More

    ಬಿಜೆಪಿ-ಜೆಡಿಎಸ್ ಮೈತ್ರಿ ಚಟುವಟಿಕೆ ಶುರು

    ಬೆಂಗಳೂರು: ಜೆಡಿಎಸ್ ನಾಯಕರು ಬಿಜೆಪಿ ವರಿಷ್ಠ ಬಿ.ಎಸ್.ಯಡಿಯೂರಪ್ಪ ಭೇಟಿ ಮಾಡುವ ಮೂಲಕ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯ ಅಧಿಕೃತ ಚಟುವಟಿಕೆ ಆರಂಭವಾದಂತಾಗಿದೆ.

    ಕೆಲವು ದಿನಗಳ ಹಿಂದಷ್ಟೇ ಕೇಂದ್ರ ಬಿಜೆಪಿ ನಾಯಕರ ಜತೆ ಜೆಡಿಎಸ್ ನಾಯಕರು ಮೈತ್ರಿ ೋಷಣೆ ಮಾಡಿಕೊಂಡಿದ್ದರು. ಬಳಿಕ ಬಿಜೆಪಿ ರಾಜ್ಯ ನಾಯಕರು ಅನೌಪಚಾರಕವಾಗಿ ಸಾಲು ಸಾಲಾಗಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದರು. ಭಾನುವಾರ ಮಾಜಿ ಸಿಎಂ ಕುಮಾರಸ್ವಾಮಿ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ತೆರಳಿ ಸಭೆ ನಡೆಸುವ ಮೂಲಕ ಮೈತ್ರಿಗೆ ರಾಜ್ಯ ಮಟ್ಟದಲ್ಲಿ ಮುನ್ನುಡಿ ಬರೆದರು. ಮುಂಬರುವ ಲೋಕಸಭೆ ಚುನಾವಣೆ ಮಾತ್ರವಲ್ಲದೆ, ವಿಧಾನ ಪರಿಷತ್ ಚುನಾವಣೆ ಕುರಿತೂ ಚರ್ಚಿಸಿದ್ದಾರೆ. ಉಭಯ ಪಕ್ಷಗಳ ನಾಯಕರ ನಡುವೆ ಸಮನ್ವಯ ಸಾಧಿಸುವುದು, ಲೋಕಸಭೆ ಟಿಕೆಟ್ ಹಂಚಿಕೆ ಹಾಗೂ ವಿಧಾನ ಪರಿಷತ್ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ್ದಾರೆ.

    ಕಾರ್ಯಕರ್ತರ ಬೆಸುಗೆಗೆ ಚಿಂತನೆ

    ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರನ್ನು ಒಂದು ವೇದಿಕೆಗೆ ಕರೆತರುವ ಮತ್ತು ಅವರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಚರ್ಚೆ ನಡೆದಿದೆ. ಸರ್ಕಾರದ ವಿರುದ್ಧ ನಡೆಯುವ ಎಲ್ಲ ಹೋರಾಟಗಳಲ್ಲೂ ಜೆಡಿಎಸ್ ಕಾರ್ಯಕರ್ತರನ್ನು ಒಳಗೊಳಿಸಿಕೊಳ್ಳಲು ಉಭಯ ಪಕ್ಷಗಳ ನಾಯಕರು ಚಿಂತನೆ ನಡೆಸಿದರು ಎನ್ನಲಾಗಿದೆ.

    ಮೈತ್ರಿ ಅಭ್ಯರ್ಥಿ ಕಣಕ್ಕಿಳಿಸಲು ಸಹಮತ

    ವಿಧಾನ ಪರಿಷತ್ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಂಬಂಧ ಬಿಜೆಪಿ, ಜೆಡಿಎಸ್ ನಾಯಕರು ಸಹಮತ ವ್ಯಕ್ತಪಡಿಸಿದರು. ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ, ವಿಧಾನ ಪರಿಷತ್ ಸದಸ್ಯರಾದ ತಿಪ್ಪೇಸ್ವಾಮಿ, ಬೋಜೇಗೌಡ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಬೆಂಗಳೂರು ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಕೆ.ಪಿ.ರಂಗನಾಥ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದಗೌಡ, ಬಸವರಾಜ ಬೊಮ್ಮಾಯಿ, ಮಾಜಿ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ.ಸಿ.ಎನ್.ಅಶ್ವತ್ಥನಾರಾಯಣ, ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಈ ಸಭೆಯಲ್ಲಿ ಭಾಗವಹಿಸಿದ್ದರು.

    ಸಭೆಯ ಮಾಹಿತಿ ಹೈಕಮಾಂಡ್‌ಗೆ ರವಾನೆ

    ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಸಮ್ಮುಖದಲ್ಲಿ ಉಭಯ ಪಕ್ಷಗಳ ಪ್ರಮುಖ ನಾಯಕರು ಪ್ರಥಮ ಹಂತದ ಸಭೆ ನಡೆಸಿದ್ದೇವೆ. ಶಿಕ್ಷಕರ ಕ್ಷೇತ್ರದ ಉಪಚುನಾವಣೆ, ಮುಂಬರುವ ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವ ಸಂಬಂಧ ಚರ್ಚಿಸಲಾಗಿದೆ. ಈ ಸಭೆಯ ಮಾಹಿತಿಯನ್ನು ಬಿಜೆಪಿ ಹೈಕಮಾಂಡ್‌ಗೆ ತಲುಪಿಸಲಾಗುವುದು. ಮುಂಬರುವ ಲೋಕಸಭೆ ಚುನಾವಣೆಗೆ ಶಿಕ್ಷಕರ ಕ್ಷೇತ್ರದ ಉಪಚುನಾವಣೆಯಿಂದಲೇ ಸಂದೇಶವನ್ನು ನೀಡಲಿದ್ದೇವೆ ಎಂದು ಹೇಳಿದರು.
    ಪ್ರಧಾನಿ ಮೋದಿ ಕೈ ಬಲಪಡಿಸಲು ಉಭಯ ಪಕ್ಷಗಳು ಒಟ್ಟಾಗಿ ಹೋಗುತ್ತೇವೆ. ರಾಜ್ಯದಲ್ಲಿ ಕೆಟ್ಟ ಸರ್ಕಾರವಿದೆ ಅದು ತೊಲಗಬೇಕು ಎಂದರು.

    ಅರ್ಥಪೂರ್ಣ ಚರ್ಚೆ ನಡೆದಿದೆ

    ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಹಿರಿಯರು ಸಭೆ ಸೇರಿ ಮುಂದಿನ ವಿಧಾನ ಪರಿಷತ್ ಉಪ ಚುನಾವಣೆ, ವಿಧಾನ ಪರಿಷತ್ತಿನ ಉಳಿದ 6 ಸ್ಥಾನಗಳ ಚುನಾವಣೆ ಕುರಿತು ಚರ್ಚಿಸಿದ್ದೇವೆ ಎಂದು ತಿಳಿಸಿದರು.
    ಎಲ್ಲ ಕ್ಷೇತ್ರಗಳ ಕುರಿತು ಸವಿಸ್ತಾರವಾಗಿ ಚರ್ಚೆ ಆಗಿದೆ. ಚರ್ಚಿತ ಅಂಶಗಳ ಕುರಿತಂತೆ ನಮ್ಮ ರಾಷ್ಟ್ರೀಯ ಅಧ್ಯಕ್ಷರ ಗಮನಕ್ಕೆ ತಂದು ಅತಿ ಶೀಘ್ರವೇ ಅಭ್ಯರ್ಥಿಗಳ ಘೋಷಣೆಗೆ ತೀರ್ಮಾನಿಸಿದ್ದೇವೆ. ಅರ್ಥಪೂರ್ಣ ಚರ್ಚೆ ನಡೆದಿದೆ. ಕಾರ್ಯಕರ್ತರು ತಳಮಟ್ಟದಲ್ಲಿ ಹೊಂದಿಕೊಂಡು ಹೋಗುವ ಸಮಸ್ಯೆ ಇಲ್ಲ ಎಂದು ನುಡಿದರು.
    ಲೋಕಸಭೆ ಚುನಾವಣೆ ಸಂಬಂಧ ಮುಂದಿನ ದಿನಗಳಲ್ಲಿ ವರಿಷ್ಠರು ಚರ್ಚಿಸಲಿದ್ದಾರೆ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು.
    ಯಡಿಯೂರಪ್ಪ, ಕುಮಾರಸ್ವಾಮಿ ಸೇರಿ ವಿಧಾನ ಪರಿಷತ್ ಚುನಾವಣೆ ಸಂಬಂಧ ಚರ್ಚೆ ಮಾಡಿದ್ದೇವೆ. ಅಭ್ಯರ್ಥಿ ವಿಷಯದಲ್ಲಿ ಗೊಂದಲ ಇಲ್ಲ ಎಂದು ಹೇಳಿದರು.

    ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಜ.22 ರಂದು ಸಾರ್ವಜನಿಕ ರಜೆ ಘೋಷಿಸಬೇಕು.
    -ಬಿ.ವೈ.ವಿಜಯೇಂದ್ರ, ರಾಜ್ಯ ಬಿಜೆಪಿ ಅಧ್ಯಕ್ಷ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts