21ಕ್ಕೆ ಅಭ್ಯರ್ಥಿಗಳ ಆಯ್ಕೆ ಸಭೆ

ಬೆಂಗಳೂರು: ಲೋಕಸಭಾ ಚುನಾವಣೆಗೆ ಸಿದ್ದತೆ, ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಬಿಜೆಪಿ ಕೋರ್ ಕಮಿಟಿ ಸಭೆ ಫೆ.21ರಂದು ಬೆಂಗಳೂರಿ ನಲ್ಲಿ ನಡೆಯಲಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಭಾಗವಹಿಸುವ ನಿರೀಕ್ಷೆ ಇದ್ದು, ಚುನಾವಣೆಯಲ್ಲಿ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಮಾರ್ಗದರ್ಶನ ನೀಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಫೆ.22ರಿಂದ ರಾಜ್ಯಾದ್ಯಂತ ಪ್ರವಾಸ ನಡೆಸಲಿದ್ದಾರೆ. ಆ ಸಂದರ್ಭ ಸಂಘಟನೆಗೆ ಅಗತ್ಯ ಮಾರ್ಗದರ್ಶನ ಮಾಡಲಿದ್ದಾರೆ. ಹಾಲಿ ಸಂಸದರಿರುವ 16 ಕ್ಷೇತ್ರಗಳು ಸೇರಿ ಎಲ್ಲ ಕ್ಙ್ಷೇತ್ರಕ್ಕೂ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲಾಗುತ್ತಿದೆ. ಹಾಲಿ ಸಂಸದರ ಪೈಕಿ 1-2 ಕ್ಷೇತ್ರಗಳಲ್ಲಿ ಬದಲಾವಣೆಯಾಗುವ ಸಾಧ್ಯತೆಗಳಿವೆ. ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ಮಾಡಿದ ನಂತರ ಕೇಂದ್ರ ಚುನಾವಣಾ ಸಮಿತಿಗೆ ಪಟ್ಟಿ ರವಾನೆಯಾಗುತ್ತದೆ. ಚುನಾವಣಾ ಅಧಿಸೂಚನೆ ಹೊರಬೀಳುವ ಮುನ್ನವೇ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ಹೇಳಿವೆ.