ಬಳ್ಳಾರಿ: ಜಿಲ್ಲಾಡಳಿತ, ಜಿಪಂ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ 67 ನೇ ಕರ್ನಾಟಕ ರಾಜ್ಯೋತ್ಸವ ನಿಮಿತ್ತ ನನ್ನ ನಾಡು, ನನ್ನ ಹಾಡು ಎಂಬ ಅಭಿಯಾನದ ಅಂಗವಾಗಿ ಶುಕ್ರವಾರ ಇಡೀ ಜಿಲ್ಲಾದ್ಯಂತ ಏಕಕಾಲದಲ್ಲೇ ಕನ್ನಡ ಗೀತೆಗಳ ಗಾಯನ ಕಾರ್ಯಕ್ರಮ ನಡೆಯಿತು.
ನಗರದ ವಿಮ್ಸ್ ಮೈದಾನದ ಆವರಣದಲ್ಲಿ 67ನೇ ಕರ್ನಾಟಕ ರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಕನ್ನಡ ಗೀತಗಾಯನ ಕೋಟಿ ಕಂಠ ಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಕಲಾವಿದರು ಮತ್ತು ಶಾಲಾ ಮಕ್ಕಳು ಕನ್ನಡ ಭಾಷೆ ಮೆರೆಯುವ ಆರು ಗೀತೆಗಳನ್ನು ಹಾಡಲಾಯಿತು.
ಕನ್ನಡ ನಾಡಿನ ಪ್ರಜೆಯಾಗಿ ನಾನು ಕನ್ನಡದಲ್ಲೇ ಮಾತನಾಡುತ್ತೇನೆ. ಕನ್ನಡದಲ್ಲೇ ಬರೆಯುತ್ತೇನೆ, ನಿತ್ಯ ವ್ಯವಹಾರದಲ್ಲಿ ಕನ್ನಡವನ್ನೇ ಬಳಸುತ್ತೇನೆ ಎಂಬ ಪಣತೋಡುತ್ತೇನೆ. ಕನ್ನಡ ನಾಡಿನಲ್ಲಿ ವಾಸವಾಗಿರುವ ಕನ್ನಡೇತರ ಬಂಧುಗಳಿಗೆ ಪ್ರೀತಿಯಿಂದ ಕನ್ನಡ ಕಲಿಸುತ್ತೇನೆ. ಕನ್ನಡ ನಾಡು, ನುಡಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಲು ಕಟಿಬದ್ಧನಾಗಿರುತ್ತೇನೆ ಎಂಬ ಪ್ರತಿಜ್ಞಾವಿಧಿಯನ್ನು ನೆರೆದವರು ಸ್ವೀಕರಿಸಿದರು. ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ಪ್ರತಿಜ್ಞಾವಿಧಿ ಬೋಧಿಸಿದರು.
ಜಿಪಂ ಸಿಇಒ ಲಿಂಗಮೂರ್ತಿ, ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ್, ಬುಡಾ ಅಧ್ಯಕ್ಷ ಮಾರುತಿ ಪ್ರಸಾದ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ, ಕನ್ನಡ ಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು ಸೇರಿದಂತೆ ಶಾಲಾ ಮಕ್ಕಳು ಉತ್ಸಾಹದಿಂದ ಪಾಲ್ಗೊಂಡಿದ್ದರು.