More

    ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ

    ನಂಜನಗೂಡು: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ನಗರದಲ್ಲಿ ಬಿಜೆಪಿ ಮಹಿಳಾ ಮೋರ್ಚಾದಿಂದ ಮಂಗಳವಾರ ಮೇಣದ ಬತ್ತಿ ಹಚ್ಚಿ ನಮನ ಸಲ್ಲಿಸಿ, ಪ್ರತಿಭಟನೆ ನಡೆಸಲಾಯಿತು.


    ಪಟ್ಟಣದಲ್ಲಿ ಮೌನ ಮೆರವಣಿಗೆ ನಡೆದ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರು, ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಸಮಾವೇಶಗೊಂಡರು. ಬಳಿಕ ಮೇಣವನ್ನು ಹಚ್ಚಿ ನೇಹಾ ಹಿರೇಮಠ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
    ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಂದಿನಿ ಮಹೇಶ್ ಮಾತನಾಡಿ, ಮಹಿಳೆಯರಿಗೆ ಗ್ಯಾರಂಟಿ ಯೋಜನೆಗಳನ್ನು ನೀಡಿರುವುದಾಗಿ ಬೊಬ್ಬೆ ಹೊಡೆಯುವ ರಾಜ್ಯ ಕಾಂಗ್ರೆಸ್ ಸರ್ಕಾರ ಮೊದಲು ಹೆಣ್ಣು ಮಕ್ಕಳ ಪ್ರಾಣ ರಕ್ಷಣೆಗೆ ಗ್ಯಾರಂಟಿ ಕೊಡಲಿ. ಹಾಡಹಗಲೇ ಒಬ್ಬ ವಿದ್ಯಾರ್ಥಿನಿಯನ್ನು ಬರ್ಬರವಾಗಿ ಹತ್ಯೆ ಮಾಡುವ ಮಟ್ಟಕ್ಕೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದರೆ ಇದು ಇಡೀ ರಾಜ್ಯ ತಲೆ ತಗ್ಗಿಸುವ ವಿಚಾರ ಎಂದು ಕಿಡಿಕಾರಿದರು.
    ಇಡೀ ರಾಜ್ಯವೇ ನೇಹಾ ಹಿರೇಮಠ ಸಾವಿಗೆ ಮರುಕ ವ್ಯಕ್ತಪಡಿಸುತ್ತಿದ್ದರೆ, ಇತ್ತ ಜವಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ ಸೇರಿದಂತೆ ಸಚಿವರು ನೀಡುವ ಹೇಳಿಕೆ ನೋಡಿದರೆ ಇವರಿಗೆ ಹೆಣ್ಣು ಮಕ್ಕಳ ಬಗ್ಗೆ ಕಾಳಜಿ ಇದ್ದಂತೆ ಕಾಣುತ್ತಿಲ್ಲ ಎಂಬುದು ಸ್ಪಷ್ಟವಾಗಿ ಗೋಚರವಾಗುತ್ತಿದೆ. ಸರ್ಕಾರದ ಭಾಗವಾಗಿರುವ ಸಚಿವರಿಂದ ವ್ಯತಿರಿಕ್ತ ಹೇಳಿಕೆಗಳನ್ನು ಜನತೆ ನಿರೀಕ್ಷಿಸಿರಲಿಲ್ಲ. ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡಲು ಶಕ್ತರಲ್ಲದ ಕಾಂಗ್ರೆಸ್ ಸರ್ಕಾರಕ್ಕೆ ಲೋಕಸಭಾ ಚುನಾವಣೆಯಲ್ಲಿ ಮಹಿಳೆಯರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.


    ನೇಹಾ ಹಿರೇಮಠ ಅವರನ್ನು ಕೊಲೆಗೈದವನನ್ನು ಕೂಡಲೇ ಗಲ್ಲುಶಿಕ್ಷೆಗೆ ಗುರಿಪಡಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ವಹಿಸಬೇಕು. ಆ ಮೂಲಕ ನೊಂದ ಕುಟುಂಬಕ್ಕೆ ಸೂಕ್ತ ನ್ಯಾಯ ದೊರಕಿಸಿಬೇಕು. ಇಲ್ಲವಾದಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಮೂಲಕ ಸರ್ಕಾರಕ್ಕೆ ಛೀಮಾರಿ ಹಾಕುವುದಾಗಿ ಎಚ್ಚರಿಸಿದರು.


    ಪ್ರತಿಭಟನೆಯಲ್ಲಿ ನಗರಸಭಾ ಸದಸ್ಯರಾದ ಮೀನಾಕ್ಷಿ ನಾಗರಾಜು, ವಿಜಯಲಕ್ಷ್ಮೀ, ಮಹದೇವಮ್ಮ, ಗಾಯತ್ರಿ, ಮಹದೇವ ಪ್ರಸಾದ್, ಮಹಿಳಾ ಮೋರ್ಚಾ ಗ್ರಾಮಾಂತರ ಅಧ್ಯಕ್ಷೆ ಜ್ಯೋತಿ, ನಗರಾಧ್ಯಕ್ಷೆ ಗಾಯತ್ರಿ, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಧುರಾಜ್, ಗ್ರಾಮಾಂತರ ಅಧ್ಯಕ್ಷ ಗೋವರ್ಧನ್, ಸಿದ್ದರಾಜು, ಪ್ರೇಮ ಶಂಭಯ್ಯ, ಮಂಜುಳಾ, ಮಂಗಳಾ ಇತರರು ಇದ್ದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts