ವಾಕಿಂಗ್​ ಹೋಗುತ್ತಿದ್ದವಳನ್ನ ತಬ್ಬಿ ಚುಂಬಿಸಿದ ಕಾಮುಕ; ಸಿಸಿಟಿವಿಯಲ್ಲಿ ಸೆರೆಯಾಯ್ತು ಈ ದೃಶ್ಯ

Konanakunte Incident
Published on

ಬೆಂಗಳೂರು: ವ್ಯಕ್ತಿಯೋರ್ವ ವಾಕಿಂಗ್​ಗೆ ತೆರಳುತ್ತಿದ್ದ ಮಹಿಳೆಯನ್ನು ತಬ್ಬಿ ಚುಂಬಿಸಿ ವಿಕೃತಿ ಮೆರೆದಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆಗಸ್ಟ್​ 02ರ ಮುಂಜಾನೆ ಐದು ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದ್ದು, ಆಘಾತಕಾರಿ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ವೈರಲ್​ ಆಗಿರುವ ವಿಡಿಯೋ ನೋಡುವುದಾದರೆ ವ್ಯಕ್ತಿಯೋರ್ವ ವಾಕಿಂಗ್​ಗೆ ತೆರಳುತ್ತಿರುವ ಮಹಿಳೆಯನ್ನು ಬಲವಂತವಾಗಿ ತಬ್ಬಿ ಚುಂಬಿಸುತ್ತಾನೆ. ಆತನಿಂದ ತಪ್ಪಿಸಿಕೊಂಡು ಮಹಿಳೆ ಓಡಿ ಬಂದರೂ ಬಿಡದ ವ್ಯಕ್ತಿ ಆಕೆಯನ್ನು ಹಿಂಬಾಲಿಸಿ ಹಿಂಸೆ ನೀಡಿದ್ಧಾನೆ. ಈ ವೇಳೆ ಮಹಿಳೆ ಜೋರಾಗಿ ಕೂಗಿಕೊಂಡಿದ್ದು, ಮಹಿಳೆಯ ಕೂಗು ಕೇಳಿ ಅಲ್ಲಿದ್ದ ನಾಯಿಗಳು ಬೊಗಳಲು ಶುರು ಮಾಡಿದ್ದಾವೆ. ನಾಯಿ ಬೊಗಳಲು ಶುರು ಮಾಡುತ್ತಿದ್ದಂತೆ ಹೆದರಿದ ವ್ಯಕ್ತಿಯು ಸ್ಥಳದಿಂದ ಓಡಿ ಹೋಗಿದ್ದಾನೆ.

ಸದ್ಯ ಕೇಳಿ ಬಂದಿರುವ ಮಾಹಿತಿ ಪ್ರಕಾರ, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚುತ್ತಿದ್ದಾರೆ. ಆರೋಪಿಯ ಗುರುತು ಪತ್ತೆ ಹಚ್ಚಲು ಪೊಲೀಸರು ಘಟನೆ ನಡೆದ ಸ್ಥಳದ ಸುತ್ತ ಅಳವಡಿಸಲಾಗಿರುವ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದು, ಆರೋಪಿ ಪತ್ತೆ ಹಚ್ಚಲು ವಿಶೇಷ ತಂಡವನ್ನು ರಚಿಸಿದ್ದಾರೆ. ಶೀಘ್ರದಲ್ಲೇ ಆರೋಪಿಯನ್ನು ಬಂಧಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್​ ಜಗಲಾಸರ್, ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಮಹಿಳೆಯ ಸುರಕ್ಷತೆ ಬಗ್ಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು. ಘಟನೆ ಸಂಬಂಧ ಮಹಿಳೆಯ ಪತಿ ನೀಡಿದ ದೂರಿನ ಅನ್ವಯ ಪೊಲೀಸರು ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 76, 78, ಮತ್ತು 79 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net