

ಬೆಂಗಳೂರು: ಸರ್ಕಾರಿ ಸ್ಥಳದಲ್ಲಿದ್ದ ಮರಗಳನ್ನು ಅಕ್ರಮವಾಗಿ ಕಡಿದು ಮಾರಾಟ ಮಾಡಲು ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಲಯ ಅರಣ್ಯಾಧಿಕಾರಿಯೊಬ್ಬರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದ್ದು, 24 ಗಂಟೆಯೊಳಗೆ ಕ್ರಮಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ಕಲ್ಮಂಜ ಗ್ರಾಮದ ಸರ್ವೆ ನಂ. 237/1ರ ಸರ್ಕಾರಿ ಸ್ಥಳದಲ್ಲಿ ಅನಧಿಕೃತವಾಗಿ ಮರಗಳನ್ನು ಕಡಿದು ಸಾಗಾಟಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಎಚ್.ಎನ್.ತ್ಯಾಗರಾಜು ಅವರನ್ನು ಅಮಾನತುಗೊಳಿಸಲಾಗಿದೆ. ಈ ಆದೇಶವನ್ನು ಅನುಷ್ಠಾನಗೊಳಿಸಿ ಅನುಪಾಲನಾ ವರದಿ ಸಲ್ಲಿಸುವಂತೆ ಮಂಗಳೂರು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅವರಿಗೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸೂಚನೆ ನೀಡಿದ್ದಾರೆ.
ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ತ್ಯಾಗರಾಜು ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದು, ಆದೇಶವನ್ನು ಅವರಿಗೆ ಜಾರಿ ಮಾಡಿ ದಿನಾಂಕ ಸಹಿತ ಸಹಿ ಪಡೆದು ಸ್ವೀಕೃತಿಯನ್ನು ಈ ಕಚೇರಿಗೆ ಸಲ್ಲಿಸಲು ಸೂಚಿಸಲಾಗಿತ್ತು. ಅಲ್ಲದೆ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಯ ಕಾರ್ಯಭಾರವನ್ನು ಬದಲಿ ವಲಯ ಅರಣ್ಯಾಧಿಕಾರಿಗೆ ಪ್ರಭಾರ ವಹಿಸಲು ಕ್ರಮಕೈಗೊಳ್ಳುವಂತೆ ಸೂಚಿಸಲಾಗಿತ್ತು. ಆದರೆ ಆದೇಶ ಜಾರಿಯಾದ ಬಗ್ಗೆ ಯಾವುದೇ ಮಾಹಿತಿ ಸ್ವೀಕೃತವಾಗಿಲ್ಲ ಎಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ.
ಅಲ್ಲದೆ ಅಮಾನತು ಆದೇಶವನ್ನು ತ್ಯಾಗರಾಜುಗೆ 24 ಗಂಟೆಯ ಒಳಗೆ ಜಾರಿ ಮಾಡಿ, ದಿನಾಂಕ ಸಹಿತ ಸ್ವೀಕೃತಿ ಪಡೆದು, ಈ ಕಚೇರಿಗೆ ಸಲ್ಲಿಸಲು ಹಾಗೂ ಸೂಕ್ತ ಬದಲಿ ಪ್ರಭಾರದ ವ್ಯವಸ್ಥೆ ಮಾಡಲು ಈ ಮೂಲಕ ಸೂಚಿಸಲಾಗಿದೆ ಎಂದು ಪ್ರಭಾರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸೂಚನೆ ನೀಡಿದ್ದಾರೆ.