More

    ಡೆಡಿಕೇಟೆಡ್ ಕೋವಿಡ್ ಹೆಲ್ತ್ ಕೇರ್ ಸೆಂಟರ್‌ಗೆ ಡಿಸಿ ಭೇಟಿ

    ಭರಮಸಾಗರ: ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ತೆರೆದಿರುವ ಡೆಡಿಕೇಟೆಡ್ ಕೋವಿಡ್ ಹೆಲ್ತ್ ಕೇರ್ ಸೆಂಟರ್‌ಗೆ ಮಂಗಳವಾರ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಪರಿಶೀಲಿಸಿ ವೈದ್ಯಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

    ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುವ ವಾಹನ ಚಾಲಕರು, ಸುತ್ತಮುತ್ತಲ ಗ್ರಾಮಗಳ ಕೋವಿಡ್-19 ಶಂಕಿತ ಅಥವಾ ಸೋಂಕಿತ ವ್ಯಕ್ತಿಗಳಿಗೆ ತಕ್ಷಣಕ್ಕೆ ಇಲ್ಲಿ ಚಿಕಿತ್ಸೆ ನೀಡಲು ವೈದ್ಯರು ಸನ್ನದ್ಧರಾಗಿರಬೇಕು. ಸೋಂಕಿತರಿಗೆ 14 ರಿಂದ 20 ದಿನದವರೆಗೂ ಕ್ವಾರಂಟೈನ್‌ಗೆ ಒಳಪಡಿಸಿ ಅವರಿಗೆ ಗುಣಮಟ್ಟದ ಆಹಾರೋಪಚಾರ ಒದಗಿಸಬೇಕು. ತಾತ್ಕಾಲಿಕವಾಗಿ ಹೊರರೋಗಿಗಳ ವಿಭಾಗ ಬದಲಿಸಿಕೊಳ್ಳಿ ಎಂದು ಸೂಚಿಸಿದರು.

    ದಾವಣಗೆರೆ ಜಿಲ್ಲೆಯಲ್ಲಿ ಕರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಗಡಿಯಲ್ಲಿ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ. ಗಡಿ ಪ್ರದೇಶದಲ್ಲಿ ನಿರ್ಮಿಸಿದ ಚೆಕ್‌ಪೋಸ್ಟ್‌ನಲ್ಲಿ ಪ್ರತಿಯೊಬ್ಬರನ್ನೂ ಪರಿಶೀಲಿಸಲಾಗುತ್ತಿದೆ. ದಾವಣಗೆರೆಯಿಂದ ಬರುವವರಿಗೆ ನಿರ್ಬಂಧ ವಿಧಿಸಲಾಗಿದೆ. ಆದರೂ ಒಳಮಾರ್ಗಗಳನ್ನು ಬಳಸಿ ಬರುತ್ತಿರುವುದು ಕಂಡುಬಂದಿದೆ. ಇಂತವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಸೂಚಿಸಲಾಗುವುದು. ಹೊಸದಾಗಿ ಬರುವವರ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಬೇಕು. ನಿರ್ಬಂಧದ ನಡುವೆಯೂ ಓಡಾಡುವವರಿದ್ದರೆ ಅಂತವರು ಯಾರಾದರೂ ಸರಿಯೇ ಕಡ್ಡಾಯವಾಗಿ ಕ್ವಾರಂಟೈನ್‌ನಲ್ಲಿ ಇಡಲಾಗುವುದು ಎಂದು ಎಚ್ಚರಿಸಿದರು.

    ಜಿಲ್ಲಾ ಆರೋಗ್ಯಾಧಿಕಾರಿ ಡಾ. ಪಾಲಾಕ್ಷ, ವಿಶೇಷ ಅಧಿಕಾರಿ ಪ್ರಸನ್ನಕುಮಾರ್, ತಾಲೂಕು ವೈದ್ಯಾಧಿಕಾರಿ ಡಾ. ಗಿರೀಶ್, ಡಾ. ಕುಮಾರಸ್ವಾಮಿ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಮಂಜುನಾಥ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts