More

    ಐವರು ರೌಡಿಶೀಟರ್ ಬಳ್ಳಾರಿ ಜಿಲ್ಲೆಯಿಂದ ಗಡಿಪಾರು

    ಬಳ್ಳಾರಿ: ವಿಧಾನಸಭೆ ಚುನಾವಣೆಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದ್ದು, ಜಿಲ್ಲೆಯಲ್ಲಿ 18 ಕಡೆ ಚೆಕ್‌ಪೋಸ್ಟ್ ನಿರ್ಮಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಹೇಳಿದರು.

    ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ 769 ರೌಡಿಶೀಟರ್‌ಗಳ ಮೇಲೆ ಕಣ್ಣಿಡಲಾಗಿದೆ. 589 ರೌಡಿಗಳಿಂದ ಈಗಾಗಲೇ ಮುಚ್ಚಳಿಕೆ ಪತ್ರ ಬರೆಸಿಕೊಳ್ಳಲಾಗಿದೆ. ಐವರನ್ನು ಗಡಿಪಾರು ಮಾಡಲಾಗಿದೆ. ಇನ್ನೂ 11ಜನರನ್ನು ಗಡಿಪಾರು ಮಾಡಲು ಶಿಫಾರಸು ಮಾಡಲಾಗಿದೆ ಎಂದು ಎಸ್ಪಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

    ಒಬ್ಬರ ಮೇಲೆ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ರೌಡಿಗಳ ಮನೆಗಳನ್ನು ಪರಿಶೀಲನೆ ಮಾಡಲಾಗುತ್ತಿದೆ. ಒಟ್ಟು 54 ಪ್ರಕರಣಗಳಲ್ಲಿ 210 ಜನ ರೌಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದರು.

    ಈಗಾಗಲೇ 6 ಲಕ್ಷ ರೂ., 5.50 ಲಕ್ಷ ರೂ. ಮೌಲ್ಯದ ಮೂರು ಸಾವಿರ ಸೀರೆ, 5 ಲಕ್ಷ ರೂ. ಮೌಲ್ಯದ ಮೂರು ಕೆಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. 4 ಲಕ್ಷ ರೂ.ಮೌಲ್ಯದ 600 ಲೀಟರ್ ಮದ್ಯ ವಶಕ್ಕೆ ಪಡೆಯಲಾಗಿದ್ದು, ಈ ಬಗ್ಗೆ ಒಟ್ಟು 19 ಪ್ರಕರಣ ದಾಖಲಿಸಲಾಗಿದೆ. ಕಂಪ್ಲಿ, ಕುಡತಿನಿ, ಕುರುಗೋಡು ಭಾಗದಲ್ಲಿ ಸೀರೆ ಹಂಚಿರುವ ಬಗ್ಗೆ ಪ್ರಕರಣ ದಾಖಲಾಗಿದೆ ಎಂದರು.

    ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ 60 ಸೆಕ್ಟರ್ ಅಧಿಕಾರಿಗಳನ್ನು ನಿಯೋಜಿಸಲಾಗುವುದು. ಅದರಲ್ಲಿ ಪಿಎಸ್‌ಐ ಸೇರಿ ಸಿಬ್ಬಂದಿ ಇರುತ್ತಾರೆ. ಯಾವುದೇ ಅಕ್ರಮಗಳು ನಡೆದರೆ ಅವುಗಳ ಬಗ್ಗೆ ನಿಗಾ ವಹಿಸಲಾಗುವುದು. ಜಿಲ್ಲೆಯ 25 ಕಡೆಗಳಲ್ಲಿ ಅತೀಸೂಕ್ಷ್ಮ ವಲಯಗಳನ್ನು ಗುರುತಿಸಲಾಗಿದ್ದು, ಅಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜನೆ ಮಾಡಲಾಗುವುದು ಎಂದರು.

    ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಕಟ್ಟೆಚ್ಚರ ವಹಿಸಲಾಗುವುದು. ಜನ ಓಡಾಡುವ ಪ್ರದೇಶಗಳಲ್ಲಿ ಸಿಸಿ ಟಿವಿ ಕ್ಯಾಮರಾ ಅಳವಡಿಸಲಾಗುವುದು. ಪ್ರಮುಖ ವೃತ್ತ, ಸಾರ್ವಜನಿಕ ಸ್ಥಳ, ಪ್ರಮುಖ ನಗರದ ಬೀದಿಗಳಲ್ಲಿ ಸಿಸಿ ಟಿವಿ ಕ್ಯಾಮರಾ ಅಳವಡಿಕೆಗೆ ಸೂಚನೆ ನೀಡಲಾಗಿದೆ. ಸಾರ್ವಜನಿಕರು ಕೂಡ ತಮ್ಮ ಭಾಗದಲ್ಲಿ ಯಾವುದೇ ಅಹಿತಕರ ಘಟನೆ ಆಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಬಳ್ಳಾರಿ ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೂ ಮುನ್ನವೇ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮತದಾರರಿಗೆ ಆಮಿಷವೊಡ್ಡುವ ಪ್ರಕರಣಗಳು ಕಂಡುಬಂದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ರಂಜಿತ್ ಕುಮಾರ್ ಬಂಡಾರು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts