More

    ಬಿಜೆಪಿ ಜೆಡಿಎಸ್ ಸಮನ್ವಯ ಸಮಿತಿ ಸಭೆ ಯಶಸ್ವಿ

    ಚಿಕ್ಕಮಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸುವ ಸಂಬಂಧ ನಗರದ ಹೋಟೆಲ್ ಒಂದರಲ್ಲಿ ನಡೆದ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರ ಸಮನ್ವಯ ಸಮಿತಿ ಸಭೆ ಯಶಸ್ವಿಯಾಗಿದೆ.

    ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ, ಮಾಜಿ ಸಚಿವ ಸಿ.ಟಿ.ರವಿ, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ನೇತೃತ್ವದಲ್ಲಿ ನಡೆದ ವಿವಿಧ ಮುಖಂಡರನ್ನು ಒಳಗೊಂಡ ಸಭೆಯಲ್ಲಿ ಲೋಕಸಭಾ ಚುನಾವಣೆಯನ್ನು ಯಾವುದೇ ಗೊಂದಲವಿಲ್ಲದೆ ಯಶಸ್ವಿಯಾಗಿ ನಡೆಸುವ ಮೂಲಕ ಮೈತ್ರಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಗೆಲ್ಲಿಸಲು ನಿರ್ಣಯ ಕೈಗೊಳ್ಳಲಾಯಿತು.
    ಈ ಹಿಂದಿನ ಚುನಾವಣೆಗಳಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಪರಸ್ಪರ ವಿರುದ್ಧವಾಗಿ ಕಾರ್ಯನಿರ್ವಹಿಸಿದ್ದರು. ಹೀಗಾಗಿ ಮೇಲ್ಮಟ್ಟದಲ್ಲಿ ಕೇವಲ ನಾಯಕರು ಮಾತ್ರ ಒಂದಾಗಿ ಚುನಾವಣೆ ನಡೆಸಲು ಮುಂದಾಗುವ ಬದಲು ತಳಮಟ್ಟದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರಲ್ಲಿ ಸಮನ್ವಯ ಸಾಧಿಸಲು ಏನೇನು ಕ್ರಮ ಕೈಗೊಳ್ಳಬೇಕು ಎಂಬ ಕುರಿತೂ ಸಭೆಯಲ್ಲಿ ಚರ್ಚಿಸಲಾಯಿತು.
    ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್. ದೇವರಾಜ್ ಶೆಟ್ಟಿ, ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಗೆಲುವಿಗೆ ಏನೆಲ್ಲಾ ಕ್ರಮ ಕೈಗೊಳ್ಳಬೇಕು ಹಾಗೂ ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರು ತಳಮಟ್ಟದಲ್ಲಿ ಸಮನ್ವಯತೆ ಸಾಧಿಸಿ ಹೇಗೆ ಪ್ರಚಾರ ನಡೆಸಬೇಕು ಎಂಬ ಬಗ್ಗೆ ಚರ್ಚಿಸಲಾಗಿದೆ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಎಲ್ಲಾ ಮುಖಂಡರು ಸೂಕ್ತ ಸಲಹೆ ನೀಡಿದ್ದಾರೆ ಆ ಸಲಹೆಗಳ ಆಧಾರದ ಮೇಲೆಯೇ ಚುನಾವಣೆ ನಡೆಸಲಾಗುವುದು ಎಂದರು.
    ವಿಧಾನಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಮಾತನಾಡಿ, ಈ ಹಿಂದಿನ ಚುನಾವಣೆಗಳಲ್ಲಿ ನಾವುಗಳು ಪರಸ್ಪರ ಎದುರಾಳಿಗಳಾಗಿ ಕೆಲಸ ಮಾಡಿದ್ದೆವು. ಇದೀಗ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ, ನಮ್ಮ ಗುರಿ ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸುವುದೇ ಆಗಿದೆ ಎಂದರು.
    ಜೆಡಿಎಸ್ ರಾಜ್ಯ ಮುಖಂಡ ಸುಧಾಕರ ಶೆಟ್ಟಿ ಮಾತನಾಡಿ, ಬಿಜೆಪಿ ಕಾರ್ಯಕರ್ತರೊಂದಿಗೆ ಸಮನ್ವಯತೆ ಸಾಧಿಸಿ ಚುನಾವಣಾ ಪ್ರಚಾರ ನಡೆಸಲು ಪಕ್ಷದ ಹಿರಿಯ ನಾಯಕರಿಂದ ಸೂಚನೆ ಬಂದಿದೆ. ಮೈತ್ರಿ ಅಭ್ಯರ್ಥಿಯನ್ನು ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸುವ ಜವಾಬ್ದಾರಿ ನೀಡಿದ್ದಾರೆ. ಪಕ್ಷದ ನಾಯಕರು ನೀಡಿರುವ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿ ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಹೇಳಿದರು.
    ಸಭೆಯಲ್ಲಿ ಮಾಜಿ ಸಚಿವರಾದ ಸಿ.ಟಿ.ರವಿ, ಡಿ.ಎನ್.ಜೀವರಾಜ್, ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅಜಿತ್ ಕುಮಾರ್, ಮಂಜಪ್ಪಯ್ಯ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts