ದುಷ್ಟ, ಭ್ರಷ್ಟ ಸರ್ಕಾರದ ವಿರುದ್ಧ ಹೋರಾಟ - ವಿಜಯೇಂದ್ರ ಗುಡುಗು

BYV_office11
Published on

ತುಮಕೂರು: ಹೊಸದಾಗಿ ಅಸ್ತಿತ್ವಕ್ಕೆ ಬಂದ 6 ತಿಂಗಳಲ್ಲೇ ಜನಪ್ರಿಯತೆ ಕಳೆದುಕೊಂಡ ಸರ್ಕಾರ ದೇಶದಲ್ಲೇ ಮತ್ತೊಂದಿಲ್ಲ. ಈ ದುಷ್ಟ, ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ಇಳಿಯಬೇಕಿದೆ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗುಡುಗಿದರು.

ಸಿದ್ದಗಂಗಾಮಠಕ್ಕೆ ಭೇಟಿ ನೀಡಿದ ಬಳಿಕ ಭಾನುವಾರ ನಗರದ ಬಿಜೆಪಿ ಕಾರ್ಯಾಲಯದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಅಂಟಿ ಕೂರುವ ಪಕ್ಷವಲ್ಲ. ರಾಜ್ಯದಲ್ಲಿ ಅಧಿಕಾರಕ್ಕೇರಿರುವ ಕಾಂಗ್ರೆಸ್ ಸರ್ಕಾರವು ಐದೂವರೆ ತಿಂಗಳಲ್ಲೇ ಜನರ ವಿಶ್ವಾಸ ಕಳೆದುಕೊಂಡಿದೆ. ಈ ಸರ್ಕಾರದ ವಿರುದ್ಧ ಹೋರಾಟ ಮಾಡಲಾಗುವುದು ಎಂದರು.

25ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕು: ರಾಜ್ಯದಲ್ಲಿ 25ಕ್ಕು ಹೆಚ್ಚು ಸಂಸದರನ್ನು ಗೆಲ್ಲಿಸುವುದು ನಮ್ಮ ನಿಮ್ಮೆಲ್ಲರ ಗುರಿ. ಇಡೀ ಜಗತ್ತೇ ನಮ್ಮತ್ತ ತಿರುಗಿ ನೋಡುವಂತೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸುವ ಸಂಕಲ್ಪ ತೊಡಬೇಕಿದೆ ಎಂದು ವಿಜಯೇಂದ್ರ ಹುರಿದುಂಬಿಸಿದರು.

ನಮ್ಮ ಬಿಜೆಪಿ ಸಂಸ್ಕೃತಿ ವಿಶೇಷವಾದದ್ದು ರಾಷ್ಟ್ರೀಯ ಅಧ್ಯಕ್ಷರಿಗೆ ಗೌರವ ಕೊಡುವಷ್ಟೇ ಬೂತ್ ಮಟ್ಟದ ಅಧ್ಯಕ್ಷನಿಗೆ ಕೊಡುವ ಪರಂಪರೆ ನಮ್ಮಲ್ಲಿದೆ.ಎಂಎಲ್‌ಎ, ಪಕ್ಷದ ಅಧ್ಯಕ್ಷ ಇರಬಹುದು. ಅದಕ್ಕಿಂತ ಮಿಗಿಲಾಗಿ ಪಕ್ಷದ ನಿಷ್ಠಾವಂತ ಕಾರ್ಯಕರ್ತ ನಾನು ಎಂಬ ಹೆಮ್ಮ ಇದೆ. ಪಕ್ಷ ಸಂಘಟನೆಗೆ ಎಲ್ಲಾ ಜಿಲ್ಲೆಗೆ ಭೇಟಿ ನೀಡಿ ಕಾರ್ಯಕರ್ತರಲ್ಲಿ ವಿಶ್ವಾಸ ತುಂಬುತ್ತೇನೆ. ಪಕ್ಷದ ಅಧ್ಯಕ್ಷನಾಗಿ ನಿಯೋಜಿತನಾಗುತ್ತಿದ್ದಂತೆ ಬೆಂಗಳೂರಿನ ಗಾಂಧಿನಗರದ ಬೂತ್ ಮಟ್ಟದ ಅಧ್ಯಕ್ಷ ಮನೆಗೆ ಭೇಟಿ ನೀಡಿದ್ದೇನೆ. ರಾಜ್ಯವನ್ನು ಸುತ್ತಿ ಎಲ್ಲ ಹಿರಿಯರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟಿಸುವೆ ಎಂದರು.

ತುಮಕೂರು ಜಿಲ್ಲಾಧ್ಯಕ್ಷ ಎಚ್.ಎಸ್.ರವಿಶಂಕರ್, ಮಧುಗಿರಿ ಜಿಲ್ಲಾಧ್ಯಕ್ಷ ಬಿ.ಕೆ.ಮಂಜುನಾಥ್, ಗ್ರಾಮಾಂತರ ಶಾಸಕ ಬಿ.ಸುರೇಶಗೌಡ, ರಾಜ್ಯ ಉಪಾಧ್ಯಕ್ಷ ಎಂ.ಬಿ.ನಂದೀಶ್, ಮಾಜಿ ಎಂಎಲ್ಸಿಗಳಾದ ಡಾ.ಎಂ.ಆರ್.ಹುಲಿನಾಯ್ಕರ್, ಎಂ.ಡಿ.ಲಕ್ಷ್ಮೀನಾರಾಯಣ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net