ಇದೇ ಮೊದಲ ಬಾರಿಗೆ ಕಾಂಗ್ರೆಸ್​ಗಿಂತಲೂ ಹೆಚ್ಚಿನ ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ

ನವದೆಹಲಿ: ಲೋಕಸಭೆ ಚುನಾವಣೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕಾಂಗ್ರೆಸ್​ಗಿಂತಲೂ ಹೆಚ್ಚಿನ ಕ್ಷೇತ್ರಗಳಲ್ಲಿ ಬಿಜೆಪಿ ಸ್ಫರ್ಧಿಸುತ್ತಿದ್ದು, ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದೆ.

ಈ ಬಾರಿ ಒಟ್ಟು 545 ಲೋಕಸಭೆ ಕ್ಷೇತ್ರಗಳ ಪೈಕಿ ಬಿಜೆಪಿ 437 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದರೆ, ಕಾಂಗ್ರೆಸ್​ ಕೇವಲ 423 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಬಿಜೆಪಿ ತನ್ನ ನೆಲೆಯಿಲ್ಲದ ರಾಜ್ಯಗಳಲ್ಲೂ ನೆಲೆ ಕಂಡುಕೊಳ್ಳುವಲ್ಲಿ ಮತ್ತು ಪಕ್ಷವನ್ನು ಸಂಘಟಿಸಲು ಹೆಚ್ಚಿನ ಒತ್ತು ನೀಡುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಅತಿ ಹೆಚ್ಚಿನ ಕ್ಷೇತ್ರದಲ್ಲಿ ಪಕ್ಷ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಾಧ್ಯವಾಗಿದೆ.

2009ರಲ್ಲಿ ಬಿಜೆಪಿ 433 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರೆ, ಕಾಂಗ್ರೆಸ್​ 440 ಕ್ಷೇತ್ರಗಳಲ್ಲಿ ಸ್ಪರ್ಧಿಸಿತ್ತು. ಆದರೆ ಬಿಜೆಪಿ ಕೇವಲ 116 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಕಾಂಗ್ರೆಸ್​ 206 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಮೈತ್ರಿ ಪಕ್ಷಗಳೊಂದಿಗೆ ಸರ್ಕಾರ ರಚಿಸಿತ್ತು.

ಆದರೆ 2014ರಲ್ಲಿ 428 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಬಿಜೆಪಿ 282 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಅಭೂತಪೂರ್ವ ಗೆಲುವು ಸಾಧಿಸಿತ್ತು. ಆದರೆ 464 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್​ ಕೇವಲ 44 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಹೀನಾಯವಾಗಿ ಸೋಲನುಭವಿಸಿತ್ತು. ಈ ಬಾರಿ ಕಾಂಗ್ರೆಸ್​ 423 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದು, ಇನ್ನು ಕೆಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸುವ ಸಾಧ್ಯತೆ ಇದೆ. (ಏಜೆನ್ಸೀಸ್​)

Leave a Reply

Your email address will not be published. Required fields are marked *