More

    ಭ್ರಷ್ಟ ಬಿಜೆಪಿ ಸರ್ಕಾರ ತೊಲಗಲಿ; ರಾಜ್ಯ ಉಸ್ತವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅಭಿಮತ; ಬಳ್ಳಾರಿಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಕಾರ್ಯಕ್ರಮ ಉದ್ಘಾಟನೆ

    ಬಳ್ಳಾರಿ: ರಾಜ್ಯದಲ್ಲಿ 40% ಸರ್ಕಾರ ಇದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದ ಭ್ರಷ್ಟಾಚಾರ ಕುರಿತು ದೇಶದಲ್ಲಿ ಯಾರಿಗೆ ಕೇಳಿದರೂ ಹೇಳುತ್ತಾರೆ. ಅವರು ‘ಪೇ ಸಿಎಂ’ ಎಂದು ಖ್ಯಾತಿ ಪಡೆದಿದ್ದಾರೆ. ಜನ ಸಾಮಾನ್ಯರು ಬಿಜೆಪಿ ಸರ್ಕಾರದ ಭ್ರಷ್ಟಾಚಾರಕ್ಕೆ ಬೇಸತ್ತಿದ್ದಾರೆ. ಬಿಜೆಪಿ ನಾಯಕರಿಗೆ ಮತ ಕೇಳುವ ಹಕ್ಕಿಲ್ಲ ಎಂದು ಕಾಂಗ್ರೆಸ್‌ನ ರಾಜ್ಯ ಉಸ್ತವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದರು.
    ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ಘಟಕದಿಂದ ಶನಿವಾರ ಹಮ್ಮಿಕೊಂಡಿದ್ದ ಕಾಂಗ್ರೆಸ್ ಗ್ಯಾರಂಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ರಾಜ್ಯದಲ್ಲಿ ಹೊಸ ಇತಿಹಾಸ ನಿರ್ಮಾಣಕ್ಕೆ ಪ್ರಯತ್ನಿಸಲಾಗುತ್ತಿದೆ. ಹಾಗಾಗಿ ಕಾಂಗ್ರೆಸ್‌ನಿಂದ ಗ್ಯಾರಂಟಿ ಕಾರ್ಯಕ್ರಮವನ್ನು ಜನ ಸಾಮಾನ್ಯರಿಗೆ ತಲುಪಿಸುವ ಕೆಲಸ ಮಾಡಲಾಗುತ್ತಿದೆ. ರಾಜ್ಯದಲ್ಲಿ ಜನಸಾಮಾನ್ಯರನ್ನು ಬಲಿ ಪಡೆಯುವುದಕ್ಕಿಂತ ಬಿಜೆಪಿಗೆ ಎಷ್ಟು ಹಣ ಬೇಕು ಎಂದು ಮೋದಿ, ಅಮಿತ್ ಷಾ, ಬೊಮ್ಮಾಯಿ, ಯಡಿಯೂರಪ್ಪ ತಿಳಿಸಬೇಕು. ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಎಂಟು ಬಾರಿ ಆಗಮಿಸಿದ್ದಾರೆ. ‘ನಾನು ತಿನ್ನಲ್ಲ. ಯಾರಿಗೂ ತಿನ್ನಲೂ ಬೀಡಲ್ಲ’ ಎಂದು ಹೇಳಿಕೆ ನೀಡುತ್ತಾರೆ. ಆದರೆ ರಾಜ್ಯದಲ್ಲಿ ಬಿಜೆಪಿ ನಾಯಕರು ಹೊಟ್ಟೆತುಂಬಾ ತಿನ್ನುತ್ತಿದ್ದಾರೆ. ಈ ಬಗ್ಗೆ ಎಲ್ಲಿಯೂ ಒಂದು ಮಾತನಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಸಿಎಂ ಆಗಲು ಸಾವಿರ ಕೋಟಿ ರೂ. ನೀಡಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳುತ್ತಾರೆ. ಪೊಲೀಸ್ ಇಲಾಖೆಯಲ್ಲಿ ಭ್ರಷ್ಟಾಚಾರ, ಪಿಎಸ್‌ಐ ಹಗರಣದಲ್ಲಿ ಒಂದು ಹುದ್ದೆಗೆ 80 ಲಕ್ಷ ರೂ. ಲಂಚ, ಉಪನ್ಯಾಸಕ, ಇಂಜಿನಿಯರ್ ಹುದ್ದೆಗಳಿಗೆ ಲಂಚ, ಕೆಎಂಎಫ್‌ನಲ್ಲಿ ಭ್ರಷ್ಟಾಚಾರ ಹೀಗೆ ಎಲ್ಲ ಇಲಾಖೆಯಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ ಎಂದರು.

    ಶಾಸಕರೊಬ್ಬರ ಮಗನ ಮನೆಯಲ್ಲಿ ಕೋಟ್ಯಂತರ ರೂ. ಹಣ ಸಿಕ್ಕಿದೆ. ಈ ಬಗ್ಗೆ ಬಿಜೆಪಿ ನಾಯಕರು ಚಕಾರ ಎತ್ತುತ್ತಿಲ್ಲ. ರಾಜ್ಯವನ್ನೇ ಮಾರಾಟ ಮಾಡಲು ಹೊರಟಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
    ಕಾಂಗ್ರೆಸ್ ನಾಯಕರು ದೇಶಕ್ಕಾಗಿ ಜೀವವನ್ನೇ ತ್ಯಾಗ ಮಾಡಿದ್ದಾರೆ. ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಿ ಎಂದು ಹೇಳಿಕೆ ನೀಡಿರುವುದು ಖಂಡನೀಯ. ಎಷ್ಟುಜನರನ್ನು ಹೊಡೆದು ಹಾಕುತ್ತೀರಿ ಬನ್ನಿ ನೋಡೋಣ ಎಂದು ಸವಾಲು ಹಾಕಿದರು.

    ದೇಶದಲ್ಲಿ ಬೆಲೆ ಏರಿಕೆ ದಿನೇ ದಿನೆ ಹೆಚ್ಚುತ್ತಿದೆ. ಅಡುಗೆಗೆ ಬಳಸುವ ಸಿಲಿಂಡರ್ ಬೆಲೆ ಮತ್ತೆ 50 ರೂ. ಹಾಗೂ ವಾಣಿಜ್ಯ ಬಳಕೆಯ ಸಿಲಿಂಡರ್‌ಗೆ 350 ರೂ. ಹೆಚ್ಚಿಸಲಾಗಿದೆ. ಇದರಿಂದ ಜನರಿಗೆ ಹೊರೆ ಆಗಿದೆ. ಪಕೋಡ ಮಾರಾಟ ಮಾಡುವುದು ಕೂಡ ಕಷ್ಟವಾಗಿದೆ ಎಂದರು.

    ರಾಜ್ಯದ ಬಜೆಟ್ 3 ಲಕ್ಷ ಕೋಟಿ ರೂ. ಅದರಲ್ಲಿ 40% ಲಂಚ ಬಿಜೆಪಿಗೆ ಹೋದರೆ ಒಂದು ಲಕ್ಷ ಕೋಟಿ ರೂ. ಆಗುತ್ತದೆ. ಕಾಂಗ್ರೆಸ್‌ನ ಗ್ಯಾರಂಟಿ ಸ್ಕೀಂ ಅನುಷ್ಠಾನಕ್ಕೆ 30 ಸಾವಿರ ಕೋಟಿ ರೂ. ಖರ್ಚಾಗುತ್ತದೆ. ಉಳಿದ ಹಣವನ್ನು ಯುವ ಜನಾಂಗಕ್ಕೆ ಉದ್ಯೋಗ ನೀಡುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.

    ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಮಾತನಾಡಿ, ಮುಂಬರುವ ಚುನಾವಣೆ ಬಗ್ಗೆ ಇಡೀ ದೇಶ ನಮ್ಮತ್ತ ನೋಡುತ್ತಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೀಟುಗಳನ್ನು ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.

    ಬೆಲೆ ಏರಿಕೆಯಿಂದ ಜನರ ಮೇಲೆ ಹೊರೆ ಹೆಚ್ಚಾಗಿದೆ. ರಾಜ್ಯದಲ್ಲಿ ಹಾಗೂ ಕೇಂದ್ರದಲ್ಲಿ ಬಿಜೆಪಿ ತೊಲಗಬೇಕು. ಪ್ರತಿ ಕ್ಷೇತ್ರದಲ್ಲಿ 40 ಸಾವಿರ ಗ್ಯಾರಂಟಿ ಕಾರ್ಡ್ ವಿತರಣೆ ಮಾಡಲಾಗುತ್ತಿದೆ. ಆ ಮೂಲಕ ಜನರಿಂದ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ನಾವೂ ಅಧಿಕಾರಕ್ಕೆ ಬಂದಾಗ ನುಡಿದಂತೆ ನಡೆದಿದ್ದೇವೆ. ಬಿಜೆಪಿಯವರಂತೆ ಸುಳ್ಳು ಆಶ್ವಾಸನೆ ನೀಡುವುದಿಲ್ಲ. ಜನ ವಿರೋಧಿ, ದಲಿತರ ವಿರೋಧಿ, ಕಾರ್ಮಿಕರ ವಿರೋಧಿ ಬಿಜೆಪಿ ಸರ್ಕಾರವನ್ನು ಕಿತ್ತು ಹಾಕಬೇಕಿದೆ ಎಂದು ನುಡಿದರು.
    ರಾಜ್ಯಸಭೆ ಸದಸ್ಯ ಡಾ.ಸೈಯದ್ ನಾಸಿರ್ ಹುಸೇನ್ ಮಾತನಾಡಿ, ರಾಜ್ಯದಲ್ಲಿ ಚುನಾಚಣೆ ಕಾವು ಹೆಚ್ಚುತ್ತಿದೆ. ಕಾಂಗ್ರೆಸ್ ಪ್ರಣಾಳಿಕೆಯಂತೆ ಗೃಹ ಲಕ್ಷ್ಮೀ ಯೋಜನೆಯಡಿ ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂ., ಗೃಹ ಜ್ಯೋತಿ ಯೋಜನೆಯಡಿ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು. ಅದರ ಜತೆಗೆ 10 ಕೆಜಿ ಅಕ್ಕಿ ವಿತರಣೆಯ ಭರವಸೆ ನೀಡಲಾಗಿದೆ ಎಂದರು.

    ಎಐಸಿಸಿ ಕಾರ್ಯದರ್ಶಿ ಶ್ರೀಧರ್ ಬಾಬು, ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಶಾಸಕರಾದ ಬಿ.ನಾಗೇಂದ್ರ, ಜೆ.ಎನ್.ಗಣೇಶ್, ಈ.ತುಕಾರಾಮ್, ಪಾಲಿಕೆ ಮೇಯರ್ ರಾಜೇಶ್ವರಿ ಸುಬ್ಬರಾಯುಡು, ಮಾಜಿ ಸಚಿವ ಎಂ.ದಿವಾಕರ ಬಾಬು, ಮಾಜಿ ಶಾಸಕ ಅನಿಲ್ ಲಾಡ್, ಬಿ.ಎಂ.ನಾಗರಾಜ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts