More

    ಕಳಸಾ-ಬಂಡೂರಿ ಯೋಜನೆ ಅನುಷ್ಠಾನಕ್ಕೆ ಬಿಜೆಪಿ ಬದ್ಧ

    ಹುಬ್ಬಳ್ಳಿ : ಕಳಸಾ-ಬಂಡೂರಿ ನಾಲಾ ಯೋಜನೆ ಅನುಷ್ಠಾನಕ್ಕೆ ಬಿಜೆಪಿ ಬದ್ಧವಾಗಿದೆ. ಈ ಯೋಜನೆ ಜಾರಿಗೊಳಿಸುವ ಜವಾಬ್ದಾರಿ ನನ್ನದು ಎಂದು ಕೇಂದ್ರ ಸಚಿವ ಹಾಗೂ ಧಾರವಾಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಹೇಳಿದರು.

    ನವಲಗುಂದ ವಿಧಾನಸಭೆ ಕ್ಷೇತ್ರದ ಮೊರಬ ಗ್ರಾಮದಲ್ಲಿ ಶುಕ್ರವಾರ ಆಯೋಜಿಸಿದ್ದ ಚುನಾವಣೆ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

    ಕಾಂಗ್ರೆಸ್ ಕುತಂತ್ರದಿಂದಾಗಿ ಮಹದಾಯಿ ನೀರು ಕರ್ನಾಟಕಕ್ಕೆ ದೊರೆಯುವುದು ವಿಳಂಬವಾಗುತ್ತಿದೆ. ಗೋವಾದಲ್ಲಿ ಭಾಷಣ ಮಾಡಿದ್ದ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರು, ಕರ್ನಾಟಕಕ್ಕೆ ಮಹದಾಯಿಯ ಒಂದು ಹನಿ ನೀರನ್ನೂ ಕೊಡುವುದಿಲ್ಲ ಎಂದಿದ್ದನ್ನು ರಾಜ್ಯದ ಜನರು ಮರೆಯುವುದಿಲ್ಲ ಎಂದರು.

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಹಿಂದುಳಿದವರ ಮೀಸಲಾತಿಯನ್ನು ಕಿತ್ತುಕೊಂಡು ಮುಸ್ಲೀಮರಿಗೆ ಕೊಡುವ ಹುನ್ನಾರ ನಡೆಸುತ್ತಿದೆ. ಮುಸ್ಲೀಮ್ ತುಷ್ಠೀಕರಣಕ್ಕೆ ಅತಿಯಾದ ಮಹತ್ವ ಕೊಡುತ್ತಿರುವ ಕಾಂಗ್ರೆಸ್ ಸರ್ಕಾರದಲ್ಲಿ ಹಿಂದುಗಳಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

    ಸಾಮಾನ್ಯ ವ್ಯಕ್ತಿಯನ್ನು ಸಂಸದನನ್ನಾಗಿ ಚುನಾಯಿಸಿ, ಮಂತ್ರಿಯನ್ನಾಗಿ ಮಾಡಿದ್ದು ಧಾರವಾಡ ಕ್ಷೇತ್ರದ ಮತದಾರರು. ಇಲ್ಲಿನ ಮತದಾರರ ಋಣವನ್ನು ಎಂದಿಗೂ ಮರೆಯುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಪ್ರತಿ ಬಾರಿ ಸಭೆಯಲ್ಲಿ ಪಾಲ್ಗೊಳ್ಳುವುದಕ್ಕೂ ಮೊದಲು ನನ್ನ ಮತದಾರರನ್ನು ಸ್ಮರಿಸಿಕೊಳ್ಳುತ್ತೇನೆ ಎಂದರು.

    ಶಾಸಕ ಬಸನಗೌಡ ಯತ್ನಾಳ ಮಾತನಾಡಿ, ಕಾಂಗ್ರೆಸ್ ಆಡಳಿತದಲ್ಲಿ ಭಾರತದ ಆರ್ಥಿಕ ಸ್ಥಿತಿ ಜಾಗತಿಕ ಮಟ್ಟದಲ್ಲಿ ಕೊನೆಯಲ್ಲಿತ್ತು. ನರೇಂದ್ರ ಮೋದಿ ಪ್ರಧಾನಿಯಾದ ನಂತರ ದೇಶದ ಆರ್ಥಿಕ ಸ್ಥಿತಿ 5ನೇ ಸ್ಥಾನಕ್ಕೆ ಏರಿಕೆಯಾಗಿದೆ. ಭಾರತವನ್ನು ಆಳಿದ್ದ ಇಂಗ್ಲೆಂಡ್​ನ ಆರ್ಥಿಕ ಪರಿಸ್ಥಿತಿ 6ನೇ ಸ್ಥಾನಕ್ಕೆ ಕುಸಿದಿದೆ ಎಂದು ತಿಳಿಸಿದರು.

    ನರೇಂದ್ರ ಮೋದಿ ಪ್ರಧಾನಿ ಆದ ನಂತರ ದೇಶದಾದ್ಯಂತ ಅಭಿವೃದ್ಧಿ ಕೆಲಸಗಳು ವೇಗ ಪಡೆದಿವೆ. ಧಾರವಾಡ ಲೋಕಸಭೆ ಕ್ಷೇತ್ರದಲ್ಲಿಯೂ ಅನೇಕ ಅಭಿವೃದ್ಧಿ ಕೆಲಸಗಳು ಆಗಿವೆ. ಇವೆಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಮುಖಂಡರಿಗೆ ಕಾಣುವುದಿಲ್ಲವೇ ? ಎಂದು ಪ್ರಶ್ನಿಸಿದರು.

    ಈ ಚುನಾವಣೆಯಲ್ಲಿ ಜನರು ಕಾಂಗ್ರೆಸ್​ನವರಿಗೆ ಚೊಂಬು ತೋರಿಸುವುದು ಗ್ಯಾರಂಟಿ. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಖಚಿತ. ನಂತರ ಕಾಂಗ್ರೆಸ್​ನವರಿಗೆ ಚೊಂಬೇ ಗತಿ ಎಂದು ಟೀಕಿಸಿದರು.

    ಇಡಿ ರಾಜ್ಯದಲ್ಲಿ ಹಿಂದುಗಳಿಗೆ ರಕ್ಷಣೆ ಇಲ್ಲದಂತಾಗಿದೆ. ವಿದ್ಯಾರ್ಥಿನಿ ನೇಹಾ ಹಿರೇಮಠಗೆ ಆಗಿರುವ ದುಸ್ಥಿತಿ ಮುಸ್ಲೀಮ್ ಹೆಣ್ಣು ಮಕ್ಕಳಿಗೆ ಆಗಿದ್ದರೆ ಕಾಂಗ್ರೆಸ್ ವರಿಷ್ಠರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹುಬ್ಬಳ್ಳಿಗೆ ಓಡಿ ಬರುತ್ತಿದ್ದರು. ಸಿಎಂ ಸಿದ್ದರಾಮಯ್ಯ ಅಂತೂ ಇಲ್ಲಿಯೇ ಠಿಕಾಣಿ ಹೂಡುತ್ತಿದ್ದರು ಎಂದರು.

    ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಧಾರವಾಡ ಗ್ರಾಮಾಂತರ ಬಿಜೆಪಿ ಅಧ್ಯಕ್ಷ ನಿಂಗಪ್ಪ ಸುತಗಟ್ಟಿ ಹಾಗೂ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts