More

    ಬರ ನಿರ್ವಹಣೆಯಲ್ಲಿ ರಾಜ್ಯಸರ್ಕಾರ ವಿಫಲ: ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್ ಟೀಕೆ

    ಮಂಡ್ಯ: ಬರಗಾಲ ನಿರ್ವಹಿಸುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ. ಮಂಜುನಾಥ್ ಆರೋಪಿಸಿದ್ದಾರೆ.
    ನಗರದ ವಿವಿಧ ಬಡಾವಣೆಗಳಲ್ಲಿ ಶನಿವಾರ ಭಾರತದ ಸಮಸ್ತ ದೇಶವಾಸಿಗಳಿಗೆ ಪ್ರಧಾನಮಂತ್ರಿ ನರೇಂದ್ರಮೋದಿ ಅವರ ಪತ್ರ ತಲುಪಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಭೀಕರ ಬರಗಾಲ ಇದೆ. 800ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉತ್ತರ ಕರ್ನಾಟಕದಲ್ಲಿ ಬರದ ಸಮಸ್ಯೆಯಿಂದ ಕುಡಿಯುವ ನೀರಿಗೂ ಹಾಹಾಕಾರ ಇದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಜವಾಬ್ದಾರಿ ಮರೆತಿದ್ದಾರೆ ಎಂದು ದೂರಿದರು.
    ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ತಮ್ಮನ್ನು ಸೀಮಿತಗೊಳಿಸಿಕೊಂಡಿದ್ದಾರೆ. ಬೆಂಗಳೂರಿನ ನೀರಿನ ಸಮಸ್ಯೆಯತ್ತ ಗಮನ ಕೊಡುತ್ತಿಲ್ಲ. ಕುಡಿಯುವ ನೀರಿನ ವಿಚಾರದಲ್ಲೂ ರಾಜಕೀಯ ಮಾಡುತ್ತಿದ್ದಾರೆ. ಬರಗಾಲ ಪೀಡಿತವೆಂದು ಘೋಷಿಸುವ ಮೊದಲು ಅಳೆದು ತೂಗಿ 3 ತಿಂಗಳು ಮುಂದೆ ಹಾಕಿದ್ದರು. ರಾಜ್ಯ ಸರ್ಕಾರದಲ್ಲಿ ಹಣ ಇಲ್ಲದ ಕಾರಣ ರೈತರಿಗೆ ಪರಿಹಾರ ನೀಡುವಲ್ಲಿ ವಿಳಂಬ ಮಾಡಿದ್ದಾರೆ ಎಂದು ಟೀಕಿಸಿದರು.
    ಸರ್ಕಾರವೇ 223 ತಾಲೂಕನ್ನು ಬರಪೀಡಿತ ಎಂದು ಪ್ರಕಟಿಸಿದೆ. ಆದರೆ ಎಷ್ಟು ಜನ ಸಚಿವರು ಜಿಲ್ಲೆಗೆ ಹೋಗಿ ಬರಗಾಲ ಎದುರಿಸಲು, ಬರದ ಬವಣೆ ನೀಗಿಸಲು ಯೋಜನೆ ರೂಪಿಸಲು ಮುಂದಾಗಿದ್ದಾರೆ. ಎಷ್ಟು ಸಚಿವರು ಬರಪೀಡಿತ ತಾಲೂಕಿಗೆ ಪ್ರವಾಸ ಮಾಡಿದ್ದಾರೆ. ಕುಡಿಯುವ ನೀರಿಗೆ ಹಾಹಾಕಾರ ಇದೆ. ಜನಸಾಮಾನ್ಯರ ಹಾಹಾಕಾರ ನೀಗಿಸುವ ಅಧಿಕಾರ ಇರುವ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಅವರ ಅಸಮರ್ಥತೆ, ಅಸಹಾಯಕತೆಯನ್ನು ತೋರಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
    ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿಗೆ ಐಟಿ, ಬಿಟಿ ಸಿಟಿ ಎಂಬ ಹೆಸರಿದೆ. ವ್ಯವಹಾರದ ವಿಷಯದಲ್ಲಿ ಬೆಂಗಳೂರಿಗೆ ಆದ್ಯತೆ ಕೊಡಲಾಗುತ್ತಿತ್ತು. ಕಾವೇರಿ ನೀರನ್ನು ತಮಿಳುನಾಡಿಗೆ ಬಿಡದಂತೆ ಬಿಜೆಪಿ ಆಗ್ರಹಿಸಿತ್ತು. ಆದರೂ ಇಂಡಿಯಾ ಒಕ್ಕೂಟದ ಭಾಗಿದಾರ ಪಕ್ಷವೆಂಬ ಕಾರಣಕ್ಕೆ ಸ್ಟಾಲಿನ್ ಅವರ ಕೋರಿಕೆ ಮೇರೆಗೆ ನೀರನ್ನು ಬಿಟ್ಟಿದ್ದಾರೆ. ಈಗ ರಾಜ್ಯದಲ್ಲಿ ಶೇ.60 ಬೋರ್‌ವೆಲ್‌ಗಳು ಬತ್ತಿ ಹೋಗಿವೆ. ಕುಡಿಯುವ ನೀರಿಗೂ ಸಮಸ್ಯೆ ಎದುರಾಗಿದೆ. ರೈತ ಹಾಗೂ ಬಡವರ ವಿರೋಧಿ ರಾಜ್ಯ ಸರ್ಕಾರಕ್ಕೆ ಲೋಕಸಭಾ ಚುನಾವಣೆಯಲ್ಲಿ ಜನರು ಕಾಂಗ್ರೆಸ್‌ಗೆ ತಕ್ಕ ಉತ್ತರ ಕೊಡುತ್ತಾರೆ ಎಂದು ಎಚ್ಚರಿಕೆ ನೀಡಿದರು.
    ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಆನಂದ್, ಮುಖಂಡರಾದ ನಿತ್ಯಾನಂದ, ವೈರಮುಡಿ, ಎಲ್ಲೇಗೌಡ, ರಜತ್, ನವೀನ್, ಶಿವಲಿಂಗಯ್ಯ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts