BJP National President | ಬಿಹಾರ ಚುನಾವಣೆ ಘೋಷಣೆಗೂ ಮುನ್ನವೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ನೇಮಕ ಸಾಧ್ಯತೆ!

BJP National President
Published on

BJP National President: ಬಿಹಾರ ವಿಧಾನಸಭಾ ಚುನಾವಣೆ ಘೋಷಣೆಗೂ ಮುನ್ನವೇ ಭಾರತೀಯ ಜನತಾ ಪಕ್ಷದ ನೂತನ ಹೊಸ ರಾಷ್ಟ್ರೀಯ ಅಧ್ಯಕ್ಷರನ್ನು ನೇಮಿಸಲು ಸಿದ್ಧತೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿಯ ಉನ್ನತ ಹುದ್ದೆಗೆ ಹೈಕಮಾಂಡ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಗೊಳಿಸಿದ್ದು, ಸೆಪ್ಟೆಂಬರ್ 9 ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಯ ನಂತರ ಸಮಾಲೋಚನಾ ಪ್ರಕ್ರಿಯೆ ನಡೆಸಿ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ವಾರಣಾಸಿಯಿಂದ ಲೋಕಸಭೆಯನ್ನು ಪ್ರತಿನಿಧಿಸಿದರೆ, ಕೇಂದ್ರ ಗೃಹ ಸಚಿವ ಅಮಿತ್ ಷಾ ಗುಜರಾತ್‌ನಿಂದ ಆಯ್ಕೆಯಾಗಿದ್ದಾರೆ ಆದ್ದರಿಂದ ರಾಷ್ಟ್ರೀಯ ಅಧ್ಯಕ್ಷರ ಹೆಸರನ್ನು ಘೋಷಿಸುವ ಮೊದಲು ಉತ್ತರ ಪ್ರದೇಶ, ಗುಜರಾತ್ ಮತ್ತು ಕರ್ನಾಟಕದಂತಹ ಪ್ರಮುಖ ರಾಜ್ಯಗಳ ಹೊಸ ರಾಜ್ಯಧ್ಯಕ್ಷರನ್ನು ನೇಮಿಸುವ ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ.

ಹೊಸ ಅಧ್ಯಕ್ಷರು ಸಂಘಟನೆಯನ್ನು ಬಲಪಡಿಸುವತ್ತ ಗಮನಹರಿಸುವ ಸಾಮರ್ಥ್ಯವಿರುವ ವ್ಯಕ್ತಿಯಾಗಿರುತ್ತಾರೆ ಹೊರತು, ಜಾತಿ, ಪ್ರಾದೇಶಿಕ ಅಥವಾ ಸಾಮಾಜಿಕ ಸಮೀಕರಣದ ಮಾನದಂಡವನ್ನು ಇಟ್ಟುಕೊಂಡು ಅಧ್ಯಕ್ಷರನ್ನು ಆಯ್ಕೆ ಮಾಡುವುದಿಲ್ಲ ಎಂದು ಬಿಜೆಪಿ ಹೈ ಕಮಾಂಡ್​​ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿರುವ ನಾಯಕರನ್ನು ಹೊರತುಪಡಿಸಿ ಬೇರೆ ಯಾವುದಾದರೂ ಅಚ್ಚರಿಯ ಹೆಸರು ಘೊಷಣೆಯಾಗಬಹುದಾ ಎನ್ನುವುದರ ಬಗ್ಗೆ ಇನ್ನು ಸ್ಪಷ್ಟತೆ ಇಲ್ಲ. ರಾಷ್ಟ್ರೀಯ ರಾಜಕಾರಣದಲ್ಲಿ ಅನುಭವ ಹೊಂದಿರುವ ವ್ಯಕ್ತಿಗೆ ಮಣೆ ಹಾಕಿದರು ಅಚ್ಚರಿಪಡಬೇಕಿಲ್ಲ.

ನಿರೀಕ್ಷೆಯಂತೆ ಬಿಹಾರ ಚುನಾವಣೆ ಘೋಷಣೆಯಾಗುವ ಮೊದಲು ಆಯ್ಕೆ ನಡೆಯದಿದ್ದರೆ, ಹೊಸ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಚುನಾವಣೆಯ ನಂತರವೇ ಕೈಗೊಳ್ಳಬಹುದು ಎನ್ನಲಾಗಿದೆ. ಪ್ರಸ್ತುತ ಜೆಪಿ ನಡ್ಡಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದು, 2019ರಿಂದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.(ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net