

ಬೆಂಗಳೂರು: ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗಿರುವ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾರೀ ಭ್ರಷ್ಟಾಚಾರ ಎಸಗಲಾಗಿದೆ ಎಂದು ಆರೋಪಿಸಿ ಬಿಜೆಪಿ ಶಾಸಕ ಮುನಿರತ್ನ (Munirathna) ಡಿಸಿಎಂ ಡಿಕೆ. ಶಿವಕುಮಾರ್ ವಿರುದ್ಧ ಲೋಕಾಯುಕ್ತ ಹಾಗೂ ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ್ದಾರೆ.
ಪಾಲಿಕೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಗುತ್ತಿಗೆಯನ್ನು ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಮತ್ತು ತೆಲಂಗಾಣ ಮುಖ್ಯಮಂತ್ರಿ ಅನುಮುಲ ರೇವಂತ್ ರೆಡ್ಡಿ ಅವರ ಸಂಬಂಧಿಗಳಿಗೆ ಗುತ್ತಿಗೆ ನೀಡಲು ಡಿ.ಕೆ ಶಿವಕುಮಾರ್ ಮುಂದಾಗಿದ್ದಾರೆ. ಜತೆಗೆ, ಗುತ್ತಿಗೆದಾರರಿಂದ ಡಿ.ಕೆ. ಶಿವಕುಮಾರ್ ಅವರ ಪರವಾಗಿ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್‌ಗೌಡ ಗುತ್ತಿಗೆದಾರರಿಂದ ಶೇ. 15 ಕಮಿಷನ್ ಈಗಾಗಲೇ ಪಡೆದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ವಿವಿಧ ಕಾಮಗಾರಿಗಳ ಗುತ್ತಿಗೆ ನೀಡಲು ಟೆಂಡರ್ ಕರೆಯದೆ ಗುತ್ತಿಗೆ ನೀಡುವ ತೀರ್ಮಾನ ಕೈಗೊಂಡು ಅಕ್ರಮ ನಡೆಸಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ನೇರವಾಗಿ ಈ ಅಕ್ರಮದಲ್ಲಿ ಭಾಗಿಯಾಗಿದ್ದು, ರಾಜ್ಯದ ಗುತ್ತಿಗೆದಾರರ ಬಿಡ್‌ಗಳನ್ನು ಅನಗತ್ಯವಾಗಿ ತಿರಸ್ಕರಿಸುತ್ತಿದ್ದಾರೆ. ಕೆಲವು ಕಾಮಗಾರಿಗಳಲ್ಲಿ ತಮ್ಮದೇ ಬೇನಾಮಿ ಕಂಪನಿಗಳ ಮೂಲಕ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದು, ಗುತ್ತಿಗೆ ಪಡೆದಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಸ್ಟಾರ್ ಚಂದ್ರು ಅವರ ಸ್ಟಾರ್ ಬಿಲ್ಡರ್ಸ್‌ಗೆ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ 232 ಕೋಟಿ ರೂ. ಮೊತ್ತದ ಕಾಮಗಾರಿಗಳ ಗುತ್ತಿಗೆ ನೀಡಲಾಗಿದೆ. ಈ ಅಕ್ರಮಗಳ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು. ಕಾಮಗಾರಿಗಳ ಗುತ್ತಿಗೆ ನೀಡಿಕೆ ಸ್ಥಳೀಯ ಗುತ್ತಿಗೆದಾರರನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಇದರಿಂದ ನಮ್ಮ ರಾಜ್ಯದ ಗುತ್ತಿಗೆದಾರರು ಬೇರೆ ರಾಜ್ಯದ ಶ್ರೀಮಂತ ಗುತ್ತಿಗೆದಾರರ ಗುಲಾಮರಾಗ್ತಿದ್ದಾರೆ ಎಂದು ಬಿಜೆಪಿ ಶಾಸಕ ಮುನಿರತ್ನ (Munirthna) ದೂರಿನಲ್ಲಿ ಉಲ್ಲೇಖಿಸಿದ್ದಾರೆ.