More

    ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆಗೆ ಖಂಡನೆ ನಗರದಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ

    ಮಂಡ್ಯ: ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಭೀಕರ ಹತ್ಯೆ ಖಂಡಿಸಿ ಹಾಗೂ ರಾಜ್ಯದಲ್ಲಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯ, ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ವಿರೋಧಿಸಿ ನಗರದಲ್ಲಿ ಸೋಮವಾರ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.
    ಜಯಚಾಮರಾಜೇಂದ್ರ ಒಡೆಯರ್ ವೃತ್ತದಿಂದ ಮೆರವಣಿಗೆ ಹೊರಟ ಪಕ್ಷದ ಕಾರ್ಯಕರ್ತರು ಮತ್ತು ಕಾಲೇಜು ವಿದ್ಯಾರ್ಥಿಗಳು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗುತ್ತಾ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ರಾಜ್ಯಪಾಲರಿಗೆ ಮನವಿ ಪತ್ರ ರವಾನಿಸಿದರು. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸಿದೆ. ಲವ್ ಜಿಹಾದ್‌ಗೆ ಕಡಿವಾಣ ಹಾಕದ ಸರ್ಕಾರ ಎಂದು ಭಿತ್ತಿ ಫಲಕ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು.
    ವಿದ್ಯಾರ್ಥಿನಿ ನೇಹಾಳನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಕಾರ್ಪೊರೇಟರ್ ಮಗಳಿಗೆ ಸುರಕ್ಷತೆ ಇಲ್ಲವಾಗಿದ್ದು, ಜನಸಾಮಾನ್ಯರ ರಕ್ಷಣೆ ಹೇಗೆ ಎಂಬುದು ಪ್ರಶ್ನೆಯಾಗಿದೆ. ಕೊಲೆಗಾರ ಫಯಾಜ್‌ಗೆ ಮರಣದಂಡನೆ ಶಿಕ್ಷೆ ವಿಧಿಸಬೇಕು. ನೇಹಾ ಪಾಲಕರಿಗೆ ಮುಖ್ಯಮಂತ್ರಿ ಸಾಂತ್ವನ ಹೇಳಲಿಲ್ಲ. ವೈಯಕ್ತಿಕ ಕಾರಣಕ್ಕೆ ಪ್ರಕರಣ ನಡೆದಿದೆ ಎಂದು ಹಗುರವಾಗಿ ಮಾತನಾಡಿ ನಿರ್ಲಕ್ಷೃತೆ ತೋರಿದ್ದಾರೆ. ವಿದ್ಯಾರ್ಥಿನಿ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಆಗ ಮಾತ್ರ ರಾಜ್ಯದಲ್ಲಿ ಇಂತಹ ಕ್ರೂರ ಹತ್ಯೆಗಳು ಮರುಕಳಿಸದಂತೆ ತಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು
    ಕಳೆದ ಮೂರು ದಿನದಿಂದ ರಾಜ್ಯದಲ್ಲಿ 8 ಹತ್ಯೆಗಳು ನಡೆದಿದ್ದರೂ, ರಾಜ್ಯ ಕಾಂಗ್ರೆಸ್ ಸರ್ಕಾರ ಕಣ್ಮುಚ್ಚಿ ಕುಳಿತಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಅಲ್ಪಸಂಖ್ಯಾತರ ತುಷ್ಟಿಕರಣ ನೀತಿ ಅನುಸರಿಸಿದೆ. ಇಂತಹ ಅನುಕೂಲಕರ ರಾಜಕಾರಣವು ಮೊದಲಿಂದಲೂ ಕಾಂಗ್ರೆಸ್ ಅನುಸರಿಸಿದೆ. ಕೆ.ಜಿ.ಹಳ್ಳಿ ಮತ್ತು ಡಿ.ಜಿ ಹಳ್ಳಿಯಲ್ಲಿ ತನ್ನದೇ ಪಕ್ಷದ ಶಾಸಕರ ಮೇಲೆ ದಾಳಿ ನಡೆದರೂ ಸರ್ಕಾರ ಕ್ರಮವಹಿಸಲಿಲ್ಲ. ಮತ ಪಡೆಯುವುದಕ್ಕಾಗಿ ಅಲ್ಪಸಂಖ್ಯಾತರ ಓಲೈಸಿ, ದಲಿತರು, ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸಿರುವ ಮುಖ್ಯಮಂತ್ರಿ ನೈತಿಕ ಹೊಣೆ ಹೊರಬೇಕು. ಮಹಿಳೆಯರ ಬಗ್ಗೆ ಗೌರವ ಇದ್ದರೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
    ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಅಂದವರಿಗೆ ರಾಜ್ಯ ಸರ್ಕಾರ ಬೆಂಬಲವಾಗಿದೆ. ಕೊಲೆಗಡುಕರಿಗೆ ರಕ್ಷಣೆ ನೀಡುತ್ತಿರುವ ಹೊಣೆಗೇಡಿ, ನಾಲಾಯಕ್ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಮನೆಗೆ ಕಳುಹಿಸಲು ಹೋರಾಟ ಮಾಡಲಾಗುವುದು ಎಂದು ಆಕ್ರೋಶಿಸಿದರು.
    ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಎನ್.ಎಸ್.ಇಂದ್ರೇಶ್, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅಶೋಕ್ ಜಯರಾಂ, ಜಿಪಂ ಮಾಜಿ ಸದಸ್ಯ ಚಂದಗಾಲು ಶಿವಣ್ಣ, ನಗರ ಘಟಕದ ಮಾಜಿ ಅಧ್ಯಕ್ಷ ಅರವಿಂದ್, ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್, ವಿದ್ಯಾನಾಗೇಂದ್ರ,ನಾಗಾನಂದ, ಕೆ.ಎಲ್.ಆನಂದ್, ಶ್ರೀಧರ್, ವಿವೇಕ್, ಅರುಣ್‌ಕುಮಾರ್, ರವಿಕುಮಾರ್, ಬಿ.ಟಿ.ಶಿವಲಿಂಗಯ್ಯ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts