More

    ಬಿಜೆಪಿಯಿಂದ ರಾಜ್ಯದ ಬೊಕ್ಕಸ ಲೂಟಿ: ಜಿಲ್ಲಾ ಕಾಂಗ್ರೆಸ್ ವೀಕ್ಷಕ ಕುಸುಮ್‌ಕುಮಾರ್ ಚೌಧರಿ ಆರೋಪ

    ಮಂಡ್ಯ: ಶಾಸಕರನ್ನು ದನಗಳ ರೀತಿ ವ್ಯಾಪಾರ ಮಾಡಿ ಅಧಿಕಾರಕ್ಕೆ ಬಂಧ ಪ್ರಜಾಪ್ರಭುತ್ವ ವಿರೋಧಿ ಬಿಜೆಪಿ ಸರ್ಕಾರ 20ಕ್ಕೂ ಹೆಚ್ಚು ಹಗರಣಗಳನ್ನು ಮಾಡಿ ರಾಜ್ಯದ ಬೊಕ್ಕಸವನ್ನು ಲೂಟಿ ಮಾಡಿದೆ ಎಂದು ಜಿಲ್ಲಾ ಕಾಂಗ್ರೆಸ್ ವೀಕ್ಷಕ ಕುಸಮ್‌ಕುಮಾರ್ ಚೌಧರಿ ಟೀಕಿಸಿದರು.
    ರಾಜ್ಯದ ಪ್ರಜೆಗಳ ನಿರ್ಣಯಕ್ಕೆ ವಿರುದ್ಧವಾಗಿ ಬಿಜೆಪಿ ಆಡಳಿತಕ್ಕೆ ಬಂದಿತು. ಅಧಿಕಾರಕ್ಕಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನು ದನಗಳ ರೀತಿ ವ್ಯಾಪಾರ ಮಾಡಿದರು. ಮೂರುವರೆ ವರ್ಷಗಳಲ್ಲಿ ಹಗರಣಗಳಿಂದಲೇ ರಾಜ್ಯದ ಬೊಕ್ಕಸವನ್ನು ಲೂಟಿ ಮಾಡಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ದೂರಿದರು.
    ಪಿಎಸ್‌ಐ ಹಗರಣ, ರಾಘವೇಂದ್ರ ಬ್ಯಾಂಕ್ ಹಗರಣ, ಪದವಿ ಕಾಲೇಜು ಉಪನ್ಯಾಸಕರ ಹಗರಣ, ಶಿಕ್ಷಕರ ನೇಮಕಾತಿ ಹಗರಣ ಸೇರಿದಂತೆ ಹಲವು ಹಗರಣಗಳಲ್ಲೇ ಸರ್ಕಾರ ಲೂಟಿ ಮಾಡಿದೆ. ಗುತ್ತಿಗೆದಾರರಿಂದ ಶೇ.40ರಷ್ಟು ಲಂಚವನ್ನು ಪಡೆದುಕೊಳ್ಳುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ ಶೇ.40 ರಷ್ಟು ಕಮೀಷನ್ ಸರ್ಕಾರವಾಗಿದೆ. ಅಭಿವೃದ್ಧಿ ಮಾಡದೇ ಹಗರಣದಲ್ಲೇ ಕಾಲ ಕಳೆಯುತ್ತಿದೆ ಎಂದು ಆರೋಪಿಸಿದ ಅವರು, ಸೋ ಕಾಲ್ಡ್ ಡಬ್ಬಲ್ ಇಂಜಿನ್ ಸರ್ಕಾರ ರಾಜ್ಯದಲ್ಲಿ ಆಡಳಿತ ನಡೆಸುವಲ್ಲಿ ವಿಫಲವಾಗಿದೆ. ಕರೊನಾ ಸಂದರ್ಭದಲ್ಲಿ ರಾಜ್ಯದಲ್ಲಿ 3 ಲಕ್ಷಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಆದರೂ ದಯೆ ಇಲ್ಲದ ಸರ್ಕಾರವಾಗಿದೆ. ಕೋವಿಡ್ ಸಂದರ್ಭದಲ್ಲೂ ಹಗರಣ ಮಾಡಿ ಲೂಟಿ ಮಾಡಿದೆ ಎಂದರು.
    ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ಹೃದಯವೇ ಇಲ್ಲದ ಸರ್ಕಾರ. ರೈತರ ಜೀವದ ಜತೆ ಚೆಲ್ಲಾಟವಾಡುತ್ತಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ರೈತರಿಗೆ ಉತ್ತಮ ಸ್ಥಾನವನ್ನು ನೀಡಲಾಗಿತ್ತು. ರೈತರ ರಕ್ಷಣೆಗೆ ಕ್ರಮ ಕೈಗೊಳ್ಳಲಾಗಿತ್ತು. ಸಾಲ ಮನ್ನಾ ಮಾಡಲಾಗಿತ್ತು. ಆದರೆ, ಇದು ಕಣ್ಣು, ಬಾಯಿ ಮುಚ್ಚಿಕೊಂಡಿರುವ ನಿರ್ಧಯಿ ಸರ್ಕಾರ. 2023ರ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಎಲ್ಲ ಕ್ಷೇತ್ರಗಳಲ್ಲೂ ಸಂಚಾರ ಮಾಡಿ ಮತದಾರರ ಅಭಿಪ್ರಾಯ ಸಂಗ್ರಹ ಮಾಡಿದ್ದೇನೆ. ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಹೋರಾಟವಿದೆ. ಆದ್ದರಿಂದ ಬಿಜೆಪಿ ಲೆಕ್ಕಕ್ಕಿಲ್ಲ ಎಂದರು.
    ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ ಮಾತನಾಡಿ, ಜಿಲ್ಲಾ ಕಾಂಗ್ರೆಸ್‌ನಲ್ಲಿ ಗೊಂದಲವಿಲ್ಲ. ಹಿರಿಯ ಕಾಂಗ್ರೆಸ್ ನಾಯಕರು ಪಕ್ಷದ ಸಂಘಟನೆಯಲ್ಲಿ ತೊಡಗಿಕೊಂಡಿದ್ದಾರೆ. ಕಾಂಗ್ರೆಸ್‌ನ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ರೈತರ ಸಾಲ ಮನ್ನಾ ಮಾಡಿ ರೈತರ ರಕ್ಷಣೆಗೆ ಧಾವಿಸಲಾಗಿತ್ತು. ಜಿಲ್ಲೆಯಲ್ಲಿ 500ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡ ಸಂದರ್ಭದಲ್ಲಿ ಅವರ ಕುಟುಂಬದ ಜತೆ ಕಾಂಗ್ರೆಸ್ ಇತ್ತು. ಸಾಲ ಮನ್ನಾ ಮಾಡುವ ಮೂಲಕ ರೈತರಿಗೆ ಸ್ಥೈರ್ಯ ತುಂಬಿದ್ದೇವೆ. ಜಿಲ್ಲೆಯಲ್ಲಿ ಜ. 27ರಂದು ಪ್ರಜಾಧ್ವನಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
    ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಡಾ.ಎಚ್.ಕೃಷ್ಣ, ಮುಖಂಡರಾದ ರುದ್ರಪ್ಪ, ಅಪ್ಪಾಜಿಗೌಡ, ವಿಜಯಲಕ್ಷ್ಮೀ ರಘುನಂದನ್, ಕಿರಣ್ ಕುಮಾರ್ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts