ಚುನಾವಣೆ ಬಳಿಕ ರಾಜಕೀಯ ಧೃವೀಕರಣ – ಜೆಡಿಎಸ್ ಮುಖಂಡ ಪಿ.ಜಿ.ಆರ್.ಸಿಂಧ್ಯಾ ಹೇಳಿಕೆ

ಬಳ್ಳಾರಿ: ಲೋಕಸಭೆ ಚುನಾವಣೆ ಬಳಿಕ ರಾಜಕೀಯ ಧೃವೀಕರಣ ನಡೆಯಲಿದೆ ಎಂದು ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ ಭವಿಷ್ಯ ನುಡಿದರು. ನಗರದ ಜೆಡಿಎಸ್ ಜಿಲ್ಲಾ ಘಟಕದ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ಚುನಾವಣೆ ವೇಳೆ ಬಿಜೆಪಿ ನಾಯಕರು ನೀಡಿದ್ದ ಭರವಸೆ ಈಡೇರಿಸಿಲ್ಲ. ಈ ಹಿನ್ನೆಲೆಯಲ್ಲಿ ವೈಯಕ್ತಿಕ ಟೀಕೆ ಹಾಗೂ ಭಾವನಾತ್ಮಕ ವಿಚಾರಗಳ ಮೂಲಕ ಮತದಾರರನ್ನು ಕೆರಳಿಸುವ ಪ್ರಯತ್ನ ನಡೆಸಿದ್ದಾರೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಒಳ್ಳೆಯದಲ್ಲ ಎಂದು ಹೇಳಿದರು.

ವಿದೇಶದಲ್ಲಿ ಭಾರತೀಯರನ್ನು ಸಂಘಟಿಸುವಲ್ಲಿ ಪ್ರಧಾನಿ ಮೋದಿ ಯಶಸ್ವಿಯಾಗಿದ್ದಾರೆ. ಆದರೆ, ದೇಶ ಪ್ರೇಮದ ವಿಚಾರದಲ್ಲಿ ಭಾರತೀಯರು ಹಿಂದೆ ಬಿದ್ದಿಲ್ಲ. ನಮ್ಮ ದೇಶಪ್ರೇಮ ಯಾರೂ ಪ್ರಶ್ನೆ ಮಾಡುವಂತಿಲ್ಲ. ನಾವು ಕೂಡ ರಾಷ್ಟ್ರೀಯವಾದಿಗಳಾಗಿದ್ದು, ನಮಗೆ ಯಾರ ಸರ್ಟಿಫಿಕೇಟ್ ಬೇಕಾಗಿಲ್ಲ. ಆದರೆ, ಯುವ ಪೀಳಿಗೆಯನ್ನು ದಾರಿ ತಪ್ಪಿಸುವುದು ಸರಿಯಲ್ಲ ಎಂದು ಹೇಳಿದರು.

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಯಾವುದೆ ದೊಡ್ಡ ಕೊಡುಗೆ ಸಿಕ್ಕಿಲ್ಲ. ರಾಜ್ಯದಲ್ಲಿ ಸಿದ್ದರಾಮಯ್ಯ ಉತ್ತಮ ಮುಖ್ಯಮಂತ್ರಿ ಆಗಿದ್ದರು. ಸಿಎಂ ಎಚ್.ಡಿ.ಕುಮಾರಸ್ವಾಮಿ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ನಡೆಸಿದ್ದಾರೆ ಎಂದು ಸಿಂಧ್ಯಾ ಹೇಳಿದರು. ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಶಿವಪ್ಪ, ಮುಖಂಡರಾದ ಮೊಹ್ಮದ್ ಇಕ್ಬಾಲ್, ಸೋಮಲಿಂಗನಗೌಡ, ಕಿರಣ್ ಇತರರು ಹಾಜರಿದ್ದರು.

Leave a Reply

Your email address will not be published. Required fields are marked *