More

    ಮೈತ್ರಿಗೆ ಅಪವಾದ ಬಾರದಂತೆ ಶ್ರಮಿಸಿ

    ಪಾಂಡವಪುರ: ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರು ಮೈತ್ರಿಕೂಟದ ಅಭ್ಯರ್ಥಿ ನಿಖಿಲ್‌ಕುಮಾರಸ್ವಾಮಿಗೆ ದ್ರೋಹ ಮಾಡಿದರು. ಆ ರೀತಿಯ ಅಪವಾದ ಬಿಜೆಪಿಗೆ ಬಾರದಂತೆ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್ ಕರೆ ನೀಡಿದರು.

    ತಾಲೂಕಿನ ಜಕ್ಕನಹಳ್ಳಿಯಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಬಿಜೆಪಿ ಸೇರ್ಪಡೆ ಮತ್ತು ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹೈಕಮಾಂಡ್ ಸೂಚನೆಯಂತೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರನ್ನು ಬೆಂಬಲಿಸಿತ್ತು. ಆದರೆ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಕೂಟದಿಂದ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿಗೆ ಕಾಂಗ್ರೆಸ್ ನಾಯಕರು ಕೈಕೊಟ್ಟರು. ಬಿಜೆಪಿಗೆ ಇಂತಹ ಅಪವಾದ ಬರಬಾರದು. ಇದಕ್ಕಾಗಿ ಜೆಡಿಎಸ್ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸುವ ನಿಟ್ಟಿನಲ್ಲಿ ಶಕ್ತಿಮೀರಿ ಕೆಲಸ ಮಾಡಬೇಕು. ಎರಡು ಪಕ್ಷಗಳ ಕಾರ್ಯಕರ್ತರ ಸಮನ್ವಯತೆಗಾಗಿ ಏ.2ರಂದು ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ಜಂಟಿ ಸಭೆ ಕರೆಯಲಾಗಿದೆ ಎಂದರು.

    ರೈತಮೋರ್ಚಾ ಜಿಲ್ಲಾಧ್ಯಕ್ಷ ಅಶೋಕ್ ಜಯರಾಮ್ ಮಾತನಾಡಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆಗಿನ ಶಾಸಕರ ಮೇಲಿದ್ದ ಕೋಪಕ್ಕೆ ಮತದಾರರು ಬೇರೆ ಬೇರೆ ನಿರ್ಧಾರ ಕೈಗೊಂಡರು. ಅಧಿಕಾರ ಯಾರಿಗೂ ಶಾಶ್ವತವಲ್ಲ. ಐದಾರು ಬಾರಿ ಶಾಸಕರು, ಸಂಸದರು ಆಗಿದ್ದವರು ಅನ್ಯ ಕಾರಣಗಳಿಂದ ಟಿಕೆಟ್ ವಂಚಿತರಾಗಿದ್ದಾರೆ. ಅಧಿಕಾರ ಇದ್ದಾಗ ಸಮಯ ವೇಗವಾಗಿ ಕಳೆಯುತ್ತದೆ. ಈ ಅವಧಿಯನ್ನು ಸಮರ್ಥವಾಗಿ ಬಳಸಿಕೊಂಡು ಪಕ್ಷ ಸಂಘಟನೆ ಮಾಡಬೇಕು ಎಂದು ತಿಳಿಸಿದರು.

    ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಸ್‌ಎನ್‌ಟಿ ಸೋಮಶೇಖರ್ ಮಾತನಾಡಿ, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗೆ ಮೇಲುಕೋಟೆ ಕ್ಷೇತ್ರದಲ್ಲಿ ಹೆಚ್ಚಿನ ಮತ ನೀಡುವುದರ ಮೂಲಕ ಡಾ.ಇಂದ್ರೇಶ್ ಅವರಿಗೆ ಗೌರವ ತರುವಂತಹ ಕೆಲಸವನ್ನು ಬಿಜೆಪಿ ಕಾರ್ಯಕರ್ತರು ಮಾಡಬೇಕಿದೆ. ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಕೆಲಸ ಮಾಡಿ ಮೈತ್ರಿಕೂಟ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದರು.

    ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಮಂಗಳಾ ನವೀನ್, ಕ್ಷೇತ್ರಾಧ್ಯಕ್ಷ ನೀಲನಹಳ್ಳಿ ಧನಂಜಯ, ಮಾಜಿ ಅಧ್ಯಕ್ಷ ಎಲ್.ಅಶೋಕ್, ಪುರುಷೋತ್ತಮ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts