ಜಿಲ್ಲೆಯಲ್ಲಿ ಬಿಜೆಪಿಗೆ ಉತ್ತಮ ವಾತಾವರಣ

ಹನೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿಗೆ ಉತ್ತಮ ವಾತಾವರಣ ಸೃಷ್ಟಿಯಾಗಿದೆ. ಹಾಗಾಗಿ ಪಕ್ಷದ ಅಭ್ಯರ್ಥಿ ವಿ. ಶ್ರೀನಿವಾಸಪ್ರಸಾದ್ ಜಯ ಗಳಿಸಲಿದ್ದಾರೆ ಎಂದು ಬಿಜೆಪಿ ಹಿರಿಯ ಮುಖಂಡ ಡಾ.ದತ್ತೇಶ್‌ಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ಕ್ಷೇತ್ರ ವ್ಯಾಪ್ತಿಯ ಚಿಕ್ಕಲ್ಲೂರು, ಬಾಳಗುಣಸೆ, ತೆಳ್ಳನೂರು, ಕೊತ್ತನೂರು, ಸಿಂಗಾನಲ್ಲೂರು ಇನ್ನಿತರ ಗ್ರಾಮಗಳಲ್ಲಿ ಪಕ್ಷದ ಅಭ್ಯರ್ಧಿ ವಿ.ಶ್ರೀನಿವಾಸಪ್ರಸಾದ್ ಪರ ಮನೆಮನೆಗೆ ತೆರಳಿ ಮತಯಾಚಿಸಿದ ಬಳಿಕ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಕಳೆದ 5 ವರ್ಷದ ಅವಧಿಯಲ್ಲಿ ಉತ್ತಮ ಆಡಳಿತ ನೀಡಿದ್ದು, ಸಮರ್ಥ ನಾಯಕ ಎನಿಸಿಕೊಂಡಿದ್ದಾರೆ. ಪರಿಣಾಮವಾಗಿಯೇ ಕಳೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಗಳಿಸಿತು. ಕಾಂಗ್ರೆಸ್ 78 ಸ್ಥಾನಗಳಿಗೆ ತೃಪ್ತಿಪಟ್ಟಕೊಳ್ಳಬೇಕಾಯಿತು. ಇದರ ಫಲಿತಾಂಶವನ್ನು ತಿಳಿದಾಗ ರಾಜ್ಯದಲ್ಲಿ ಬಿಜೆಪಿಗೆ ಎಷ್ಟರ ಮಟ್ಟಿಗೆ ಬೆಂಬಲ ಇದೆ ಎಂಬುದನ್ನು ತಿಳಿದುಕೊಳ್ಳಬಹುದು ಎಂದರು.
ಆದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಹುಲ್‌ಗಾಂಧಿ ಅವರನ್ನು ಪ್ರಧಾನಮಂತ್ರಿ ಮಾಡ್ತೀವಿ ಎಂದು ಹೇಳುತ್ತಿದ್ದಾರೆ. ಆದರೆ, ಅವರ ಪಕ್ಷದಲ್ಲೇ ಒಡಕಿದೆ. ಅಲ್ಲದೇ ರಾಜ್ಯದಲ್ಲಿನ ಜೆಡಿಎಸ್ ಮತ್ತು ಕಾಂಗ್ರೆಸ್‌ನ ಮೈತ್ರಿ ಸರ್ಕಾರದಲ್ಲಿ ಹೊಂದಾಣಿಕೆ ಇಲ್ಲ. ಇಂತಹದರಲ್ಲಿ ರಾಹುಲ್‌ಗಾಂಧಿ ಹೇಗೆ ಪ್ರಧಾನಮಂತ್ರಿಯಾಗುತ್ತಾರೆ ಎಂದು ಪ್ರಶ್ನಿಸಿದರು.

ಕೊಳ್ಳೇಗಾಲ ಎಪಿಎಂಸಿ ಮಾಜಿ ಅಧ್ಯಕ್ಷ ರವೀಂದ್ರ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಗೊಂಡರು. ತಾಪಂ ಸದಸ್ಯ ಪುಟ್ಟಮಾದಯ್ಯ, ಬಿಜೆಪಿ ಹನೂರು ಮಂಡಲಾಧ್ಯಕ್ಷ ವೆಂಕಟಸ್ವಾಮಿ, ಜಿಪಂ ಮಾಜಿ ಅಧ್ಯಕ್ಷರಾದ ರಾಮಚಂದ್ರು, ಕೆ.ಕೆ ನಟರಾಜು, ಎಪಿಎಂಸಿ ಮಾಜಿ ಅಧ್ಯಕ್ಷ ರವೀಂದ್ರ, ಸಿಂಗಾನಲ್ಲೂರು ಗ್ರಾಪಂ ಉಪಾಧ್ಯಕ್ಷ ಮಲ್ಲೇಶ್, ಮುಖಂಡರಾದ ವೆಂಕಟೇಗೌಡ, ನಾಗರಾಜು ಇನ್ನಿತರರಿದ್ದರು.