

ಕಾರವಾರ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ 15ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ ಹಾಗೂ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 140 ಕ್ಷೇತ್ರಗಳನ್ನು ಗೆದ್ದು ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಕಾರವಾರ ಜಿಲ್ಲೆಯ ಯಲ್ಲಾಪುರದಲ್ಲಿ ಇಂದು ಬಿಜೆಪಿಯ ಜನಸ್ವರಾಜ್ ಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು. ವಿಧಾನ ಪರಿಷತ್ ಚುನಾವಣೆಯಲ್ಲಿ 15 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಭರವಸೆ ಇದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಯನ್ನು ಜನರಿಗೆ ತಲುಪಿಸುತ್ತೇವೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 140 ಕ್ಷೇತ್ರಗಳನ್ನು ಗೆದ್ದು ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಬಿಟ್ ಕಾಯಿನ್ ಬಗ್ಗೆ ಮಾಹಿತಿ ಇಲ್ಲದೆ ಚರ್ಚೆಯಾಗುತ್ತಿದೆ. ಯಾರಲ್ಲಿ ಈ ಬಗ್ಗೆ ಸರಿಯಾದ ಮಾಹಿತಿ ಇದೆಯೋ ಅವರು ನೀಡಿದರೆ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಯಾವ ಪಕ್ಷದವರೇ ಆದರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ ಎಂದರು.
ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಭತ್ತ, ಅಡಕೆ, ಶುಂಠಿ, ಜೋಳ ಮುಂತಾದ ಬೆಳೆಗಳಿಗೆ ಹಾನಿಯಾಗಿದೆ. ರೈತರಿಗೆ ಸೂಕ್ತ ಪರಿಹಾರ ನೀಡುವ ಕುರಿತು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ಶೀಘ್ರ ಆ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದರು.