

ನವದೆಹಲಿ: ಬಿಡದಿ ಸಮೀಪದ ಕೇತಗಾನಹಳ್ಳಿಯಲ್ಲಿ ಜಮೀನು ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ವಿಚಾರಣೆಗೆ ಸುಪ್ರೀಂಕೋರ್ಟ್ ತಾತ್ಕಾಲಿಕ ತಡೆ ನೀಡಿದೆ.
ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆಹೋದ ಹೆಚ್ಡಿಕೆಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಪಂಕಜ್ ಮಿಥಲ್ ಹಾಗೂ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಅವರಿದ್ದ ದ್ವಿಸದಸ್ಯ ಪೀಠ ಈ ಆದೇಶ ಹೊರಡಿಸಿದ್ದು, ಮುಂದಿನ ಆದೇಶದವರೆಗೂ ನ್ಯಾಯಾಂಗ ನಿಂದನೆ ಕೇಸ್ ವಿಚಾರಣೆಗೆ ತಡೆ ನೀಡಿದೆ.
ರಾಮನಗರ ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮತ್ತು ಅವರ ಸಂಬಂಧಿಗಳು ಸರಕಾರಿ ಭೂಮಿ ಒತ್ತುವರಿ ಮಾಡಿದ್ದಾರೆಂದು ಆಕ್ಷೇಪಿಸಿ ಸಮಾಜ ಪರಿವರ್ತನಾ ಸಮುದಾಯ ಸಲ್ಲಿಸಿದ್ದ ಅರ್ಜಿಯ ಸಂಬಂಧ ಕರ್ನಾಟಕ ಲೋಕಾಯುಕ್ತ ವರದಿ ಅನುಸಾರ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ 2020ರಲ್ಲಿ ಆದೇಶ ಹೊರಡಿಸಿತ್ತು. ಆ ಆದೇಶವನ್ನು ಜಾರಿಗೊಳಿಸಿಲ್ಲವೆಂದು ಸಮಾಜ ಪರಿವರ್ತನಾ ಸಮುದಾಯವು ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರಿ ಭೂಮಿ ಒತ್ತುವರಿ ಪತ್ತೆ ಮಾಡಲು ರಾಜ್ಯ ಸರ್ಕಾರ 2025ರ ಜ.28ರಂದು ಎಸ್‌ಐಟಿ ರಚಿಸಿ ಆದೇಶಿಸಿತ್ತು. ಇದು ಕಾನೂನಿಗೆ ಅನುಗುಣವಾಗಿಲ್ಲ, ಹಾಗಾಗಿ ಅದನ್ನು ರದ್ದುಗೊಳಿಸಬೇಕೆಂದು ಕುಮಾರಸ್ವಾಮಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ನಂತರ ಹೈಕೋರ್ಟ್ ನ ವಿಚಾರಣೆ ಆದೇಶ ಪ್ರಶ್ನಿಸಿ ಕುಮಾರಸ್ವಾಮಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಬಾಕಿ ಇರುವುದರಿಂದ ತಮ್ಮ ವಿರುದ್ಧದ ಕಾನೂನು ಪ್ರಕ್ರಿಯೆಗೆ ತಡೆ ನೀಡುವಂತೆ ಕುಮಾರಸ್ವಾಮಿ ಹೈಕೋರ್ಟ್‌ಗೆ ಮನವಿ ಮಾಡಿದ್ದರು. ಕುಮಾರಸ್ವಾಮಿ ಅವರ ಮನವಿ ಪರಿಗಣಿಸಿದ ನ್ಯಾಯಾಲಯ, ಮಾರ್ಚ್ 27 ರವರೆಗೂ ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಆದೇಶಿಸಿ ವಿಚಾರಣೆಯನ್ನು ಮುಂದೂಡಿತ್ತು. ಇದೀಗ ಸುಪ್ರೀಂಕೋರ್ಟ್, ಕುಮಾರಸ್ವಾಮಿ ವಿರುದ್ಧ ನ್ಯಾಯಾಂಗ ನಿಂದನೆ ವಿಚಾರಣೆಗೆ ತಡೆ ನೀಡಿದೆ.