More

    ಅಧಿಕಾರಿಗಳು ಹೊಣೆಗಾರಿಕೆ ಅರಿತು ಕೆಲಸ ಮಾಡಲಿ; ಸಂಸದ ವೈ.ದೇವೇಂದ್ರಪ್ಪ ತಾಕೀತು

    ಜಿಪಂ ಸಭಾಂಗಣದಲ್ಲಿ ನಡೆದ ದಿಶಾ ತ್ರೈಮಾಸಿಕ ಸಭೆ


    ಬಳ್ಳಾರಿ: ಹೊಣೆಗಾರಿಕೆ ಅರಿತು ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಿದರೆ ಮಾತ್ರ ಸರ್ಕಾರಕ್ಕೆ ಒಳ್ಳೆಯ ಹೆಸರು ಬರಲು ಸಾಧ್ಯ ಎಂದು ಸಂಸದ ವೈ.ದೇವೇಂದ್ರಪ್ಪ ಹೇಳಿದರು.

    ನಗರದ ಜಿಪಂ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಅಭಿವೃದ್ಧಿ ಸಮನ್ವಯ ಉಸ್ತುವಾರಿ ಸಮಿತಿ ದಿಶಾ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳು ತಲುಪಬೇಕು. ಏನಾದ್ರೂ ಕೇಳಿದರೆ ಹೊಸದಾಗಿ ಬಂದಿದ್ದೇನೆ ಎನ್ನಬೇಡಿ. ಸಭೆಯಲ್ಲಿ ಕೇಳಿದ್ದಕ್ಕೆ ಸಮರ್ಪಕ ಮಾಹಿತಿ ಕೊಡಿ ಎಂದು ಖಡಕ್ಕಾಗಿ ಹೇಳಿದರು.

    ಕೋವಿಡ್‌ನಿಂದ ಮೃತಪಟ್ಟವರ ಕುಟುಂಬದವರಿಗೆ ಸರ್ಕಾರದ ವಿವಿಧ ಇಲಾಖೆಗಳಡಿ ಹೊರಗುತ್ತಿಗೆ ಅಡಿ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ, ಆದ್ಯತೆ ನೀಡುವ ಮೂಲಕ ಆ ಕುಟುಂಬಗಳಿಗೆ ನೆರವಾಗುವ ಕೆಲಸವನ್ನು ಸರ್ಕಾರ ಮಾಡಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಸೂಕ್ತ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

    ಜಿಲ್ಲೆಯಲ್ಲಿ ಒಟ್ಟು 1266 ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಅವುಗಳಲ್ಲಿ ಸ್ವಂತ-911, 283 ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿವೆ. 76 ಕಟ್ಟಡಗಳು ನಿರ್ಮಾಣ ಹಂತದಲ್ಲಿವೆ. ನಿವೇಶನ ಲಭ್ಯವಿರುವ 58 ಕೇಂದ್ರಗಳಿಗೆ ಕಟ್ಟಡ ನಿರ್ಮಾಣ ಮಂಜೂರಾತಿಗಾಗಿ ಡಿಎಂಎಫ್ ಮತ್ತು ಕೆಕೆಆರ್‌ಡಿಬಿ ಯೋಜನೆಯಡಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ವಿಜಯಕುಮಾರ ವಿವರಿಸಿದರು.

    ಮೋಕಾ ಬಳಿ 800 ಎಂಎಲ್ ಸಾಮರ್ಥ್ಯದ ಕೆರೆ ನಿರ್ಮಾಣ ಗುಣಮಟ್ಟದಿಂದ ಕೂಡಿಲ್ಲ. ಈ ಕುರಿತು ತನಿಖೆ ನಡೆಸಲು ಸಮಿತಿ ರಚಿಸಿ ಒಂದೂವರೆ ತಿಂಗಳಲ್ಲಿ ವರದಿ ನಿಡಬೇಕು. ಪಾಲಿಕೆ ಆಯುಕ್ತ ನೇತೃತ್ವದಲ್ಲಿ ನೀರಾವರಿ,ಲೋಕೋಪಯೋಗಿ ಎಂಜನಿಯರ್‌ಗಳು, ಜಿಪಂ ಅಧಿಕಾರಿಗಳು ಒಳಗೊಂಡಂತೆ ವಿವಿಧ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಿ ತನಿಖೆ ನಡೆಸಿ ವರದಿ ನೀಡಿ ಎಂದು ಸೂಚಿಸಿದರು.

    ವಿವಿಧ ಯೋಜನೆಗಳಡಿ ಮನೆಗಳನ್ನು ನಿರ್ಮಿಸಿಕೊಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಅನಿವಾರ್ಯ ಕಾರಣಗಳಿಂದ ಆಯ್ಕೆಯಾದ ಫಲಾನುಭವಿಗಳು ನಿಗದಿಪಡಿಸಿದ ಅವಧಿಯೊಳಗೆ ಮನೆ ನಿರ್ಮಿಸಿಕೊಳ್ಳದಿದ್ದಲ್ಲಿ ಬ್ಲಾಕ್ ಆಗುತ್ತವೆ. ಅದೇ ರೀತಿ ಜಿಲ್ಲೆಯಲ್ಲೂ ಪ್ರಧಾನಮಂತ್ರಿ ಆವಾಸ್ ಯೋಜನೆ(ಗ್ರಾಮೀಣ)ಯಡಿ 2016-17ರಿಂದ 2019-20ನೇ ಸಾಲಿನವರೆಗೆ 586 ಮನೆಗಳು ಬ್ಲಾಕ್ ಆಗಿರುವುದು ಅತ್ಯಂತ ಕಳವಳಕಾರಿ ಎಂದು ಸಂಸದ ವೈ.ದೇವೇಂದ್ರಪ್ಪ ಹೇಳಿದರು.

    ಕೋವಿಡ್ ವ್ಯಾಕ್ಸಿನೇಷನ್ ಶೇ.109 ಪ್ರಗತಿ ಸಾಧನೆ, ಕೋವಿಡ್-19 ಪರಿಹಾರ ಮೊತ್ತಕ್ಕೆ ಸಂಬಂಧಿಸಿದಂತ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ಪರಿಹಾರ ಪೊರ್ಟಲ್‌ನಲ್ಲಿ ನೊಂದಣಿಯಾದ ಕೋವಿಡ್‌ನ 892 ಮರಣ ಪ್ರಕರಣಗಳಿಗೆ ಪರಿಹಾರ ವಿತರಿಸಿದ್ದು ಸೇರಿ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯಿತು.

    ಜಿಪಂ ಸಿಇಒ ಜಿ.ಲಿಂಗಮೂರ್ತಿ, ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ, ಸಹಾಯಕ ಆಯುಕ್ತ ಡಾ.ಆಕಾಶ ಶಂಕರ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts