್ಲಿ ಕುಳಿತು ಕಲಿಯುತ್ತಿದ್ದಾರೆ. ಕೆಲ ಶಾಲೆಗಳಲ್ಲಿ ಆಟದ ಮೈದಾನ ಇಲ್ಲ. ಸೌಲಭ್ಯಗಳಿಲ್ಲದೆ ಸಮಸ್ಯೆ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಕ್ಕಳು ಸರ್ಕಾರಿ ಶಾಲೆಗಳಿಗೆ ಬಾರದೆ ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿದ್ದಾರೆ ಎಂದು ಕಾರ್ಯಕರ್ತರು ದೂರಿದರು.

ರಾಜ್ಯ ಸರ್ಕಾರವು ವಾರ್ಷಿಕ ಬಜೆಟ್‌ನಲ್ಲಿ ಸರ್ಕಾರಿ ಶಾಲೆಗಳ ಉತ್ತೇಜನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಜತೆಗೆ ಹೆಚ್ಚುವರಿ ಅನುದಾನ ಮೀಸಲಿಟ್ಟು ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು. ಗಡಿಭಾಗದ ಪ್ರದೇಶಗಳಲ್ಲಿ ಹೊಸ ಸರ್ಕಾರಿ ಶಾಲೆಗಳನ್ನು ಆರಂಭಿಸಿ ಬಡ ಮಕ್ಕಳಿಗೆ ಕಲಿಯಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದರು.

ಬೆಳಗಾವಿ ಜಿಲ್ಲಾ ಆಸ್ಪತ್ರೆ ಅಭಿವೃದ್ಧಿ ಪಡಿಸಲು ಹಣ ಮೀಸಲಿಡಬೇಕು. ಸುಸಜ್ಜಿತ ಮೆಟರ್ನಿಟಿ ಆಸ್ಪತ್ರೆ, ಮಕ್ಕಳ ಆಸ್ಪತ್ರೆ ಜತೆಗೆ ಏಮ್ಸ್ ದರ್ಜೆಯ ಆಸ್ಪತ್ರೆಗೆ ಹೆಚ್ಚು ಹಣ ಮೀಸಲಿಡಬೇಕು.ಬೆಳಗಾವಿ ಜಿಲ್ಲೆಗೆ ವಿಶೇಷ ಅನುದಾನ ಮೀಸಲಿಡಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದರು.

ಜಿಲ್ಲಾಧ್ಯಕ್ಷ ವಾಜಿದ ಹಿರೇಕುಡಿ, ಆನಂದ ಬಡಿಗೇರ, ನಾಗೇಶ ಕೊಪ್ಪದ, ಪ್ರಭು ಕಾಕತಿಕರ,ಅಕ್ಬರ ಸಡೇಕರ, ರವಿ ಹಿರೇಮಠ ಮತ್ತಿತರರು ಇದ್ದರು.