ಬಸ್ ಪಾಸ್ ಉಚಿತ ವಿತರಣೆಗೆ ವಿದ್ಯಾರ್ಥಿನಿಯರ ಪ್ರತಿಭಟನೆ

ಬಳ್ಳಾರಿ: ಬಸ್ ಪಾಸ್ ಉಚಿತ ವಿತರಣೆ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಎಬಿವಿಪಿ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿನಿಯರು ಮಂಗಳವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ರಾಯಲ್ ಸರ್ಕಲ್‌ನಿಂದ ಡಿಸಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು. 2018-19ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿದ ಬಸ್ ಪಾಸ್ ವಿತರಣೆ ಯೋಜನೆ ನನೆಗುದಿಗೆ ಬಿದ್ದಿದೆ. ಖಾಸಗಿ ಕಾಲೇಜುಗಳಲ್ಲಿ ಡೊನೇಷನ್ ಹಾವಳಿ ಮಿತಿ ಮೀರಿದೆ. ಶಿಕ್ಷಣ ಮಾರಾಟದ ವಸ್ತುವಾಗಿದೆ. ಇದರಿಂದ ಬಡ ಕುಟುಂಬಗಳ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಹೀಗಾಗಿ ಎಲ್ಲ ಸಮುದಾಯದ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಉಚಿತ ವಿತರಿಸಬೇಕು. ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮುಂಭಾಗದ ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧಿಸಿ ಪಾದಚಾರಿ ಮಾರ್ಗ ನಿರ್ಮಿಸಬೇಕು. ಕಾಲೇಜಿನ ಕಾಂಪೌಂಡಿನ ಮುಂಭಾಗದಲ್ಲಿರುವ ಕಸದ ಗುಂಡಿ ತೆರವುಗೊಳಿಸಬೇಕು ಎಂದು ಒತ್ತಾಯಿಸಿದರು.

ಎಬಿವಿಪಿ ನಗರ ಕಾರ್ಯದರ್ಶಿ ಮಂಜುನಾಥ, ರಾಜ್ಯ ಕಾರ್ಯಕಾರಿಣಿ ಸದಸ್ಯ ಕೌಶಿಕ್, ವಿವಿಧ ಕಾಲೇಜು ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *